'ಜಿಲ್ಲೆಯಲ್ಲಿ ಈ ಬಾರಿ ಮಹಿಳೆಯರಿಗೆ ಟಿಕೆಟ್ ಇಲ್ಲ'
ಹಾಸನ: ಜಿಲ್ಲೆಯಲ್ಲಿ ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಮಹಿಳೆಯರಿಗೆ ಟಿಕೆಟಟ್ನೀಡುತ್ತಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಹೇಳುವ ಮೂಲಕ ಭವಾನಿ ರೇವಣ್ಣ ಅವರು ಸ್ಪರ್ಧಿಸುವುದಿಲ್ಲ ಎಂಬ ಸಂದೇಶವಾಗಿ ರವಾನಿಸಿದರು. ಚುನಾವಣೆಯಲ್ಲಿ ಸ್ಪರ್ಧಿಸುವ ಬಯಕೆಯನ್ನು ಭವಾನಿ ರೇವಣ್ಣ ಹೊಂದಿದ್ದು, ಈಗ ಕುಮಾರಸ್ವಾಮಿ ಅವರು ಜಿಲ್ಲೆಯಲ್ಲಿ ಮಹಿಳೆಯರಿಗೆ ಈ ಬಾರಿ ಟಿಕೆಟ್ ನೀಡುವುದಿಲ್ಲ ಎಂದಿರುವುದು ಜೆಡಿಎಸ್ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಶನಿವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡುತ್ತಿದ್ದ ಕುಮಾರಸ್ವಾಮಿ ಅವರು, ಜಿಲ್ಲೆಯಲ್ಲಿ ಬೇಲೂರು ಒಂದನ್ನು ಬಿಟ್ಟು ಎಲ್ಲಾ ಕ್ಷೇತ್ರಗಳ ಅಭ್ಯರ್ಥಿಗಳನ್ನು ರೇವಣ್ಣನವರು ಅಂತಿಮಗೊಳಿಸಿದ್ದಾರೆ. ಪುರುಷರಲ್ಲಿ ತೀವ್ರ ಪೈಪೋಟಿ ಏರ್ಪಟ್ಟಿರುವುದರಿಂದ ಮಹಿಳೆಯರಿಗೆ ಟಿಕೆಟ್ ನೀಡುವುದಿಲ್ಲ ಎಂದು ಹೇಳಿದರು.