ಹೋಬಳಿ ಮಟ್ಟದ ಪ್ರತಿಭಾ ಕಾರಂಜಿ
ಹಿರೀಸಾವೆ: ಹಿರೀಸಾವೆ ಹೋಬಳಿ ಮಟ್ಟದ ಪ್ರಾಥಮಿಕ ಶಾಲೆಗಳ ಪ್ರತಿಭಾ ಕಾರಂಜಿ ಕಾರ್ಯಕ್ರಮ ಹೋಬಳಿಯ ಸಂಪನ್ಮೂಲ ಕೇಂದ್ರಗಳಲ್ಲಿ ಇತ್ತೀಚೆಗೆ ನಡೆಯಿತು.
ಪ್ರತಿಭಾ ಕಾರಂಜಿಯನ್ನು ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಅಂಬಿಕಾ ರಾಮಕೃಷ್ಣ ಉದ್ಘಾಟಿಸಿಸಿದರು. ಇದೇ ವೇಳೆ ಮಾತನಾಡಿದ ಅವರು, ಮಕ್ಕಳು ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ಧೈರ್ಯ ಮತ್ತು ಸಾಮರ್ಥ್ಯ ಹೆಚ್ಚುತ್ತದೆ. ಪೋಷಕರು ಮಕ್ಕಳಿಗೆ ಹೆಚ್ಚು ಒತ್ತಡ ಹೇರದೆ ಮಕ್ಕಳು ಯಾವ ವಿಷಯದ ಬಗ್ಗೆ ಆಸಕ್ತಿ ತೋರುವರೋ ಅದಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಬೇಕೆಂದು ಸಲಹೆ ನೀಡಿದರು. ಶಿಕ್ಷಕರು ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಶ್ರದ್ಧೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಕಿವಿಮಾತು ಹೇಳಿದರು. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿರ್ದೇಶಕ ಮಂಜೇಗೌಡ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಸರ್ಕಾರ ಹಾಗು ಇಲಾಖೆ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಶಿಕ್ಷಣಕ್ಕೆ ಸಂಬಂಧಿಸಿದಂತೆ ಎಲ್ಲಾ ಸೌಲಭ್ಯಗಳನ್ನು ಹಾಗೂ ಅವಕಾಶಗಳನ್ನು ಒದಗಿಸಿಕೊಟ್ಟಿದೆ. ಅದನ್ನು ಸದುಪಯೋಗ ಪಡಿಸಿಕೊಂಡು ಮಕ್ಕಳ ಪ್ರತಿಭೆಯನ್ನು ಹೊರಹಾಕಲು ಪ್ರೋತ್ಸಾಹಿಸುವತ್ತ ಶಿಕ್ಷಕರು ಕಾರ್ಯನಿರ್ವಹಿಸಬೇಕೆಂದು ಶಿಕ್ಷಕರಲ್ಲಿ ಮನವಿ ಮಾಡಿದರು.
ಶಿಕ್ಷಣ ಸಂಯೋಜಕ ತಮ್ಮಣ್ಣಗೌಡ ಪ್ರಾಸ್ತಾವಿಕವಾಗಿ ಮಾತನಾಡಿದರು. ದಿಡಗ ಗ್ರಾಮ ಪಂಚಾಯ್ತಿ ಅಧ್ಯಕ್ಷ ಹೆಚ್.ಬಿ. ರಘುರಾಮ್ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಕೆ.ಎಂ.ಗೋವಿಂದೇಗೌಡ, ಎಸ್ಡಿಎಂಸಿ ಅಧ್ಯಕ್ಷ ನಂಜೇಶಿ, ಪ್ರೌಢಶಾಲಾ ಮುಖ್ಯೋಪಾಧ್ಯಾಯ ಎಂ.ಎಲ್. ಗೋವಿಂದಪ್ಪ, ಡಿ.ಬಿ. ನಾಗೇಂದ್ರಕುಮಾರ್, ಶಿಕ್ಷಕ ವೀರಭದ್ರಪ್ಪ ಮತ್ತಿತರರು ಉಪಸ್ಥಿತರಿದ್ದರು.