ಅಕ್ರಮ ಮದ್ಯ ಮಾರಾಟ : ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ
ಕನ್ನಡಪ್ರಭವಾರ್ತೆ ಹಾಸನ ಮಾ.26
ಅಕ್ರಮ ಮದ್ಯ ಮಾರಾಟ ತಡೆಯಲು ತಾಲೂಕು ಮಟ್ಟದ ಅಬಕಾರಿ ಇಲಾಖೆ ಸಿಬ್ಬಂದಿಗೆ ಹೋಬಳಿವಾರು ಕೆಲಸ ಹಂಚಿಕೆ ಮಾಡಿ ನಿರ್ವಹಣೆ ಜವಾಬ್ದಾರಿ ವಹಿಸುವಂತೆ ಜಿಲ್ಲಾಧಿಕಾರಿ ಕೆ.ಪಿ. ಮೋಹನ್ರಾಜ್ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಅಬಕಾರಿ ಇಲಾಖೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ದಾಳಿ ಸಂದರ್ಭದಲ್ಲಿ ಅಕ್ರಮ ಮದ್ಯ ವಶಕ್ಕೆ ತೆಗೆದುಕೊಂಡು ಯಾವ ಕಂಪನಿ, ಯಾವ ಬ್ರಾಂಡ್, ಎಲ್ಲಿಂದ ಸರಬರಾಜಾಗಿದೆ ಎಂಬಿತ್ಯಾದಿ ಮಾಹಿತಿ ಕಲೆಹಾಕುವಂತೆ ಹಾಗೂ ಈ ಬಗ್ಗೆ ಜಿಲ್ಲಾಧಿಕಾರಿ ಕಚೇರಿಗೂ ಮಾಹಿತಿ ನೀಡುವಂತೆ ಸೂಚಿಸಿದರು. ಚುನಾವಣೆ ಸಂದರ್ಭದಲ್ಲಿ ಮದ್ಯ ಸರಬರಾಜು ಹಾಗೂ ಸಣ್ಣ ಸಣ್ಣ ಅಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಲಾಗುವುದು. ಈ ನಿಟ್ಟಿನಲ್ಲಿ ಕಟ್ಟುನಿಟ್ಟಾಗಿ ಪರಿಶೀಲಿಸಿ ಕ್ರಮ ತೆಗೆದುಕೊಳ್ಳುವಂತೆ ಅಬಕಾರಿ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಒಂದು ಸಾವಿರ ಕೇಸ್ಗಳಿಗಿಂತ ಅತಿ ಹೆಚ್ಚು ವ್ಯಾಪಾರ ಆಗುವ ಮದ್ಯದ ಅಂಗಡಿಗಳ ಮೇಲೆ ನಿಗಾ ಇಡುವಂತೆ ತಿಳಿಸಿದರು. ಜಿಲ್ಲಾ ಎಸ್ಪಿ ಅಮಿತ್ಸಿಂಗ್ ಅಕ್ರಮ ಮದ್ಯ ಮಾರಾಟ, ಸರಬರಾಜು ತಯಾರಿಕೆ ನಿಯಂತ್ರಿಸಲು ಗಮನ ಹರಿಸುವಂತೆ ಸೂಚಿಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.