ಅಂಗಡಿ- ಮನೆಗಳಲ್ಲಿ ಅಕ್ರಮ ಮದ್ಯ ಮಾರಾಟ
ಕ.ಪ್ರ. ವಾರ್ತೆ ಸಕಲೇಶಪುರ ನ.8
ಅಂಗಡಿ ಮತ್ತು ಕೆಲವು ಮನೆಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವುದರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳ ಬೇಕೆಂದು ತಾಲೂಕು ಪಂಚಾಯ್ತಿ ಅಧ್ಯಕ್ಷೆ ಮಂಜುಳ ಸಂಬಂಧಪಟ್ಟ ಅಧಿಕಾರಿಗಳಿಗೆ ತಾಕೀತು ಮಾಡಿದರು.
ತಾಲೂಕು ಪಂಚಾಯ್ತಿ ಸಾಮರ್ಥ್ಯ ಸೌಧ ಸಭಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು, ತಾಲೂಕಿನ ನಾನಾ ಕಡೆ ಅಕ್ರಮವಾಗಿ ಮದ್ಯ ಮಾರಾಟ ಯಾವುದೇ ಲಂಗು ಲಗಾಮು ಇಲ್ಲದೆ ನಡೆಯುತ್ತಿದೆ ಎಂದು ಸ್ತ್ರೀಶಕ್ತಿ ಮತ್ತು ಸ್ವಸಹಾಯ ಸಂಘಗಳಿಂದ ಸಾಕಷ್ಟು ದೂರು ಕೇಳಿ ಬರುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ಮದ್ಯ ಮಾರಾಟ ಮಾಡುತ್ತಿರುವವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು.
ಕ್ರಾಫರ್ಡ್ ಆಸ್ಪತ್ರೆಯ ತಾಲೂಕು ವೈದ್ಯಾಧಿಕಾರಿ ಇಂದುಶೇಖರ್ ಮಾತನಾಡಿ, ಆಸ್ಪತ್ರೆಯಲ್ಲಿ ಕುಡಿಯುವ ನೀರಿಗೆ ತೊಂದರೆ ಉಂಟಾಗುತ್ತಿದ್ದು ಪುರಸಭೆಗೆ ಹಲವು ಬಾರಿ ಮನವಿ ಮಾಡಿದರೂ ಸ್ಪಂದಿಸುತ್ತಿಲ್ಲ, ಕೂಡಲೇ ಸಮಸ್ಯೆಯನ್ನು ನಿವಾರಿಸಬೇಕೆಂದು ಮನವಿ ಮಾಡಿದರು.
ಉಪನೋಂದಣಿ ಇಲಾಖೆಯ ಅಧಿಕಾರಿ, ಅಕ್ಟೋಬರ್ ತಿಂಗಳಿನಲ್ಲಿ ನಾನಾ ನೋಂದಣಿಗಳಿಂದ 2,13,15,942 ರು. ಸಂಗ್ರಹ ಮಾಡಲಾಗಿದೆ ಎಂದು ತಿಳಿಸಿದರು.
ಅಬಕಾರಿ ಇಲಾಖೆ ಸಿಬ್ಬಂದಿ ಮಾತನಾಡಿ, ತಾಲೂಕಿನಲ್ಲಿ ಇತ್ತೀಚೆಗೆ ಕಳ್ಳಬಟ್ಟಿ ಹಾವಳಿ ನಿಯಂತ್ರಣದಲ್ಲಿದ್ದು ಮದ್ಯದ ಅಂಗಡಿಗಳಲ್ಲಿ ಹೆಚ್ಚಿನ ದರಕ್ಕೆ ಮದ್ಯವನ್ನು ಮಾರಲಾಗುತ್ತಿದೆ. ಇದನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಆಹಾರ ಇಲಾಖೆಯ ಅಧಿಕಾರಿ ಮಾತನಾಡಿ, ತಾಲೂಕಿನಲ್ಲಿ ಪಡಿತರ ಚೀಟಿಯನ್ನು ವಿತರಿಸಲಾಗುತ್ತಿದ್ದು, ಅರ್ಜಿದಾರರ ಮನೆಗೆ ಖುದ್ದಾಗಿ ಹೋಗಿ ಅಧಿಕಾರಿಗಳು ಪರಿಶೀಲನೆ ಮಾಡಿ ವರದಿ ನೀಡಿದ ನಂತರ ಪಡಿತರ ಚೀಟಿಯನ್ನು ನೀಡಲಾಗುವುದು ಎಂದು ನುಡಿದರು.
ಮಳೆಗಾಲ ಕಳೆದಿರುವುದರಿಂದ ಮುಂದಿನ ವರ್ಷ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಅಂಗನವಾಡಿ ಕಟ್ಟಡಗಳನ್ನು ನಿರ್ಮಿಸಲು ಕ್ರಿಯಾ ಯೋಜನೆ ತಯಾರಿಸಲಾಗುವುದೆಂದು ಮಹಿಳಾ ಮತ್ತು ಮಕ್ಕಳ ಇಲಾಖೆ ಅಧಿಕಾರಿ ಕೆಂಪರಾಜು ತಿಳಿಸಿದರು.
ಪಶು ಸಂಗೋಪನೆ ಇಲಾಖೆ, ಸರ್ವೇ ಯಸಳೂರು ವಲಯ ಅರಣ್ಯ ಇಲಾಖೆ, ಕಾರ್ಮಿಕ, ಕೈಗಾರಿಕೆ ಹಾಗೂ ಮೀನುಗಾರಿಕೆ ಇಲಾಖೆ ಅಧಿಕಾರಿಗಳು ಸಭೆಗೆ ಗೈರು ಹಾಜರಾದ್ದರಿಂದ ಅವರಿಗೆ ಎಚ್ಚರಿಕೆ ನೋಟಿಸ್ ನೀಡಲು ನಿರ್ಧರಿಸಲಾಯಿತು.
ತಾಲೂಕು ಪಂಚಾಯ್ತಿ ಉಪಾಧ್ಯಕ್ಷೆ ವೇದಾವತಿ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಭಜಂತ್ರಿ, ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷ ಬಿ.ಸಿದ್ಧಯ್ಯ, ಜಿಪಂ ಸದಸ್ಯರಾದ ಮಂಜುಳ, ತಿಪ್ಪೇಸ್ವಾಮಿ ಇದ್ದರು.