ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆ ಉದ್ಘಾಟನೆ
ಹೊಳೆನರಸೀಪುರ: ಸ್ಪರ್ಧೆ ಕೇವಲ ಗೆಲುವಿನ ಗುರಿಯನ್ನು ಮುಟ್ಟುವ ತವಕವಾಗಿ ಮಾತ್ರ ಇರದೆ, ಯಾವುದೇ ಸ್ಪರ್ಧೆಯಿರಲಿ ಮೊದಲು ಭಾಗವಹಿಸುವ ಛಲವಂತಿಕೆಯನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳುವಂತೆ ಭವಾನಿರೇವಣ್ಣ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೋಮವಾರ ಆಯೋಜಿಸಿದ್ದ ರಾಜ್ಯ ಮಟ್ಟದ ಅಂತರ ಕಾಲೇಜುಗಳ ಸಾಂಸ್ಕೃತಿಕ ಸ್ಪರ್ಧೆಗಳಾದ ಭಾವಗೀತೆ, ಜನಪದಗೀತೆ ಹಾಗೂ ಚರ್ಚಾಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು.
ಕಾಲೇಜಿನಲ್ಲಿ ನಡೆಯುತ್ತಿರುವ ರಾಜ್ಯ ಸ್ಪರ್ಧೆಗಳಿಂದಾಗಿ ನಮ್ಮೂರಿನ ಕಾಲೇಜು ರಾಜ್ಯ ಮಟ್ಟದಲ್ಲೂ ಹೆಸರು ಗಳಿಸುವಂತಾಗಲಿ ಎಂದು ಹಾರೈಸಿದರು.
ತಾಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗಾಗಿ ಶಾಸಕ ಎಚ್.ಡಿ.ರೇವಣ್ಣ ವಹಿಸುತ್ತಿರುವ ಮುತುವರ್ಜಿ ಕಂಡಾಗ ಹೆಮ್ಮೆ ಎನಿಸುತ್ತದೆ ಎಂದು ತಮ್ಮ ಪತಿಯವರ ಶಿಕ್ಷಣದೆಡೆಗಿನ ಅಭಿವೃದ್ಧಿಯ ಕುರಿತಾದ ಕಾಳಜಿಯ ಕುರಿತಂತೆ ಪ್ರಶಂಸೆ ವ್ಯಕ್ತಪಡಿಸಿದರು.
ಜಿಲ್ಲೆಯ ನಾನಾ ತಾಲೂಕುಗಳಿಂದಲ್ಲದೇ ಹೊರ ಜಿಲ್ಲೆಗಳಿಂದಲೂ ಹೊಳೆನರಸೀಪುರ ತಾಲೂಕು ಕೇಂದ್ರಕ್ಕೆ ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದು, ಅವರಿಗೆ ಅವಶ್ಯಕ ಹಾಸ್ಟೆಲ್
ವ್ಯವಸ್ಥೆ ಇಲ್ಲದ ಕಾರಣದಿಂದಾಗಿ ಅನಾನುಕೂಲವಾಗಿರುವುದು ತಮ್ಮ ಗಮನಕ್ಕೆ ಬಂದಿದ್ದು, ಈ ಕುರಿತಂತೆ ತಾವು ಶಾಸಕರೊಂದಿಗೆ ಚರ್ಚಿಸಿದ್ದು, ಪಟ್ಟಣದಲ್ಲಿನ ವಿದ್ಯಾರ್ಥಿನಿಲಯಗಳಲ್ಲಿನ ವಿದ್ಯಾರ್ಥಿಗಳ ಸಂಖ್ಯೆಯನ್ನು ಹೆಚ್ಚಿಸಿ ಅವುಗಳಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮೊದಲ ಆದ್ಯತೆ, ದೂರದ ಊರುಗಳಿಂದ ಬರುವ ವಿದ್ಯಾರ್ಥಿಗಳಿಗೆ ಎರಡನೇ ಆದ್ಯತೆ ಹಾಗೂ ಆರ್ಥಿಕವಾಗಿ ಹಿಂದುಳಿದಿರುವ ವಿದ್ಯಾರ್ಥಿಗಳಿಗಾಗಿ ಮೂರನೇ ಆದ್ಯತೆಯನ್ನು ನೀಡಿ ಈ ಮೂಲಕ ಇರುವ ಹಾಸ್ಟೆಲ್ಗಳಲ್ಲಿ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸುವಂತೆ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದರು.
ಹಿರಿಯ ಸಾಹಿತಿ, ಖ್ಯಾತ ನಾಟಕಕಾರ ಬೇಲೂರು ಕೃಷ್ಣಮೂರ್ತಿ ಮಾತನಾಡಿ, ವಿದ್ಯಾರ್ಥಿಗಳು ಕೇವಲ ಪುಸ್ತಕದ ಹುಳುಗಳಾಗದೇ, ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳನ್ನೂ ಮೈಗೂಡಿಸಿಕೊಳ್ಳುವಂತೆ ಸಲಹೆ ನೀಡಿದರು. ಮುಂದಿನ ದಿನಗಳಲ್ಲಿ ಕಾಲೇಜುಗಳಲ್ಲಿ ಕಿರು ನಾಟಕ ಸ್ಪರ್ಧೆ ಆಯೋಜಿಸಲು ವಿದ್ಯಾರ್ಥಿಗಳಿಗೆ ಉತ್ತೇಜನ ನೀಡುವಂತೆ ಶತನಾಟಕಗಳ ರಚನಾಕಾರರಾದ ಬೇಲೂರು ಕೃಷ್ಣಮೂರ್ತಿ ಸಲಹೆ ನೀಡಿದರು.
ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಕೆ.ಶ್ರೀನಿವಾಸ್, ಪತ್ರಕರ್ತ ಎಚ್.ವಿ.ಸುರೇಶ್ಕುಮಾರ್, ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಎನ್.ಎಸ್.ರಾಧಾಕೃಷ್ಣ ಮಾತನಾಡಿದರು. ಕನ್ನಡ ವಿಭಾಗದ ಮುಖ್ಯಸ್ಥ ಡಾ.ಬಿ.ಸಿಮಲ್ಲೇಶ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಾಂಶುಪಾಲ ಪ್ರೊ.ಎಂ.ಬಿ.ಇರ್ಷಾದ್ ಅಧ್ಯಕ್ಷತೆ ವಹಿಸಿದ್ದರು. ಪುರಸಭೆ ಮಾಜಿ ಸದಸ್ಯ ಬಾ.ರಾ.ಸುಬ್ಬರಾಯ ಮೊದಲಾದವರು ಇದ್ದರು.