ಮಹಿಳಾ ಸರ್ಕಾರಿ ಕಾಲೇಜಿನಲ್ಲಿ ಕ್ರೀಡಾ ಚಟುವಟಿಕೆ ಉದ್ಘಾಟನೆ
ಹಾಸನ: ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗಲು ಸಾಧ್ಯ ಎಂದು ನಿವೃತ್ತ ದೈಹಿಕ ಶಿಕ್ಷಕಿ ಕೆ.ಜಿ. ನಾಗರತ್ನ ಹೇಳಿದರು.
ನಗರದ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕ್ರೀಡಾ ವಿಭಾಗದಿಂದ ಆಯೋಜಿಸಿದ್ದ 2013-14ನೇ ಸಾಲಿನ ಕ್ರೀಡಾ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಹಾಗೂ ಹಾಕಿ ಮಾಂತ್ರಿಕ ಧ್ಯಾನ್ಚಂದ್ ಅವರ ಸ್ಮರಣಾರ್ಥ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಹೆಣ್ಣು ಮಕ್ಕಳು ದೈಹಿಕವಾಗಿ ಸಮರ್ಥರಾಗಲು ಹಾಗೂ ಉತ್ತಮ ಆರೋಗ್ಯ ಕಾಪಾಡಿಕೊಳ್ಳುವ ದೃಷ್ಟಿಯಿಂದ ಕ್ರೀಡೆ ಅತ್ಯವಶ್ಯಕ. ವಿದ್ಯಾರ್ಥಿನಿಯರು ಜೀವನದಲ್ಲಿ ಉತ್ತಮ ಸಂಸ್ಕೃತಿ ಮೈಗೂಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಎಂ.ಎ. ಪ್ರಕಾಶ್ ವಿದ್ಯಾರ್ಥಿಗಳಿಗೆ ಸದ್ಭಾವನಾ ದಿನಾಚರಣೆಯ ಪ್ರತಿಜ್ಞಾವಿಧಿ ಬೋಧಿಸಿದರು. ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಪ್ರೊ. ರೂಪ್ರಾಜಚಂದನ್ ಮಾತನಾಡಿ, ವಿದ್ಯಾರ್ಥಿಗಳು ಸಮಗ್ರವಾಗಿ ಪ್ರಗತಿ ಸಾಧಿಸಲು ಕ್ರೀಡಾ ಅತ್ಯವಶ್ಯಕ. ನಿರಂತರ ಪ್ರಯತ್ನದಿಂದ ಯಶಸ್ಸು ಸಾಧಿಸಲು ಸಾಧ್ಯ. ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬೇಕು ಎಂದು ಸಲಹೆ ನೀಡಿದರು. ಐಕ್ಯೂಎಸಿ ಸಂಚಾಲಕ ಪ್ರೊ. ಕೆ.ಡಿ. ಮುರಳೀಧರ, ಎನ್ಎಸ್ಎಸ್ ಅಧಿಕಾರಿ ಎಂ.ಕೆ. ಮಹೇಶ್, ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ದಿಲೀಪಕುಮಾರ್ ಇತರರು ಇದ್ದರು.