ಲೋಕಾ ಡಿವೈಎಸ್ಪಿ ಅಸಮಾಧಾನ
ಬೇಲೂರು: ಉದ್ಯೋಗ ಖಾತ್ರಿ ಯೋಜನೆಯಡಿ ಫಲಾನುಭವಿಗಳ ಸಹಿ ಎಲ್ಲವೂ ಒಂದೇ ತರಹ ಇರುವುದನ್ನು ಕಂಡು ಲೋಕಾಯುಕ್ತ ಅಧೀಕ್ಷಕ ಡಾ.ವೇದಮೂರ್ತಿ ಅಸಮಾಧಾನ ವ್ಯಕ್ತಪಡಿಸಿದರು.
ತಾಲೂಕು ಪಂಚಾಯ್ತಿಯಲ್ಲಿ ಶುಕ್ರವಾರ ಕಡತಗಳನ್ನು ಪರಿಶೀಲಿಸಿದ ಬಳಿಕ ಮಾತನಾಡಿದ ಅವರು, 2012 ರಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ 40 ಮಂದಿ ಫಲಾನುಭವಿಗಳಿಗೆ ಹಣ ನೀಡಲಾಗಿದ್ದು, ಫಲಾನುಭವಿಗಳ ಸಹಿ ಒಂದೇ ರೀತಿಯಲ್ಲಿ ನಮೂದಾಗಿರುವುದು ಕಡತಗಳಲ್ಲಿ ಕಂಡು ಬಂತು.
ಒಟ್ಟು 37 ಗ್ರಾಮ ಪಂಚಾಯಿತಿಗಳಲ್ಲಿ ಸುಮಾರು 5 ಕೋಟಿ 34 ಲಕ್ಷ ರು. ಗಳು ನಾನಾ ಯೋಜನೆಯಲ್ಲಿ ಬಳಕೆಯಾಗಿರುವ ಹಣದ ಬಗ್ಗೆ ಲೆಕ್ಕಪರಿಶೋಧಕರು ಅತೃಪ್ತಿ ವ್ಯಕ್ತಪಡಿಸಿದ್ದು, ಕೂಡಲೇ ಈ ಬಗ್ಗೆ ತಾಪಂ ಅಧಿಕಾರಿಗಳು ಸಮಜಾಯಿಸಿ ನೀಡದಿದ್ದಲ್ಲಿ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವ ಎಚ್ಚರಿಕೆ ನೀಡಿದರು.
ಸರ್ಕಾರ ಅಭಿವೃದ್ಧಿ ಯೋಜನೆಗಳಿಗೆ 3 ಕೋಟಿ ರು. ನೀಡಿದೆ. ಆದರೆ ಇದನ್ನು ಬಳಕೆ ಮಾಡುವಲ್ಲಿ ವಿಫಲವಾಗಿದ್ದು ಸಂಪೂರ್ಣ ಹಣ ಸರ್ಕಾರಕ್ಕೆ ವಾಪಸ್ಸು ಹೋಗಿದೆ. ಪಂಚಾಯಿತಿಗಳಲ್ಲಿ ಕಂಪ್ಯೂಟರ್ ಖರೀದಿ ಮಾಡುವಾಗ ಟೆಂಡರ್ ಕರೆಯದೆ ಖರೀದಿ ಮಾಡಿರುವುದು ಕಂಡು ಬಂದಿದೆ ಎಂದು ತಿಳಿಸಿದರು.
ತೋಟಗಾರಿಕೆ ಇಲಾಖೆ, ಪುರಸಭೆ ಹಾಗೂ ಮುರಾರ್ಜಿ ವಸತಿ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಾರ್ವಜನಿಕರಿಂದ ವಿವಿಧ ರೀತಿಯ ದೂರುಗಳನ್ನು ಸ್ವೀಕರಿಸಿ ವಿಚಾರಣೆ ನಡೆಸಿದರು. ಲೋಕಾಯುಕ್ತ ಇನ್ಸ್ಪೆಕ್ಟರ್ ನರಸಿಂಹಮೂರ್ತಿ ಸಿಬ್ಬಂದಿ ಇದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.