ಚನ್ನರಾಯಪಟ್ಟಣ: ತಾಲೂಕಿನ ಹಿರೀಸಾವೆ ಏತ ನೀರಾವರಿ ಯೋಜನೆಗೆ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಶನಿವಾರ ಒಪ್ಪಿಗೆ ನೀಡಿದ್ದಾರೆ ಎಂದು ಮಾಜಿ ಶಾಸಕ ಸಿ.ಎಸ್. ಪುಟ್ಟೇಗೌಡ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಶನಿವಾರ ಹಿರೀಸಾವೆ ಹೋಬಳಿ ರೈತರ ತಂಡದೊಂದಿಗೆ ಮುಖ್ಯಮಂತ್ರಿ ಶೆಟ್ಟರ್ ಅವರನ್ನು ಭೇಟಿ ಮಾಡಿ ಹಿರೀಸಾವೆ ಏತ ನೀರಾವರಿ ಯೋಜನೆಗೆ ಒಪ್ಪಿಗೆ ನೀಡುವಂತೆ ಮನವಿ ಮಾಡಿದ ಹಿನ್ನಲೆಯಲ್ಲಿ ಒಪ್ಪಿಗೆ ನೀಡಿದ್ದಾರೆ ಎಂದು ತಿಳಿಸಿದರು. 52 ಕೋಟಿ ರು. ವೆಚ್ಚದ ಈ ಯೋಜನೆಗೆ ಮುಖ್ಯಮಂತ್ರಿಗಳು ಒಪ್ಪಿಗೆ ನೀಡಿದ್ದು, ಮುಂದಿನ ವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆದು ಯೋಜನೆಯ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದರು.