ಅಸಮರ್ಪಕ ವಿದ್ಯುತ್; ಹಾರನಹಳ್ಳಿ ಗ್ರಾಮಸ್ಥರ ಪ್ರತಿಭಟನೆ
ಕ.ಪ್ರ.ವಾರ್ತೆ ಅರಸೀಕೆರೆ ಮಾ.12
ಅಸಮರ್ಪಕ ವಿದ್ಯುತ್ ಪೂರೈಕೆಯಿಂದ ವಿದ್ಯಾರ್ಥಿಗಳಿಗೆ ಹಾಗೂ ರೈತಾಪಿ ವರ್ಗದವರಿಗೆ ತೀವ್ರ ತೊಂದರೆಯಾಗಿದೆ ಎಂದು ಹಾರನಹಳ್ಳಿ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು, ರೈತ ಮುಖಂಡ ಕನಕಂಚೇನಹಳ್ಳಿ ಪ್ರಸನ್ನಕುಮಾರ್ ನೇತೃತ್ವದಲ್ಲಿ ತಾಲೂಕಿನ ಹಾರನಹಳ್ಳಿ ಚೆಸ್ಕಾಂ ಎದುರು ಪ್ರತಿಭಟನೆ ನಡೆಸಿ ಎಇಇ ದೇವರಾಜುರವರಿಗೆ ಮನವಿ ಸಲ್ಲಿಸಿದರು.
ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಮಯವಾಗಿರುವುದರಿಂದ ವಿದ್ಯುತ್ ಕಣ್ಣಾ ಮುಚ್ಚಾಲೆಯಿಂದ ತೀವ್ರ ತೊಂದರೆಯಾಗಿದ್ದು, ಸಾಲದೆಂಬಂತೆ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು ದೊರೆಯದೆ ಜನ, ಜಾನುವಾರುಗಳು ಸಂಕಷ್ಟದ ಪರಿಸ್ಥಿತಿ ಎದುರಿಸುವಂತಾಗಿದೆ. ಸಂಬಂಧಿಸಿದ ಅಧಿಕಾರಿಗಳು ಕೂಡಲೇ ಸೂಕ್ತ ಕ್ರಮ ಕೈಗೊಂಡು ಸಮರ್ಪಕ ವಿದ್ಯುತ್ ನೀಡಬೇಕೆಂದು ಆಗ್ರಹಿಸಿದರು.
ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಎಇಇ ದೇವರಾಜು ಪ್ರತಿಭಟನಾಕಾರರ ಮನವಿ ಸ್ವೀಕರಿಸಿ ಇದು ಪರೀಕ್ಷಾ ಕಾಲವೆಂಬುದು ತಮಗೆ ತಿಳಿದಿದೆ. ಅಲ್ಲದೇ ಕುಡಿಯುವ ನೀರಿಗೆ ತೊಂದರೆ ಎದುರಾಗಿದ್ದು ರೈತರು ಹಾಗೂ ವಿದ್ಯಾರ್ಥಿಗಳಿಗೆ ಅನಾನುಕೂಲವಾಗದಂತೆ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದ ನಂತರ ಪ್ರತಿಭಟನೆ ಕೈಬಿಡಲಾಯಿತು.
ಪ್ರತಿಭಟನೆಯಲ್ಲಿ ಗ್ರಾಮಸ್ಥರಾದ ಗುರುಲಿಂಗಪ್ಪ, ಮಹದೇವಪ್ಪ, ಸಿದ್ದೇಶ, ಜಾಫರ್ ಷರೀಫ್, ಶಿವಕುಮಾರ, ಅಶೋಕ, ಮಹೇಶ್, ಲಕ್ಕಮ್ಮ ಹಾಗೂ ಇತರರು ಇದ್ದರು.