ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ತುರ್ತು ನಿಗಾವಹಿಸಿ: ಡಿಸಿ

Vishwanath S
Updated On : 19 Aug 2013, 12:09 pm

ಕನ್ನಡಪ್ರಭ ವಾರ್ತೆ,ಹಾಸನ, ಆ.18
ಜಿಲ್ಲೆಯಲ್ಲಿ 2013 ಜುಲೈ ಅಂತ್ಯದವರೆಗೆ 61 ಡೆಂಘಿ ಹಾಗೂ 1552 ಕರುಳುಬೇನೆ ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಅನ್ಬುಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಮಟ್ಟದ ಸಾಂಕ್ರಾಮಿಕ ರೋಗಗಳ ಕಣ್ಗಾವಲು ಸಮಿತಿ ಸಭೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಸರ್ವೇಕ್ಷಣಾಧಿಕಾರಿ ಹಾಗೂ ಸಮಿತಿ ಸದಸ್ಯ ಕಾರ್ಯದರ್ಶಿ ಡಾ.ಎನ್.ಎನ್.ರಾಜಗೋಪಾಲ್ ತಿಳಿಸಿದರು.
ಕಾಲರಾ -5, ಅರಿಶಿಣ ಕಾಮಾಲೆ -68, ವಿಷಮಶೀತ ಜ್ವರ -1796, ಅತಿಸಾರ-9666, ಆಮಶಂಕೆ-5578 ಪ್ರಕರಣಗಳು ಪತ್ತೆಯಾಗಿವೆ. ವಿಷಾಹಾರ ಸೇವನೆ-150, ಕ್ಷಯರೋಗ-417, ಕುಷ್ಠರೋಗ-11 ಹಾಗೂ ಏಡ್ಸ್-455 ಪ್ರಕರಣಗಳು ಪತ್ತೆಯಾಗಿವೆ ಎಂದರು.
ಆರೋಗ್ಯ ಕಾರ್ಯಕರ್ತರು ತಮ್ಮ ವ್ಯಾಪ್ತಿಯ ಎಲ್ಲಾ ಕುಡಿಯುವ ನೀರಿನ ಮೂಲಗಳಿಂದ ನೀರಿನ ಮಾದರಿಯನ್ನು 3 ತಿಂಗಳಿಗೊಮ್ಮೆ ಸಂಗ್ರಹಿಸಿ ಪರೀಕ್ಷಿಸಿ ಕುಡಿಯಲು ಯೋಗ್ಯವಿದೆಯೋ ಇಲ್ಲವೋ ಎಂಬುದರ ಬಗ್ಗೆ ವರದಿ ನೀಡುತ್ತಾರೆ ಎಂದು ವಿವರಿಸಿದರು.
ಈವರೆಗೆ 61 ಡೆಂಘೀ ಪ್ರಕರಣಗಳು ಜಿಲ್ಲೆಯಲ್ಲಿ  ವರದಿಯಾಗಿದ್ದು, ಡೆಂಘೀ ನಿಯಂತ್ರಣಕ್ಕೆ ಜಿಲ್ಲೆಯಾದ್ಯಂತ (ಸಾಮೂಹಿಕ ಸೊಳ್ಳೆ ಉತ್ಪತ್ತಿ ತಾಣಗಳ ನಿರ್ಮೂಲನೆ) ಕಾರ್ಯಕ್ರಮ ಕೈಗೊಳ್ಳಲಾಗಿದೆ. ಅಲ್ಲದೆ ಈ ಬಗ್ಗೆ ಗ್ರಾಮೀಣ ಮಟ್ಟದಲ್ಲಿ ಮಾಹಿತಿ ಶಿಬಿರ, ಶಾಲಾ ಆರೋಗ್ಯ ಶಿಕ್ಷಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಜನವರಿಯಿಂದ ಆರೋಗ್ಯ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡಿ ಸೊಳ್ಳೆ ಉತ್ಪತ್ತಿ ತಾಣಗಳಲ್ಲಿ ಲಾರ್ವ ನಿರ್ಮೂಲನೆ ಬಗ್ಗೆ ಕ್ರಮ ಕೈಗೊಳ್ಳುತ್ತಿದ್ದಾರೆ ಎಂದು ನುಡಿದರು.
ಜುಲೈ ಅಂತ್ಯದ ವರೆಗೆ 35 ಮಲೇರಿಯಾ ಪ್ರಕರಣ ವರದಿಯಾಗಿದ್ದು, ಈ ಕುರಿತು ಜಿಲ್ಲೆಯಾದ್ಯಂತ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸಕಲೇಶಪುರ ತಾಲೂಕಿನಲ್ಲಿ ವಿಶೇಷವಾಗಿ ಮಂಗಳೂರಿನಿಂದ ಹಾಗೂ ಉತ್ತರ ಕರ್ನಾಟಕದ ಮಲೇರಿಯಾ ಪೀಡಿತ ಜಿಲ್ಲೆಗಳಿಂದ ಕಾಫಿ ಕಟಾವಿಗೆ ಬರುವ ಕೂಲಿ ಕಾರ್ಮಿಕರ ಬಗ್ಗೆ ವಿಶೇಷ ಕಾಳಜಿ ವಹಿಸಿ ರಕ್ತ ತಪಾಸಣೆ ಕೈಗೊಳ್ಳಲಾಗುತ್ತಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಡಿಸಿ ಸೂಚನೆ: ಜಿಲ್ಲೆಯಲ್ಲಿ ಡೆಂಗ್ಯೂ ಮತ್ತು ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳು ಹರಡದಂತೆ ನಿಯಂತ್ರಿಸಲು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ವಿ.ಅನ್ಬುಕುಮಾರ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಯಾವುದೇ ಪ್ರಕರಣ ಕಂಡು ಬಂದಲ್ಲಿ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಕ್ರಮ ವಹಿಸುವಂತೆ ಹಾಗೂ ತಮ್ಮ ಗಮನಕ್ಕೆ ತರುವಂತೆ ತಿಳಿಸಿದರಲ್ಲದೆ, ನಾಯಿ ಕಡಿತ ಮತ್ತು ಹಾವಿನ ಕಡಿತಕ್ಕೆ ಸಂಬಂಧಿಸಿದ ಲಸಿಕೆಗಳು ಎಲ್ಲಾ ಸಂದರ್ಭದಲ್ಲಿಯೂ ಎಲ್ಲಾ ಆಸತ್ರೆಗಳಲ್ಲಿಯೂ ಲಭ್ಯವಿರುವಂತೆ ನೋಡಿಕೊಳ್ಳಲು ಸೂಚಿಸಿದರು.
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಪುರಸಭೆ, ನಗರಸಭೆ ಅಧಿಕಾರಿಗಳು ಕೂಡಲೇ ಕ್ರಮ ವಹಿಸುವಂತೆ ಆದೇಶಿಸಿದರಲ್ಲದೆ, ಗ್ರಾಮ ಪಂಚಾಯ್ತಿ ಮಟ್ಟದಲ್ಲೂ ಸಹ ಅಗತ್ಯ ಕ್ರಮ ತೆಗೆದು ಕೊಳ್ಳಬೇಕೆಂದು ಸೂಚಿಸಿದರು.
ಇದೇ ರೀತಿ ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಅಭಿಯಾನ ಯೋಜನೆ ಅನುಷ್ಠಾನ ಪ್ರಗತಿ ಪರಿಶೀಲನೆ ಸಭೆಯನ್ನೂ ನಡೆಸಿದ ಜಿಲ್ಲಾಧಿಕಾರಿಯವರು ಜಿಲ್ಲೆಯಲ್ಲಿ ಹೆರಿಗೆ ಸಂದರ್ಭದಲ್ಲಿ ತಾಯಿ ಮಗುವಿನ ಮರಣ ಪ್ರಮಾಣ ಇತರ ಜಿಲ್ಲೆಗಳಿಗೆ ಹೋಲಿಸಿದರೆ ಕಡಿಮೆ ಇದ್ದರೂ ಅದನ್ನು ಇನ್ನಷ್ಟು ಕಡಿತಗೊಳಿಸಲು ಆರೋಗ್ಯ ಇಲಾಖೆಯ ಎಲ್ಲಾ ಅಧಿಕಾರಿ ಸಿಬ್ಬಂದಿ ಸಹಕರಿಸಬೇಕು ಎಂದರು.
ಮನೆಯಲ್ಲಿ ನಡೆಯುವ ಹೆರಿಗೆ ಪ್ರಮಾಣ ಸಂಪೂರ್ಣ ನಿಯಂತ್ರಣಗೊಳ್ಳಬೇಕು. ಆಸ್ಪತ್ರೆಯಲ್ಲಿಯೇ ಹೆರಿಗೆ ಮಾಡಿಸಿಕೊಳ್ಳುವಂತೆ ಗರ್ಭೀಣಿಯರಿಗೆ ಅರಿವು ಮೂಡಿಸಿ ಪ್ರೋತ್ಸಾಹ ನೀಡಬೇಕು ಎಂದ ಅವರು, ಒಟ್ಟಾರೆ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ಸೌಲಭ್ಯಗಳನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎಲ್ಲರೂ ಶ್ರಮಿಸಬೇಕು ಎನ್‌ಎಚ್‌ಎಂ ಅಡಿಯಲ್ಲಿ ಲಭ್ಯವಿರುವ ಸೌಲಭ್ಯಗಳು ಸುಲಭವಾಗಿ ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಗಮನ ಹರಿಸಬೇಕು ಎಂದು ಅನ್ಬುಕುಮಾರ್ ತಿಳಿಸಿದರು.
ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗ್ರತೆ ವಹಿಸಲು ಪೈಪ್‌ಲೈನ್ ಸ್ವಚ್ಛ ಮಾಡುವ ಹಾಗೂ ಕುಡಿಯುವ ನೀರಿನ ತಪಾಸಣೆ ಸಂದರ್ಭದಲ್ಲಿ ಆರೋಗ್ಯ ಕಾರ್ಯಕರ್ತರು ಗ್ರಾಮ ಪಂಚಾಯತಿ ಹಾಗೂ ಸಂಘ ಸಂಸ್ಥೆಗಳ ಸಹಯೋಗ ಪಡೆದುಕೊಳ್ಳಬೇಕು
 ಟಿ ಅನ್ಬುಕುಮಾರ್, ಜಿಲ್ಲಾಧಿಕಾರಿ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement