ಮದ್ಯದ ವಿರುದ್ಧ ಹೋರಾಡಿದ ಮಾನಿನಿಯರ ಮಾನ ಕಳೆದರು!
ಅರಸೀಕೆರೆ: ಅಕ್ರಮ ಮದ್ಯ ಮಾರಾಟದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಸ್ತ್ರೀಶಕ್ತಿ ಸಂಘದ ಸದಸ್ಯರ ಅಶ್ಲೀಲ ಭಿತ್ತಿಪತ್ರಗಳನ್ನು ಅಂಟಿಸಿದ್ದರಿಂದ ಮನನೊಂದ ಮಹಿಳೆಯೊಬ್ಬರು ಆತ್ಮಹತ್ಯೆಗೆ ಪ್ರಯತ್ನಿಸಿ ಸರ್ಕಾರಿ ಜೆ.ಸಿ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ. ಮುದುಡಿ ಗ್ರಾಮದ ರುದ್ರೇಶ್ ಎಂಬುವವರ ಪತ್ನಿ ಲೋಲಾಕ್ಷಿ ಆತ್ಮಹತ್ಯೆಗೆ ಯತ್ನಿಸಿದವರು. ಇವರು ಮಾ.21, ಗುರುವಾರದಂದು ಗ್ರಾಮದಲ್ಲಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟ ಸ್ಥಗಿತಗೊಳಿಸಬೇಕೆಂದು ಒತ್ತಾಯಿಸಿ ಹಾಸನ ಜಿಲ್ಲಾಧಿಕಾರಿ ಕಚೇರಿ ಎದುರು ಸತ್ಯಾಗ್ರಹ ನಡೆಸಿ ಮನವಿ ಸಲ್ಲಿಸಿದ್ದರು. ಆದರೆ, ಈ ಸಂಬಂಧ ಮದ್ಯದ ಅಂಗಡಿ ಮಾಲೀಕ ಆಕ್ಷೇಪ ವ್ಯಕ್ತಪಡಿಸಿ, ಹಲ್ಲೆ ನಡೆಸಿದ್ದ. ಈ ಸಂಬಂಧ ಗಂಡಸಿ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ರೀತಿ ಪ್ರತಿಭಟನೆ ನಡೆಸಿದ್ದ ಸ್ತ್ರೀಶಕ್ತಿ ಸಂಘದ ಮಹಿಳೆಯರ ಅಶ್ಲೀಲ ಭಿತ್ತಿಚಿತ್ರಗಳನ್ನು ಭಾನುವಾರ ಪಟ್ಟಣದಲ್ಲಿ ಅಲ್ಲಲ್ಲಿ ಅಂಟಿಸಿರುವುದನ್ನು ಕಂಡ ಲೋಲಾಕ್ಷಿ, ಮನನೊಂದು ನೇಣು ಹಾಕಿಕೊಳ್ಳಲು ಮುಂದಾದರು. ನಂತರ ಪೊಲೀಸರು ಅವರನ್ನು ತಡೆದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದರು.