ಸರ್ಕಾರದ ನೀತಿ ಖಂಡಿಸಿ ಎಸ್ಎಫ್ಐ ಪ್ರತಿಭಟನೆ
ಕ.ಪ್ರ.ವಾರ್ತೆ ಹಾಸನ ಡಿ 19
ವೃತ್ತಿ ಶಿಕ್ಷಣಕ್ಕೆ ಸಿಇಟಿ ಮೂಲಕವೇ ವೃತ್ತಿ ಸೀಟು ಹಂಚಿಕೆ ಹಾಗೂ ಶುಲ್ಕವನ್ನು ನಿಗದಿ ಪಡಿಸುವಂತೆ ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ ನೇತೃತ್ವದಲ್ಲಿ ವಿದ್ಯಾರ್ಥಿಗಳು ಸರ್ಕಾರದ ಪ್ರತಿಕೃತಿ ದಹಿಸಿ ಗುರುವಾರ ಪ್ರತಿಭಟನೆ ನಡೆಸಿದರು.
ಪ್ರತಿಭಟನಾಕಾರರು ನಗರದ ಹೇಮಾವತಿ ಪ್ರತಿಮೆಯಿಂದ ಮೆರವಣಿಗೆ ನಡೆಸಿ ಎನ್.ಆರ್. ವೃತ್ತದ ಮೂಲಕ ಜಿಲ್ಲಾಧಿಕಾರಿಯ ಮುಂದೆ ರಸ್ತೆ ತಡೆ ನಡೆಸಿ ಸರ್ಕಾರದ ಪ್ರತಿಕೃತಿಯನ್ನು ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ಜಿಲ್ಲಾಧಿಕಾರಿಗೆ ತೆರಳಿ ಕೆಲ ಸಮಯ ಧರಣಿ ನಡೆಸಿ ಜಿಲ್ಲಾಧಿಕಾರಿಗೆ ಮನವಿ ನೀಡಿದರು.
ಆಕ್ರೋಶ: ಕರ್ನಾಟಕ ವೃತ್ತಿ ಶಿಕ್ಷಣ ಸಂಸ್ಥೆಗಳ (ಪ್ರವೇಶ ನಿಯಂತ್ರಣ ಮತ್ತು ಶುಲ್ಕ ನಿಗದಿ ಕಾಯ್ದೆ) ಹೆಸರಿನಲ್ಲಿ ಇಡೀ ವೃತ್ತಿ ಶಿಕ್ಷಣವನ್ನು ಮಾರಾಟದ ಸರಕನ್ನಾಗಿಸಲು ಸರ್ಕಾರ ಹೊರಟಿದೆ. ಕಾಯ್ದೆಯನ್ನು ಜಾರಿ ಮಾಡುವ ಮೂಲಕ ರಾಜ್ಯ ಸರ್ಕಾರ ವೃತ್ತಿ ಶಿಕ್ಷಣ ಕನಸು ಹೊತ್ತ ವಿದ್ಯಾರ್ಥಿಗಳ ಕನಿಸಿಗೆ ಭಂಗ ತಂದಿದೆ. ಎಂಜಿನಿಯರಿಂಗ್ ಮತ್ತು ಮೆಡಿಕಲ್ ಕೋರ್ಸ್ಗಳಿಗೆ ಶುಲ್ಕ ಹೆಚ್ಚಿಸುವುದರ ಜೊತೆಯಲ್ಲಿ ಖಾಸಗಿ ಕಾಲೇಜುಗಳಿಗೆ ಸಿಇಟಿ ಮೂಲಕ ಪ್ರವೇಶ ಪ್ರಕ್ರಿಯೆ ಕೈ ಬಿಡಲು ರಾಜ್ಯ ಸರ್ಕಾರ ಮುಂದಾಗಿದೆ. ಸರ್ಕಾರದ ಈ ನೀತಿಯಿಂದಾಗಿ ಲಕ್ಷಾಂತರ ದಲಿತ-ಹಿಂದುಳಿದ-ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಆರೋಪ: ರಾಜ್ಯ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ಈ ಕಾಯ್ದೆಯಿಂದಾಗಿ ಪ್ರಸ್ತುತ ಸರ್ಕಾರಿ ಕೋಟಾದಲ್ಲಿದ್ದು, ಎಂಜಿನಿಯರಿಂಗ್ನ ಶೇ. 45, ಮೆಡಿಕಲ್ನ ಶೇ. 40ರಷ್ಟು, ದಂತ ವೈದ್ಯಕೀಯದ ಶೇ. 35ರಷ್ಟು ಸೀಟುಗಳು ಖಾಸಗಿ ಶಿಕ್ಷಣ ಸಂಸ್ಥೆಗಳ ಪಾಲಾಗಲಿದೆ. ಯಾವುದೇ ಖಾಸಗಿ ಅನುದಾನರಹಿತ ಕಾಲೇಜಿನಲ್ಲಿ ಒಂದು ಸರ್ಕಾರಿ ಕೋಟಾದ ಸೀಟುಗಳು ಇಲ್ಲದಂತಾಗಲಿದೆ. ತನ್ನ ಪಾಲಿನ ಸೀಟುಗಳಿಗಾಗಿ ಕಾಮೆಡ್-ಕೆ ನಡೆಸುವ ಪ್ರವೇಶ ಪರೀಕ್ಷೆಯ ಬಗ್ಗೆ ಈಗಾಗಲೇ ಹಲವಾರು ದೂರುಗಳಿವೆ. ಇಂತಹ ಸಂದರ್ಭದಲ್ಲಿ ಸರ್ಕಾರ ಉಳಿದ ಸರ್ಕಾರಿ ಸೀಟುಗಳಿಗೂ ಪರೀಕ್ಷೆ ನಡೆಸಲು ಕಾಮೆಡ್-ಕೆಗೆ ಬಿಟ್ಟುಕೊತ್ತಿದೆ ಎಂದು ಆರೋಪಿದರು.
ಶೈಕ್ಷಣಿಕ ವರ್ಷದಿಂದ ಈ ಕಾಯ್ದೆಯನ್ನು ಸರ್ಕಾರ ಜಾರಿ ಮಾಡಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವರು ಹೇಳಿದ್ದಾರೆ. ಕಾಯ್ದೆ ಪ್ರಕಾರ ಶುಲ್ಕ ನಿಗದಿ ಮತ್ತು ಪ್ರವೇಶಕ್ಕೆ ಸಂಬಂಧಿಸಿದಂತೆ ಸಮಿತಿಗಳನ್ನು ರಚಿಸಲಾಗಿದೆ. ಈ ಸಮಿತಿಯು ಕಾಲೇಜಿನ ಮೂಲಭೂತ ಸೌಲಭ್ಯಗಳ ಆಧಾರದಲ್ಲಿ ಶುಲ್ಕವನ್ನು ನಿಗದಿ ಮಾಡುತ್ತದೆ. ರಾಜ್ಯದಲ್ಲಿ 10 ಸರ್ಕಾರಿ ಮತ್ತು 13 ಖಾಸಗಿ ವೈದ್ಯಕೀಯ ಕಾಲೇಜುಗಳಿವೆ. 9 ಡೀಮ್ಡ್ ವಿಶ್ವವಿದ್ಯಾನಿಲಯಗಳಿವೆ. 12 ಸರ್ಕಾರಿ, 9 ಅನುದಾನಿತ 177 ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳಿವೆ.
ದೂರು: ರಾಜ್ಯದಲ್ಲಿ ಖಾಸಗಿ ಕಾಲೇಜುಗಳೇ ಹೆಚ್ಚಿರುವುದರಿಂದ ಈ ಕಾಯ್ದೆಯಿಂದಾಗಿ ವಿದ್ಯಾರ್ಥಿಗಳು ಖಾಸಗಿ ಸಂಸ್ಥೆಗಳು ನಿಗದಿ ಪಡಿಸುವ ಶುಲ್ಕವನ್ನು ಭರಿಸಬೇಕಾಗುತ್ತದೆ. ಕಳೆದ ಬಾರಿ ವೈದ್ಯಕೀಯ ಖಾಸಗಿ ಕಾಲೇಜಿನ ಸರ್ಕಾರಿ ಕೋಟಾ ಸೀಟಿಗೆ 46 ಸಾವಿರ ರು.ಗಳನ್ನು ಪಡೆಯಲಾಗುತ್ತಿತ್ತು. ಆದರೆ ಈ ಕಾಯ್ದಿಯಿಂದಾಗಿ ಖಾಸಗಿ ಕಾಲೇಜುಗಳು 1ರಿಂದ 2 ಲಕ್ಷ ಲಕ್ಷರು.ಗಳನ್ನು ನಿಗದಿ ಮಾಡುವ ಸಾಧ್ಯತೆಗಳಿವೆ. ಈ ಕಾಯ್ದೆಯು ಖಾಸಗಿ ಕಾಲೇಜುಗಳನ್ನು ನಿಯಂತ್ರಿಸುವ ಬದಲು ವ್ಯಾಪಕ ಹಣ ವಸೂಲಿ ಮಾಡಿಕೊಳ್ಳಲು ಅವಕಾಶ ನೀಡುತ್ತಿದೆ ಎಂದು ದೂರಿದರು.
ಪರಮಾಧಿಕಾರ ಕೊಟ್ಟಂತಾಗುತ್ತದೆ: ಖಾಸಗಿ ಸಂಸ್ಥೆಗಳಿಗೆ ಬೇಕಾಬಿಟ್ಟಿ ಶುಲ್ಕ ವಸೂಲಿ ಮಾಡಲು ಅನುಕೂಲವಾಗುತ್ತದೆ. ಇದನ್ನು ತಡೆಯಲೆಂದೇ 2006ರ ಕಾಯ್ದೆ ಅನುಷ್ಠಾನಕ್ಕೆ ತರುತ್ತಿರುವುದಾಗಿ ಸರ್ಕಾರ ಹೇಳುತ್ತಿದ್ದರೂ ಪರಿಣಾಮ ವ್ಯತಿರಿಕ್ತವಾಗಲಿದೆ. ಖಾಸಗಿ ವೈದ್ಯಕೀಯ, ದಂತ, ಎಂಜಿನಿಯರಿಂಗ್, ಯುನಾನಿ, ಆಯುರ್ವೇದ, ಯೋಗ, ನ್ಯಾಚುರೋಪತಿ ಕಾಲೇಜುಗಳಲ್ಲಿ ಸರ್ಕಾರಿ ಸೀಟುಗಳಿಗೆ ಪ್ರವೇಶ ಶುಲ್ಕ ಕುರಿತಂತೆ ಸರ್ಕಾರದ ಪೂರ್ಣ ನಿಯಂತ್ರಣ ತಪ್ಪಿ, ಖಾಸಗಿ ಆಡಳಿತ ಮಂಡಳಿಗಳಿಗೆ ಪರಮಾಧಿಕಾರ ಕೊಟ್ಟಂತಾಗುತ್ತದೆ. ಇತರೆ ರಾಜ್ಯಗಳ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಖಾಸಗಿ ಪ್ರವೇಶಕ್ಕೆ ಮುಂದಾಗಬೇಕಾಗುತ್ತದೆ ಎಂದರು.
ಅಪಾಯಕಾರಿ: ಕಾಲೇಜುವಾರು ಶುಲ್ಕ ನಿಗದಿ ಮಾಡಲು ಹೊರಟಿರುವುದು ಸಾಮಾಜಿಕ, ಶೈಕ್ಷಣಿಕ ಅಸಮಾನತೆಗೆ ದಾರಿ ಮಾಡಿಕೊಡಲಿದೆ. ಸಾಮಾಜಿಕ ನ್ಯಾಯ ಎತ್ತಿ ಹಿಡಿಯುವುದಾಗಿ ಹೇಳುತ್ತಿರುವ ಸಿದ್ದರಾಮಯ್ಯನವರ ಸರ್ಕಾರ ವೃತ್ತಿ ಶಿಕ್ಷಣವನ್ನು ಉಳ್ಳವರಿಗೆ ಮಾತ್ರ ನೀಡಲು ಮುಂದಾಗುರುವುದು ಶಿಕ್ಷಣ ವಿರೋಧಿ ನೀತಿಯಾಗಿರುವುದು ಖಂಡನೀಯ. ಈಗಿರುವ ಶುಲ್ಕಗಳನ್ನು ಭರಿಸಲಾಗದೆ ವಿದ್ಯಾರ್ಥಿಗಳು ಹಿಂದೇಟು ಹಾಕುತ್ತಿದೆ. ಪ್ರಸಕ್ತ ವರ್ಷದಲ್ಲಿ ಸುಮಾರು 22 ಸಾವಿರ ಎಂಜಿಯರಿಂಗ್, ಮೆಡಿಕಲ್ ಸೀಟುಗಳು ಖಾಲಿ ಬಿದ್ದಿವೆ. ಈಗ ಮತ್ತೆ ಶುಲ್ಕ ಏರಿಸಲು ಹೊರಟಿರುವ ಸರ್ಕಾರದ ನಿರ್ಧಾರ ಭಾರಿ ಅಪಾಯಕಾರಿಯಾಗಿದೆ ಎಂದು ಆರೋಪಿಸಿದರು.
ಈ ಸಂದರ್ಭದಲ್ಲಿ ಎಂ.ಜಿ. ಪ್ರದೀಪ್ ಕುಮಾರ್, ಸಿ.ಎಸ್. ಮಹೇಶ್, ಕೆ.ಎಸ್. ಮಂಜುನಾಥ್, ನವೀನ್ ಕುಮಾರ್, ಕಿರಣ್, ಕುಮಾರ್, ಸಂತೋಷ್, ಪ್ರವೀಣ್ ಕುಮಾರ್, ದಿಲೀಪ್, ಮಂಜು, ರಾಜು, ರಾಜೇಶ್, ಪ್ರಸನ್ನ, ಮನು, ಸುಂದರ್ ಹಾಗೂ ಇತರರು ಇದ್ದರು.
ಬೇಡಿಕೆಗಳು
1. ಸರ್ಕಾರಿ ಸಿಇಟಿ ಮೂಲಕವೇ ವೃತ್ತಿ ಶಿಕ್ಷಣ ಸೀಟು ಹಂಚಿಕೆ ಹಾಗೂ ಶುಲ್ಕ ನಿಗದಿ ಮಾಡಬೇಕು.
2. ಈಗಾಗಲೇ ಏರಿಕೆ ಮಾಡಿರುವ ಶುಲ್ಕಗಳನ್ನು ತಕ್ಷಣ ಬಡ ವಿದ್ಯಾರ್ಥಿಗಳ ಕೈಗೆಟುಕುವಂತೆ ನಿಗದಿಗೊಳಿಸಿ.
3. ಸರ್ಕಾರಿ ಸೀಟುಗಳ ಸಂಖ್ಯೆಯನ್ನು ಹೆಚ್ಚಿಸಬೇಕು. ಸೀಟು ಹಂಚಿಕೆ 75: 25ರ ಅನುಪಾತದಲ್ಲಿ ಇರಬೇಕು.
4. ಸಿಇಟಿ ಅಕ್ರಮ ಸೀಟು ಮಾರಾಟ ದಂಧೆಯ ಜಾಲವನ್ನು ತಕ್ಷಣ ಪತ್ತೆ ಹಚ್ಚಿ ತಪ್ಪಿತಸ್ಥರನ್ನು ಕಠಿಣ ಕಾನೂನು ಶಿಕ್ಷೆಗೊಳಿಪಡಿಸಿ.
5. ಇರುವ ಎಲ್ಲಾ ಸರ್ಕಾರಿ ಕಾಲೇಜುಗಳಿಗೆ ಅತ್ಯಾಧುನಿಕ ಮೂಲಸೌಕರ್ಯಗಳನ್ನು ಒದಗಿಸಿ.
6. ಹೊಸ ಎಂಜಿನಿಯರಿಂಗ್, ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕಾಲೇಜುಗಳನ್ನು ಪ್ರಾರಂಭಿಸಿ.
7. ಖಾಸಗಿ ವೃತ್ತಿ ಶಿಕ್ಷಣ ಸಂಸ್ಥೆಗಳನ್ನು ನಿಯಂತ್ರಿಸಲು ರಾಜ್ಯ ಸರ್ಕಾರಗಳಿಗೆ ಅಧಿಕಾರವಿರುವ ಕೇಂದ್ರೀಯ ಶಾಸನವನ್ನು ಕೇಂದ್ರ ಸರ್ಕಾರ ಜಾರಿಗೆ ತರಬೇಕು.