ಪ್ರಾಥಮಿಕ ಶಿಕ್ಷಣ ಉಳಿಸಲು ಸರ್ಕಾರ ಮುಂದಾಗಬೇಕು
ಹೊಳೆನರಸೀಪುರ: ರಾಜ್ಯದಲ್ಲಿ ಕುಸಿಯುತ್ತಿರುವ ಪ್ರಾಥಮಿಕ ಹಂತದ ಶಿಕ್ಷಣವನ್ನು ಉಳಿಸಿ, ಗ್ರಾಮೀಣ ಭಾಗದಲ್ಲಿನ ವಿದ್ಯಾರ್ಥಿಗಳಿಗೂ ನಗರ ಪ್ರದೇಶದ ವಿದ್ಯಾರ್ಥಿಗಳಿಗೆ ಸರಿಸಮಾನವಾದ ಶಿಕ್ಷಣವನ್ನು ನೀಡುವ ಮೂಲಕ ಎಲ್ಲ ವರ್ಗದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಸರ್ಕಾರ ಮುಂದಾಗಬೇಕಿದೆ ಎಂದು ಶಾಸಕ ಎಚ್.ಡಿ. ರೇವಣ್ಣ ಇಲ್ಲಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
ಪಟ್ಟಣದಲ್ಲಿನ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರವು ಹೊಸದಾಗಿ ಯೋಜನೆಗಳನ್ನು ರೂಪಿಸುವುದಕ್ಕೂ ಮೊದಲು, ಎಲ್ಲಾ ವರ್ಗದ ಮಕ್ಕಳಿಗೂ ಸಮಾನ ಶಿಕ್ಷಣ ದೊರೆಯುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.
ಪ್ರತಿಭೆ ಹೊರಹೊಮ್ಮಿಸಿ: ಪ್ರತಿಭಾ ಕಾರಂಜಿ ಕಾರ್ಯಕ್ರಮವು ವಿದ್ಯಾರ್ಥಿಗಳ ಪ್ರತಿಭೆಯ ವಿಕಸನಕ್ಕೆ ಉತ್ತಮ ವೇದಿಕೆಯಾಗಿದೆ ಎಂದು ಕಾರ್ಯಕ್ರಮವನ್ನು ಶ್ಲಾಘಿಸಿದ ಅವರು, ಮಕ್ಕಳು ಇದರ ಸದುಪಯೋಗ ಪಡೆದು ತಮ್ಮಲ್ಲಿನ ಪ್ರತಿಭೆಯನ್ನು ಹೊರಹೊಮ್ಮಿಸುವಂತೆ ಕರೆ ನೀಡಿದರು.
ಹಣ್ಣುಮಕ್ಕಳಿಗೂ ಸಮಾನ ಶಿಕ್ಷಣ: ಇದೇ ಸಂದರ್ಭದಲ್ಲಿ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಸೈಕಲ್ಗಳನ್ನು ವಿತರಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರವು ಶೈಕ್ಷಣಿಕ ವರ್ಷದ ಆರಂಭದಲ್ಲಿ ಮಕ್ಕಳಿಗೆ ಸೈಕಲ್ಗಳನ್ನು ವಿತರಿಸುವುದನ್ನು ಬಿಟ್ಟು, ಶೈಕ್ಷಣಿಕ ವರ್ಷದ ಅಂತ್ಯದ ಹಂತದಲ್ಲಿ ಸೈಕಲ್ಗಳನ್ನು ವಿತರಿಸುತ್ತಿದೆ. ಇದು ಸರಿಯಾದ ಕ್ರಮವಲ್ಲ ಎಂದ ರೇವಣ್ಣ, ಹೆಣ್ಣು ಮಕ್ಕಳಿಗೂ ಗಂಡು ಮಕ್ಕಳಿಗೆ ನೀಡಲಾಗುತ್ತಿರುವ ಶಿಕ್ಷಣಕ್ಕೆ ಸರಿಸಮಾನವಾದ ಶಿಕ್ಷಣವನ್ನು ನೀಡುವಂತೆ ಕರೆ ನೀಡಿದರು.
ತಾಪಂ ಅಧ್ಯಕ್ಷೆ ಪುಷ್ಪಾಗೌಡೇಗೌಡ, ಪುರಸಭಾಧ್ಯಕ್ಷೆ ಎಚ್.ಆರ್. ಕಲಾವತಿ, ಜಿಪಂ ಸದಸ್ಯೆ ಗೌರಮ್ಮ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ. ಶಿವಮಾದಪ್ಪ, ಬಿಸಿಯೂಟ ಅಧಿಕಾರಿ ಕುಮಾರ್, ಕಾಲೇಜಿನ ಪ್ರಾಂಶುಪಾಲ ಎ. ನಾಗರಾಜ್, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಂಜುನಾಥ್, ತಾಲೂಕು ಪ್ರೌಢಶಾಲಾ ಸಹ-ಶಿಕ್ಷಕರ ಸಂಘದ ಅಧ್ಯಕ್ಷ ಜವರೇಗೌಡ ಇದ್ದರು.