ಹೇಮಗಂಗೋತ್ರಿ ಪರಿಪೂರ್ಣ ವಿವಿಯಾಗಲಿ
ಕ.ಪ್ರ.ವಾರ್ತೆ , ಹಾಸನ , ನ. 13
ಜಿಲ್ಲಾ ಕೇಂದ್ರದಲ್ಲಿರುವ ಮೈಸೂರು ವಿಶ್ವವಿದ್ಯಾಲಯ ಹೇಮಗಂಗೋತ್ರಿ ಸ್ನಾತಕೋತ್ತರ ಕೇಂದ್ರವನ್ನು ಪೂರ್ಣ ಪ್ರಮಾಣದ ವಿಶ್ವವಿದ್ಯಾಲಯವನ್ನಾಗಿ ಪರಿವರ್ತಿಸಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಮತ್ತು ಕೇಂದ್ರ ಸರ್ಕಾರವನ್ನು ಆಗ್ರಹಿಸಿದೆ. 1992 ರಲ್ಲಿ ಪ್ರಾರಂಭವಾದ ಈ ಸ್ನಾತಕೋತ್ತರ ಕೇಂದ್ರ 21 ವರ್ಷ ಪೂರೈಸಿದ್ದು, ಕೇಂದ್ರ ಪ್ರಾರಂಭವಾದ ನಂತರದಲ್ಲಿ ಪ್ರಾರಂಭಿಸಲಾದ ಬೆಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರವಾಗಿದ್ದ ತುಮಕೂರು ಸ್ನಾತಕೋತ್ತರ ಕೇಂದ್ರವನ್ನು ಕೇವಲ 10 ವರ್ಷಗಳಲ್ಲಿ ವಿಶ್ವವಿದ್ಯಾಲಯವನ್ನಾಗಿ ಪರಿವರ್ತಿಸಲಾಗಿದೆ. ಆದರೆ ಹೇಮಗಂಗೋತ್ರಿ ಸ್ನಾತಕೋತ್ತರ ಕೇಂದ್ರವನ್ನು ಈವರೆಗೂ ವಿಶ್ವವಿದ್ಯಾಲಯವನ್ನಾಗಿ ಪರಿವರ್ತಿಸದಿರುವುದು ವಿಷಾದದ ಸಂಗತಿ ಎಂದು ದಸಂಸ ಜಿಲ್ಲಾ ಸಂಚಾಲಕ ಕೃಷ್ಣದಾಸ್ ಹೇಳಿದ್ದಾರೆ. ಸರ್ಕಾರ ಈಗಾಗಲೇ 100 ಎಕರೆ ಜಮೀನನ್ನು ಈ ಉದ್ದೇಶಕ್ಕಾಗಿ ಕಾಯ್ದಿರಿಸಿದೆ. ಮೂಲಭೂತ ಸೌಕರ್ಯಗಳನ್ನು ಹೊಂದಿರುವ ಹೇಮಗಂಗೋತ್ರಿ ಸ್ನಾತಕೋತ್ತರ ಕೇಂದ್ರವು ಬೆಂಗಳೂರು - ಮಂಗಳೂರು ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿದ್ದು, ಹಾಸನ ಮತ್ತು ಕೊಡಗು ಜಿಲ್ಲೆಗಳನ್ನು ಒಳಗೊಂಡಂತೆ ವಿಶ್ವವಿದ್ಯಾಲಯ ಸ್ಥಾಪಿಸುವುದರಿಂದ ಮಲೆನಾಡಿನ ಭಾಗದ ಜನರ ಉನ್ನತ ವ್ಯಾಸಂಗಕ್ಕೆ ಅನುಕೂಲವಾಗುತ್ತದೆ ಎಂದು ತಿಳಿಸಿದ್ದಾರೆ. ರಾಷ್ಟ್ರೀಯ ವಿಜ್ಞಾನ ಪರಿಷತ್ ಜಿಲ್ಲೆಗೊಂದರಂತೆ ವಿಶ್ವವಿದ್ಯಾಲಯ ತೆರೆಯಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿರುವುದು ಗಮನಾರ್ಹ ಅಂಶವಾಗಿದೆ. ಹಾಸನ ಜಿಲ್ಲೆ ಐತಿಹಾಸಿಕ, ಸಾಹಿತ್ಯ, ಸಾಂಸ್ಕೃತಿಕ ಮತ್ತು ವೈಜ್ಞಾನಿಕವಾಗಿ ಪ್ರಪಂಚದ ಭೂಪಟದಲ್ಲಿ ಗುರುತಿಸಿಕೊಂಡಿದ್ದು, ಬಡವರ ಊಟಿ ಎಂದೇ ಪ್ರಸಿದ್ಧಿ ಪಡೆದಿದೆ. ಜಿಲ್ಲೆಯಲ್ಲಿ ವೈದ್ಯಕೀಯ ಮಹಾ ವಿದ್ಯಾಲಯ ಸೇರಿದಂತೆ ಕೃಷಿ, ಪಶುಸಂಗೋಪನೆ, ಎಂಜಿನಿಯರಿಂಗ್ ಇನ್ನು ಮುಂತಾದ ವೃತ್ತಿಪರ ಕಾಲೇಜುಗಳನ್ನು ಪ್ರಾರಂಭಿಸಲಾಗಿದ್ದು, ಹೇಮ ಗಂಗೋತ್ರಿ ಸ್ನಾತಕೋತ್ತರ ಕೇಂದ್ರವನ್ನು ವಿಶ್ವವಿದ್ಯಾಲಯವನ್ನಾಗಿ ಮಾಡುವುದರಿಂದ ಜಿಲ್ಲೆಯಲ್ಲಿ ನಾನಾ ರೀತಿಯ ಸಂಶೋಧನೆಗಳನ್ನು ಕೈಗೊಳ್ಳಲು ತುಂಬಾ ಸಹಕಾರಿಯಾಗುತ್ತದೆ ಎಂದು ಹೇಳಿದ್ದಾರೆ. ಈ ಸಂಬಂಧ ದಸಂಸ ಜಿಲ್ಲೆಯ ಶೈಕ್ಷಣಿಕ ತಜ್ಞರು ಕನ್ನಡ ಪರ, ರೈತ ಪರ, ಕಾರ್ಮಿಕರ ಪರ ಸಂಘಟನೆಗಳೊಂದಿಗೆ ಸಭೆ ನಡೆಸಿ ಮುಖ್ಯಮಂತ್ರಿ ಬಳಿಗೆ ನಿಯೋಗವನ್ನು ಕರೆದೊಯ್ಯಲಾಗುವುದು ಎಂದಿದ್ದಾರೆ.