ನಾಳೆ ಛಲವಾದಿ ಸಂಘದಿಂದ ದಲಿತ ಕಲಾಮೇಳ
ಹಾಸನ: ಡಾ. ಅಂಬೇಡ್ಕರ್ 122ನೇ ಜನ್ಮ ದಿನಾಚರಣೆ, ಚುನಾಯಿತಿ ಜನಪ್ರತಿನಿಧಿಗಳಿಗೆ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಹಾಗೂ ದಲಿತ ಕಲಾ ಮೇಳವನ್ನು ಛಲವಾದಿ ಮಹಾ ಮಂಡಲವತಿಯಿಂದ ನ.17 ರಂದು ಏರ್ಪಡಿಸಿದೆ ಎಂದು ಜಿಲ್ಲಾಧ್ಯಕ್ಷ ಎಸ್.ಕೆ.ಸಿದ್ದಯ್ಯ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರಿನ ಉರಿಲಿಂಗಪೆದ್ದೀಶ್ವರ ಮಹಾ ಸಂಸ್ಥಾನದ ಜ್ಞಾನಪ್ರಕಾಶ ಸ್ವಾಮೀಜಿ, ಚಿತ್ರದುರ್ಗ ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿ ಸಾನಿಧ್ಯದಲ್ಲಿ ಕಾರ್ಯಕ್ರಮ ನಡೆಯಲಿದ್ದು, ನ.17 ರಂದು ಬೆಳಿಗ್ಗೆ 10 ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಗಣ್ಯರು ಮಾಲಾರ್ಪಣೆ ಮಾಡುವರು.
ನಂತರ ಅಂಬೇಡ್ಕರ್ ಪ್ರತಿಮೆ ಬಳಿಯಿಂದ ನಗರದ ಅಂಬೇಡ್ಕರ್ ಭವನದ ವರೆಗೂ ವಿವಿಧ ಕಲಾ ತಂಡಗಳ ಮೂಲಕ ಮೆರವಣಿಗೆ ಆಯೋಜನೆ ಮಾಡಲಾಗಿದೆ. ಬೆಳಿಗ್ಗೆ 11 ಗಂಟೆಗೆ ಕಂದಾಯ ಸಚಿವ ವಿ. ಶ್ರೀನಿವಾಸಪ್ರಸಾದ್ ವೇದಿಕೆ ಕಾರ್ಯಕ್ರಮ ಉದ್ಘಾಟಿಸುವರು. ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಅವರು ಅಂಬೇಡ್ಕರ್ ಭಾವಚಿತ್ರ ಅನಾವರಣ ಮಾಡುವರು.
ಶಾಸಕ ಎಚ್.ಕೆ. ಕುಮಾರಸ್ವಾಮಿ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಶಾಸಕ ಎಚ್.ಡಿ. ರೇವಣ್ಣ, ಎಚ್.ಎಸ್. ಪ್ರಕಾಶ್, ಎ. ಮಂಜು, ವೈ.ಎನ್. ರುದ್ರೇಶ್‌ಗೌಡ, ಕೆ.ಎಂ. ಶಿವಲಿಂಗೇಗೌಡ, ಸಿ.ಎನ್. ಬಾಲಕೃಷ್ಣ, ಭಾರತೀಯ ರೈಲ್ವೆ ಮಂಡಳಿ ಅಧ್ಯಕ್ಷ ನಾರಾಯಣಸ್ವಾಮಿ ಇತರರು ಪಾಲ್ಗೊಳ್ಳುವರು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಹಾ ಮಂಡಲದ ಗೌರವ ಅಧ್ಯಕ್ಷ ನಾಗಯ್ಯ, ಜಯಣ್ಣ ಹಾಗೂ ಇತರರು ಇದ್ದರು.