'ಸರ್ಕಾರಿ ಶಾಲೆಗಳ ಗುಣಮಟ್ಟ ವೃದ್ಧಿಸಲಿ'
ಸಕಲೇಶಪುರ: ಖಾಸಗಿ ಶಾಲೆಗಳ ಪೈಪೋಟಿ ಎದುರಿಸಲು ಸರ್ಕಾರಿ ಶಾಲೆಗಳು ತಮ್ಮ ಗುಣಮಟ್ಟ ಏರಿಕೆ ಮಾಡಿಕೊಳ್ಳಬೇಕಾಗಿದೆ ಎಂದು ಪುರಸಭೆ ಸದಸ್ಯ ನಿರ್ವಾಣಯ್ಯ ಹೇಳಿದರು.
ಪಟ್ಟಣದ ಆಗ್ರಹಾರ ಬಡಾವಣೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕಲಿಕೋತ್ಸವದಲ್ಲಿ ಮಾತನಾಡಿದ ಅವರು, ಸರ್ಕಾರಿ ಶಾಲೆ ಶಿಕ್ಷಕರನ್ನು ನಾನಾ ಚಟುವಟಿಕೆಯಲ್ಲಿ ತೊಡಗಿಸುವುದರಿಂದಾಗಿ ಮಕ್ಕಳ ಕಲಿಕೆಗೆ ಹಿನ್ನಡೆಯಾಗಿದೆ ಎಂದರು.
ಸರ್ಕಾರಿ ಶಾಲೆಗಳನ್ನು ಸದೃಢಗೊಳಿಸಬೇಕಿದ್ದರೆ 1ನೇ ತರಗತಿಯಿಂದ ಇಂಗ್ಲಿಷ್ ಶಿಕ್ಷನ ಕಡ್ಡಾಯಗೊಳಿಸಬೇಕಿದೆ. ಇಂಗ್ಲಿಷ್ ವ್ಯಾಮೋಹಕ್ಕೆ ಒಳಗಾಗಿರುವ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆ ಎಂದು ತಿಳಿಸಿದರು.
ಬಿಆರ್‌ಸಿ ತಿಮ್ಮಶೆಟ್ಟಿ ಮಾತನಾಡಿ, ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳಸಬೇಕಾದರೆ ಖಾಸಗಿ ಶಾಲೆಗಳಿಗೆ ಸರಿಸಮನಾದ ಶಿಕ್ಷಣ ಸರ್ಕಾರಿ ಶಾಲೆಗಳಲ್ಲಿ ದೊರಕುವಂತಾಗಬೇಕು ಎಂಬ ನಿಟ್ಟಿನಲ್ಲಿ ಕಲಿಕೋತ್ಸವದಂತಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಸರ್ಕಾರಿ ಶಾಲೆಗೆ ಬರುವ ದುರ್ಬಲ ಹಾಗೂ ಅನಕ್ಷರಸ್ಥ ಕುಟುಂಬದ ಮಕ್ಕಳನ್ನು ಖಾಸಗಿ ಶಾಲೆಯ ಮಕ್ಕಳಿಗೆ ಸರಿಸಮನಾಗಿ ಬೆಳೆಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ನುಡಿದರು.
ಪುರಸಭೆ ಉಪಾಧ್ಯಕ್ಷ ಮುಖೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಅಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಮಣಿ, ಮಾತೆಯರ ಸಂಘದ ಅಧ್ಯಕ್ಷೆ ಗುಲ್ಸಿರ್‌ಬಾನು, ಮುಖ್ಯ ಶಿಕ್ಷಕ ಸಿದ್ದಲಿಂಗಯ್ಯ, ಕೃಷ್ಣಶೆಟ್ಟಿ, ಶಂಕರ್, ಜಯಂತಿ ಇದ್ದರು.