ಬೀಡಾಡಿ ದನಗಳು ಗೋಶಾಲೆಗೆ
ಹಾಸನ: ನಗರ ವ್ಯಾಪ್ತಿಯ ಎಲ್ಲಾ ರಸ್ತೆಗಳಲ್ಲಿ ಬೀಡಾಡಿ ದನಗಳು ಓಡಾಡುತ್ತಿರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿದ್ದು ಇದರಿಂದಾಗಿ ರಸ್ತೆಯಲ್ಲಿ ಸಂಚರಿಸುವ ಪಾದಚಾರಿಗಳಿಗೆ ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ತೊಂದರೆಯಾಗಿದ್ದು, ಹಲವಾರು ಸಂದರ್ಭಗಳಲ್ಲಿ ಅಪಘಾತಗಳಿಗೂ ಕಾರಣವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಹೆಚ್.ಎನ್. ಗೋಪಾಲಕೃಷ್ಣ ತಿಳಿಸಿದ್ದಾರೆ. ಆದುದರಿಂದ ಜಿಲ್ಲಾಡಳಿತವು ಸಂಬಂಧಪಟ್ಟ ಜಾನುವಾರುಗಳ ಮಾಲೀಕರಿಗೆ ಈ ಮೂಲಕ ತಿಳಿಯಪಡಿಸುವುದೇನೆಂದರೆ, ತಮಗೆ ಸಂಬಂಧಿಸಿದ ಜಾನುವಾರುಗಳನ್ನು ಸಾರ್ವಜನಿಕ ರಸ್ತೆಯಲ್ಲಿ ಬಿಡದೆ, ಸಾರ್ವಜನಿಕರ ಹಾಗೂ ವಾಹನಗಳ ಸುಗಮ ಸಂಚಾರದ ಹಿತದೃಷ್ಠಿಯಿಂದ ಡಿ. 5ರ ಗುರುವಾರದೊಳಗೆ ತಮಗೆ ಸಂಬಂಧಿಸಿದ ಜಾನುವಾರುಗಳನ್ನು ತಮ್ಮ ವಶಕ್ಕೆ ತೆಗೆದುಕೊಂಡು, ತಮ್ಮ ಮನೆಗಳಲ್ಲಿಯೇ ಸಾಕಿಕೊಳ್ಳಲು ಕ್ರಮ ಕೈಗೊಳ್ಳುವುದು. ಡಿ. 5ರ ನಂತರ ರಸ್ತೆಯ ಬದಿಯಲ್ಲಿ, ರಸ್ತೆಯಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಜಾನುವಾರುಗಳು ಕಂಡು ಬಂದಲ್ಲಿ, ಅವುಗಳನ್ನು ಹಿಡಿದು ಗೋಶಾಲೆಗೆ ಕಳುಹಿಸಿ, ಅಂತಹ ಜಾನುವಾರುಗಳ ಮಾಲಿಕರ ವಿರುದ್ಧ ದಂಡ ವಿಧಿಸಿ, ಕಾನೂನು ರೀತಿ ಕ್ರಮ ಜರುಗಿಸಲಾಗುವುದು ಎಂದಿದ್ದಾರೆ.