ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ
ಕ.ಪ್ರ.ವಾರ್ತೆ , ಸಕಲೇಶಪುರ , ಆ.30
ಪುರಸಭೆ ಸದಸ್ಯರೊಬ್ಬರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿಗಳನ್ನು ತಕ್ಷಣವೇ ಬಂಧಿಸಬೇಕು ಎಂದು ಆಗ್ರಹಿಸಿ ಪುರಸಭೆ ಮುಂಭಾಗ ಬಿಜೆಪಿ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು.
ಎರಡು ದಿನಗಳ ಹಿಂದೆ ಪುರಸಭೆ ಕಚೇರಿ ಆವರಣದಲ್ಲಿ ನಿಂತಿದ್ದ, ಎರಡನೇ ವಾರ್ಡ್ ಸದಸ್ಯ ಎಸ್.ಎ ಮೋಹನ್ ಮೇಲೆ ಕೆಲವರ ಕುಮ್ಮಕ್ಕಿನಿಂದ ದುಷ್ಕರ್ಮಿಗಳು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ಪಟ್ಟಣ ಠಾಣೆಯಲ್ಲಿ ದೂರು ನೀಡಲಾಗಿದೆ. ಆದರೆ ಘಟನೆ ನಡೆದು ಎರಡು ದಿನಗಳಾದರೂ ಪೊಲೀಸರು ದುಷ್ಕರ್ಮಿಗಳನ್ನು ಬಂಧಿಸಲು ಇನ್ನೂ ಕ್ರಮ ಕೈಗೊಂಡಿಲ್ಲ.
ಶೀಘ್ರವೇ ದುಷ್ಕರ್ಮಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿದ ಪ್ರತಿಭಟನಾಕಾರರು, ಮುಂದಿನ ದಿನಗಳಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆಗೆ ಮುಂದಾದರೆ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡ ಬೇಕಾಗುತ್ತದೆ ಎಂದು ಎಚ್ಚರಿಸಿದರು.
ಪಕ್ಷದ ಅಧ್ಯಕ್ಷ ಕ್ಯಾಮನಹಳ್ಳಿ ರಾಜ್ಕುಮಾರ್, ಪ್ರಧಾನ ಕಾರ್ಯದರ್ಶಿ ಹೆಬ್ಬನಹಳ್ಳಿ ಸಂದೇಶ್, ನಗರ ಘಟಕ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಶೆಟ್ಟಿ, ತಾಲೂಕು ಮಾಜಿ ಅಧ್ಯಕ್ಷ ದಯಾನಂದ್ ಇತರರು ಪ್ರತಿಭಟನೆ ನೇತೃತ್ವ ವಹಿಸಿದ್ದರು.