ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಟೂರ್ನಿಗೆ ಚಾಲನೆ
ಹಾಸನ: ಕ್ರೀಡೆಯಿಂದ ದೈಹಿಕ ಸಾಮರ್ಥ್ಯದ ಜೊತೆಗೆ ಮಾನಸಿಕ ಸ್ಥೈರ್ಯ, ಆತ್ಮವಿಶ್ವಾಸ ಹೆಚ್ಚುತ್ತದೆ ಎಂದು ಶಾಸಕ ಎಚ್.ಎಸ್.ಪ್ರಕಾಶ್ ಹೇಳಿದರು.ಪದವಿಪೂರ್ವ ಶಿಕ್ಷಣ ಇಲಾಖೆ ಆಶ್ರಯದಲ್ಲಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಷಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.
ವಿಧಾನ ಪರಿಷತ್ ಸದಸ್ಯ ಪಟೇಲ್ ಶಿವರಾಂ ಮಾತನಾಡಿ, ಕ್ರೀಡೆಯಲ್ಲಿ ಸೋಲು ಗೆಲವುಗಳು ಸಹಜ, ಕ್ರೀಡಾ ಮನೋಭಾವದಿಂದ ಪಾಲ್ಗೊಳ್ಳುವಿಕೆ ಮುಖ್ಯ ಎಂದರು.ನಗರಸಭೆ ಅಧ್ಯಕ್ಷರಾದ ವಿದ್ಯಾ ಆನಂದ್ ಮಾತನಾಡಿ ಕ್ರೀಡಾಕೂಟಕ್ಕೆ ಹಾಗೂ ಪಂದ್ಯಗಳಿಗೆ ಶುಭ ಹಾರೈಸಿದರು.ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ಶಿವಾನಂದ್ ಮಾತನಾಡಿ, ಇತ್ತೀಚಿನ ವರ್ಷಗಳಲ್ಲಿ ಷಟಲ್ ಬ್ಯಾಡ್ಮಿಂಟನ್ಗೆ ಹೆಚ್ಚಿನ ಬೇಡಿಕೆ ಬರುತ್ತಿದೆ. ಹಾಸನ ನಗರದಲ್ಲಿ ಷಟಲ್ ಬ್ಯಾಡ್ಮಿಂಟನ್ ಆಟಕ್ಕೆ ಕೇವಲ ಒಂದು ಒಳಾಂಗಣ ಕ್ರೀಡಾಂಗಣವಿದ್ದು, ಇನ್ನೊಂದು ಒಳಾಂಗಣ ಕ್ರೀಡಾಂಗಣದ ಅಗತ್ಯವಿದೆ. ಈ ಬಗ್ಗೆ ಜಿಲ್ಲಾಡಳಿತದ ಗಮನಕ್ಕೆ ತರಲಾಗಿದೆ. ಇದರ ಅನುಷ್ಠಾನಕ್ಕೆ ಜನಪ್ರತಿಗಳ ಸಹಕಾರವೂ ಅಗತ್ಯ ಎಂದರು.ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಎನ್.ರಾಜಮ್ಮ ಮೊದಲಾದವರು ಇದ್ದರು.