ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಅಕ್ರಮ ರಹಿತ ಚುನಾವಣೆಯಿಂದ ಪ್ರಜಾಪ್ರಭುತ್ವ ಉಳಿವು

Parashurama
Updated On : 25 Mar 2013, 10:22 am

ಕ.ಪ್ರ.ವಾರ್ತೆ ಹಾಸನ  ಮಾ. 25
ಭಾರತೀಯ ಪ್ರಜಾಪ್ರಭುತ್ವ ಇದೇ ರೀತಿ ಉಳಿಯಬೇಕಾದರೆ ಚುನಾವಣೆಗಳು ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ನಡೆಯಬೇಕು. ಎಲ್ಲ ರೀತಿಯ ಅಕ್ರಮಗಳಿಗೆ ಕಡಿವಾಣ ಹಾಕಬೇಕು. ಇಲ್ಲದಿದ್ದರೆ ಚುನಾವಣೆಯ ಪರಿಕಲ್ಪನೆಗೆ ಹಿನ್ನಡೆಯಾಗುತ್ತದೆ. ಈ ಬಗ್ಗೆ ಪ್ರತಿಯೊಬ್ಬರು ಎಚ್ಚರಿಕೆ ವಹಿಸಿ ರಾಜ್ಯ ವಿಧಾನಸಭೆ ಚುನಾವಣೆಯನ್ನು ಯಶಸ್ವಿಗೊಳಿಸಬೇಕು ಎಂದು ಕೇಂದ್ರ ಚುನಾವಣೆ ಆಯೋಗದ ಮಹಾ ನಿರ್ದೇಶಕ (ಖರ್ಚು, ವೆಚ್ಚ) ಪಿ.ಕೆ ದಾಸ್ ತಿಳಿಸಿದ್ದಾರೆ.
ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಇತರ ಅಧಿಕಾರಿಗಳೊಂದಿಗೆ ಭಾನುವಾರ ನಡೆದ ವಿಡಿಯೋ ಕಾನ್ಫ್‌ರೆನ್ಸಿಂಗ್‌ನಲ್ಲಿ  ಮಾತನಾಡಿದ ಅವರು, ದೇಶದಲ್ಲಿ ಉತ್ತಮ ಚುನಾವಣಾ ವ್ಯವಸ್ಥೆ ಇದೆ. ಈಗಾಗಲೇ ಚುನಾವಣೆಯಲ್ಲಿ ತೋಳ್ಬಲದ ಪ್ರಭಾವವನ್ನು ಸಂಪೂರ್ಣವಾಗಿ ಹತ್ತಿಕ್ಕಲಾಗಿದೆ.
ಈ ಬಾರಿಯ ಚುನಾವಣೆಯಲ್ಲಿ ಹಣಬಲವನ್ನು ಮಟ್ಟ ಹಾಕಬೇಕಿದೆ. ಇದಕ್ಕೆ ಎಲ್ಲಾ ಅಧಿಕಾರಿಗಳು ಪ್ರಾಮಾಣಿಕವಾಗಿ ಶ್ರಮಿಸಬೇಕು, ಮತದಾರರು ಜವಾಬ್ದಾರಿ ಪ್ರದರ್ಶಿಸಬೇಕಿದೆ ಎಂದರು.
ಭಾರತೀಯ ಚುನಾವಣಾ ವ್ಯವಸ್ಥೆ ಇಡೀ ಜಗತ್ತಿನಲ್ಲೆ ಮೆಚ್ಚುಗೆಗೆ ಪಾತ್ರವಾಗಿದೆ. ಈಗಾಗಲೇ ವಿಶ್ವದ 17 ರಾಷ್ಟ್ರಗಳು ಚುನಾವಣೆಗಳನ್ನು ಹೇಗೆ ನಡೆಸಬೇಕೆಂಬುದರ ಬಗ್ಗೆ ಇಲ್ಲಿಂದ ತರಬೇತಿ ಪಡೆಯುತ್ತಿವೆ. ಇನ್ನೂ ಹತ್ತು ಹಲವು ರಾಷ್ಟ್ರಗಳು ಸರದಿ ಸಾಲಿನಲ್ಲಿ ಕಾಯುತ್ತಿದ್ದು ಹೆಮ್ಮೆಯ ವಿಚಾರ ಎಂದರು.
ಚುನಾವಣಾ ನೀತಿ ಸಂಹಿತೆ ಈಗಾಗಲೇ ಜಾರಿಯಾಗಿದ್ದು ಅದನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಮದ್ಯದ ಅಕ್ರಮ ಸಂಗ್ರಹಣೆ, ಅಧಿಕ ಮಾರಾಟದ ಬಗ್ಗೆ ನಿಗಾ ವಹಿಸಿ, ಮತದಾರರಿಗೆ ಆಮಿಷಗಳನ್ನು ಒಡ್ಡದಂತೆ ನೋಡಿಕೊಳ್ಳಿ. ಹೋಬಳಿವಾರು ಸಂಚಾರಿ ತಂಡಗಳನ್ನು ರಚಿಸಿ ಪ್ರತಿಯೊಂದು ಚಟುವಟಿಕೆಗಳ ಮೇಲೆ ಗಮನ ಹರಿಸಿ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಿದರು.
ರಾಜ್ಯ ಮುಖ್ಯ ಚುನಾವಣಾ ಆಯುಕ್ತರಾದ ಅನಿಲ್ ಕುಮಾರ್ ಝಾ ಅವರು ಮಾತನಾಡಿ, ಬಸ್ಸು, ರೇಲ್ವೆ ನಿಲ್ದಾಣಗಳಲ್ಲಿ ಮತ್ತು ಚೆಕ್ ಪೋಸ್ಟ್‌ಗಳಲ್ಲಿ ತಪಾಸಣೆಗಳು ನಡೆಯಬೇಕು. ಈ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿ ತಾವು ಕೊಂಡೊಯ್ಯುತ್ತಿರುವ ಹಣಕಾಸಿಗೆ ಸೂಕ್ತ ದಾಖಲೆ ತಮ್ಮ ಬಳಿ ಇಟ್ಟುಕೊಂಡಿರುವಂತೆ ಸೂಚಿಸಬೇಕೆಂದು ತಿಳಿಸಿದರು.
ರಾಜಕೀಯ ಪಕ್ಷಗಳು ನಡೆಸುವ ಸಭೆ ಸಮಾರಂಭಗಳನ್ನು ಸಂಪೂರ್ಣ ವಿಡಿಯೋ ಚಿತ್ರಿಕರಣ ಮಾಡಿಕೊಳ್ಳಬೇಕು ಮತ್ತು ಅದಕ್ಕೆ ತಗಲುವುವ ವೆಚ್ಚಗಳನ್ನು ಆಯಾಯ ರಾಜಕೀಯ ಪಕ್ಷಗಳ ಲೆಕ್ಕಕ್ಕೆ ತೆಗೆದುಕೊಳ್ಳಬೇಕು.
ಮತದಾರರ ನೋಂದಣಿಯಲ್ಲಿ ಯಾವುದೇ ಅಕ್ರಮಗಳು ಆಗದಂತೆ ಎಚ್ಚರಿಕೆ ವಹಿಸಬೇಕು. ಎಲ್ಲರೂ ಮತದಾನದಲ್ಲಿ ಪಾಲ್ಗೊಳ್ಳುವಂತೆ ಪ್ರೇರೇಪಿಸಬೇಕು. ಅದಕ್ಕೆ ಯೋಜನೆ ರೂಪಿಸಿ ಅನುಷ್ಠಾನಗೊಳಿಸಿ ಎಂದು ಝಾ ತಿಳಿಸಿದರು. ಜಿಲ್ಲಾಧಿಕಾರಿ ಕೆ.ಪಿ.ಮೋಹನ್‌ರಾಜ್ ಅವರು ಜಿಲ್ಲೆಯಲ್ಲಿ ಈ ವರಗೆ ಮಾಡಿಕೊಳ್ಳಲಾಗಿರುವ ಚುನಾವಣಾ ತಯಾರಿ ಬಗ್ಗೆ ಮಾಹಿತಿ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಸಿಂಗ್ ಅವರು ಕಾನೂನು ಸುವ್ಯವಸ್ಥೆ ನಿರ್ವಹಣೆಗೆ ಮಾಡಿಕೊಂಡಿರುವ ಕ್ರಮಗಳನ್ನು ವಿವರಿಸಿದರು. ವಿವಿಧ ಇಲಾಖಾ ಅಧಿಕಾರಿಗಳು  ಸಭೆಯಲ್ಲಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments