ಹೆಚ್ಚು ಪರಿಹಾರ ಆಗ್ರಹದ ಅರ್ಜಿಗಳ ಸಲ್ಲಿಸಲು ರೈತರಿಗೆ ತಹಸೀಲ್ದಾರ್ ಮನವಿ
ಚನ್ನರಾಯಪಟ್ಟಣ: ರಾಷ್ಟ್ರೀಯ ಹೆದ್ದಾರಿ 48ನ್ನು ಚತುಷ್ಪಥ ರಸ್ತೆಯಾಗಿ ನಿರ್ಮಾಣ ಮಾಡುವ ಉದ್ದೇಶದಿಂದ ಸರ್ಕಾರ ಸ್ವಾಧೀನ ಪಡಿಸಿಕೊಂಡಿರುವ ಭೂಮಿಗೆ ಹೆಚ್ಚು ಪರಿಹಾರ ನೀಡಬೇಕೆಂದು ಒತ್ತಾಯಿಸುತ್ತಿರುವ ರೈತರು ತಮ್ಮ ಅರ್ಜಿಯನ್ನು ಸಂಬಂಧಪಟ್ಟ ಕಚೇರಿಗೆ ನೀಡಬೇಕೆಂದು ತಹಸೀಲ್ದಾರ್ ಸುನಿಲ್ ಕುಮಾರ್ ಮನವಿ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಚತುಷ್ಪಥ ರಸ್ತೆ ನಿರ್ಮಾಣಕ್ಕೂ ಮುನ್ನಾ ಸರ್ಕಾರ ಪರಿಹಾರದ ಹಣವನ್ನು ನಿಗದಿ ಮಾಡಿ ರೈತರಿಗೆ ನೀಡಿದ್ದು, ಹೆಚ್ಚು ಪರಿಹಾರ ನೀಡಬೇಕೆಂದು ರೈತರು ಒತ್ತಾಯಿಸುತ್ತಿರುವ ಹಿನ್ನಲೆಯಲ್ಲಿ ಸ್ಥಳ ಪರಿಶೀಲನೆಗಾಗಿ ಜಿಲ್ಲಾಧಿಕಾರಿಗಳು ತಾಲೂಕಿನ ಪ್ರತಿ ಹೋಬಳಿಗೆ ಬೇಟಿ ನೀಡುತ್ತಿದ್ದು, ರೈತರು ತಮ್ಮ ಅರ್ಜಿಗಳನ್ನು ನೀಡಿದರೆ ಪರಿಶೀಲನೆ ನಡೆಸಲಿದ್ದಾರೆ ಎಂದು ತಿಳಿಸಿದರು.
ಹಿರೀಸಾವೆ ಹೋಬಳಿಯಲ್ಲಿ ಜಮೀನು ಕಳೆದುಕೊಂಡಿರುವ ರೈತರಿಂದ ಜಿಲ್ಲಾಧಿಕಾರಿಗಳು ಅರ್ಜಿ ಸ್ವೀಕಾರ ಮಾಡಿದ್ದು, ಮುಂದಿನ ದಿನಗಳಲ್ಲಿ ಕಸಬಾ ಹಾಗೂ ದಂಡಿಗನಹಳ್ಳಿ ಹೋಬಳಿಗೆ ಭೇಟಿ ನೀಡಲಿದ್ದಾರೆ.
ಹೆದ್ದಾರಿಯ ಅಕ್ಕಪಕ್ಕದಲ್ಲಿ ವಾಸ ಮಾಡುತ್ತಿದ್ದ ಜನತೆ ತಮ್ಮ ಮನೆಗಳು ಹಾಗೂ ನಿವೇಶನಗಳನ್ನು ಕಳೆದುಕೊಂಡಿದ್ದರೆ ಅಂತಹವರು ಬಿಪಿಎಲ್ ಕಾರ್ಡ್ ಹೊಂದಿದ್ದರೆ ಅಂತಹ ವ್ಯಕ್ತಿಗಳು ಅರ್ಜಿ ಸಲ್ಲಿಸಿದರೆ ನಿವೇಶನ ನೀಡುವ ಬಗ್ಗೆ ಪರಿಶೀಲನೆ ನಡೆಸಬಹುದಾಗಿದೆ ಎಂಬುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ ಎಂದು ಹೇಳಿದರು.
ರೈತರು ತಮಗೆ ಹೆಚ್ಚು ಪರಿಹಾರ ನೀಡಬೇಕೆಂದು ಅರ್ಜಿ ಸಲ್ಲಿಸಲು ಪಟ್ಟಣದ ಹೊಸ ಬಸ್ ನಿಲ್ದಾಣದ ಬಳಿ ರಾಷ್ಟ್ರೀಯ ಹೆದ್ದಾರಿ ವಿಶೇಷ ಭೂಸ್ವಾಧೀನಾಧಿಕಾರಿ ಕಚೇರಿ ತೆರೆಯಲಾಗಿದ್ದು, ಅಲ್ಲಿಗೆ ಅರ್ಜಿ ಸಲ್ಲಿಸಬೇಕೆಂದು ತಿಳಿಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.