ಮಕ್ಕಳ ಆರೋಗ್ಯಕ್ಕಾಗಿ ಒಗ್ಗೂಡಿ ಕೆಲಸ ನಿರ್ವಹಿಸಿ: ಅನ್ಬುಕುಮಾರ್ ಸೂಚನೆ
ಹಾಸನ: ತೀವ್ರ ಅಪೌಷ್ಟಿಕ ಮಕ್ಕಳ ಆರೋಗ್ಯ ಸ್ಥಿತಿಯನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಒಗ್ಗೂಡಿ ಕೆಲಸ ಮಾಡಿಸುವಂತೆ ಜಿಲ್ಲಾಧಿಕಾರಿ ವಿ.ಅನ್ಬುಕುಮಾರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ತೀವ್ರ ಅಪೌಷ್ಟಿಕ ಮಕ್ಕಳ ಹಾಗೂ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಪ್ರಗತಿ ಪರಿಶೀಲಿಸಿ ಅವರು ಮಾತನಾಡಿದರು.
ಪ್ರತಿ ತಿಂಗಳು ಮಕ್ಕಳ ಆರೋಗ್ಯ ತಪಾಸಣೆ ನಡೆಸುವಂತೆ ಸೂಚಿಸಿದ ಜಿಲ್ಲಾಧಿಕಾರಿ, ಜಿಲ್ಲೆಯಲ್ಲಿರುವ 270 ತೀವ್ರ ಅಪೌಷ್ಟಿಕ ಮಕ್ಕಳಲ್ಲಿ ಬುದ್ಧಿ ಮಾಂದ್ಯತೆ ಹೊಂದಿರುವ 22 ಮಕ್ಕಳ ಹಾಗೂ ಅಂಗವಿಕಲತೆ ಹೊಂದಿರುವ 9 ಮಕ್ಕಳಿಗೆ ಮಾಸಾಶನ ಸೌಲಭ್ಯ ದೊರಕಿಸಲು ಕಾಳಜಿ ವಹಿಸಿ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದರು.
ಮಕ್ಕಳಿಗೆ ಆಹಾರ, ಹಾಲು ಸೇವನೆಯಿಂದ ಯಾವುದೇ ಆರೋಗ್ಯ ಸಮಸ್ಯೆ ಉಂಟಾದರೆ ತಕ್ಷಣ ಚಿಕಿತ್ಸೆ ಒದಗಿಸಲು ಕ್ರಮ ವಹಿಸಿ ಜೊತೆಗೆ ಸಮಸ್ಯೆಗೆ ಮೂಲ ಕಾರಣ ಪರಿಶೀಲಿಸಬೇಕು. ಅನಾವಶ್ಯಕ ಗೊಂದಲ ಸೃಷ್ಟಿಗೆ ಅವಕಾಶವಾಗದಂತೆ ನಿಗಾ ವಹಿಸಲು ತಿಳಿಸಿದರು.
ಪ್ರತಿ ತಾಲೂಕಿನಲ್ಲಿರುವ ತಾಯಿ ಮಗುವಿನ ಮಾಹಿತಿ ತಾಲೂಕು ಆರೋಗ್ಯಾಧಿಕಾರಿ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಬಳಿ ಇರಬೇಕು. ಸರ್ಕಾರದ ಸವಲತ್ತುಗಳು ಅರ್ಹರಿಗೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗುವಂತೆ ಸೂಚಿಸಿದರು.
ಬಾಲ ಸಂಜೀವಿನಿ ಯೋಜನೆಯಡಿ ಬೆಂಗಳೂರಿನ ಇಂದಿರಾ ಗಾಂಧಿ ಆಸ್ಪತ್ರೆಯಲ್ಲಿ 21 ಗಂಡು ಮಕ್ಕಳು ಹಾಗೂ 15 ಹೆಣ್ಣು ಮಕ್ಕಳು ಸೇರಿದಂತೆ ಒಟ್ಟು 36 ಮಕ್ಕಳಿಗೆ ಚಿಕಿತ್ಸೆ ಕಲ್ಪಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ಸಭೆಗೆ ಮಾಹಿತಿ ನೀಡಿದರು.
ಅಪರ ಜಿಲ್ಲಾಧಿಕಾರಿ ಡಾ.ಗೋಪಾಲಕೃಷ್ಣ, ಅಧಿಕಾರಿ ರಾಮಚಂದ್ರ ಇದ್ದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಪಿ.ಎಲ್.ಶ್ಯಾಮಲಾದೇವಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಶಂಕರ್ ನಾನಾ ಅಧಿಕಾರಿಗಳು ಇದ್ದರು.