ಕ್ರೀಡಾಂಗಣಕ್ಕೆ 5 ಲಕ್ಷ: ಶಾಸಕ ಪ್ರಕಾಶ್
ಹಾಸನ: ಉದ್ಯೋಗ ಖಾತ್ರಿ ಯೋಜನೆಯಡಿ ಪ್ರತಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಎರಡು ಕ್ರೀಡಾಂಗಣ ನಿರ್ಮಿಸಲು 5 ಲಕ್ಷ ಬಿಡುಗಡೆ ಮಾಡಿಸಲಾಗಿದೆ ಎಂದು ಶಾಸಕ ಎಚ್.ಎಸ್. ಪ್ರಕಾಶ್ ಹೇಳಿದರು.
ಜಿಲ್ಲಾ ಪಂಚಾಯ್ತಿ, ಸಾರ್ವಜನಿಕ ಶಿಕ್ಷಣ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ನಡೆದ 14 ವಯೋವುತಿಯ ಬಾಲಕ-ಬಾಲಕಿಯರ ರಾಜ್ಯ ಮಟ್ಟದ ಅಥ್ಲೆಟಿಕ್ ಸ್ಪರ್ಧೆಯ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕ್ರೀಡಾಂಗಣ ನಿರ್ಮಿಸುವಾಗ ಕ್ರೀಡಾ ತರಬೇತಿದಾರರಿಂದ ತಾಂತ್ರಿಕ ಸಲಹೆ ಪಡೆದು ನಿರ್ಮಿಸಿದರೆ ಮಕ್ಕಳ ಕ್ರೀಡಾ ಚಟುವಟಿಕೆಗಳಿಗೆ ಸಹಕಾರಿಯಾಗಲಿದೆ ಎಂದರು.
ಜಿಲ್ಲಾ ಕ್ರೀಡಾಂಗಣದಲ್ಲಿ ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣಕ್ಕಾಗಿ ಈಗಾಗಲೇ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಮಕ್ಕಳಲ್ಲಿ ಕ್ರೀಡೆ ಬಗ್ಗೆ ಆಸಕ್ತಿ ಮೂಡಿಸಲು ಹಾಸನ ಓಟ ಕಾರ್ಯಕ್ರಮ ಆಯೋಜಿಸಲು ತಮ್ಮ ಸಹಕಾರವಿರುವುದಾಗಿ ತಿಳಿಸಿದ ಅವರು, ಮಕ್ಕಳನ್ನು ದೈಹಿಕ ಹಾಗೂ ಮಾನಸಿಕವಾಗಿ ಆರೋಗ್ಯವಂತರಾಗಿ ಬೆಳೆಸುವ ನಿಟ್ಟಿನಲ್ಲಿ ಕ್ರೀಡೆಗೆ ಪೋಷಕರು ಹೆಚ್ಚು ಪ್ರೋತ್ಸಾಹ ನೀಡಬೇಕು ಎಂದು ಹೇಳಿದರು.
ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಡಿ.ಜಿ. ಅಂಬಿಕಾ ರಾಮಣ್ಣ ಅವರು ಕ್ರೀಡಾ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಉತ್ತಮ ಆರೋಗ್ಯಕ್ಕಾಗಿ ಪ್ರತಿಯೊಬ್ಬರೂ ಕ್ರೀಡೆಗಳಲ್ಲಿ ಭಾಗವಹಿಸಬೇಕು. ಕ್ರೀಡೆಗಳಿಗೆ ಚೀನಾ, ರಷ್ಯಾ, ಇತರೆ ದೇಶಗಳಲ್ಲಿ ನೀಡುವ ರೀತಿಯಲ್ಲಿ ಪ್ರೋತ್ಸಾಹ ನೀಡಬೇಕು. ಕ್ರೀಡಾಪಟುಗಳು ಕ್ರೀಡಾ ಮನೋಭಾವದಿಂದ ಭಾಗವಹಿಸಿ ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸುವಂತೆ ತಿಳಿಸಿದರಲ್ಲದೆ, ಉತ್ತಮ ಸ್ಥಾನ ಪಡೆಯುವ ಮೂಲಕ ಜಿಲ್ಲೆ ಹಾಗೂ ರಾಜ್ಯಕ್ಕೆ ಕೀರ್ತಿ ತರುವಂತೆ ತಿಳಿಸಿದರು.
ಪ್ಯಾರಾಲಿಂಪಿಕ್ಸ್‌ನಲ್ಲಿ ರಜತ ಪದಕ ವಿಜೇತ ಎಚ್.ಎನ್. ಗಿರೀಶ್ ಕ್ರೀಡಾ ಜ್ಯೋತಿ ಸ್ವೀಕರಿಸಿ ಮಾತನಾಡಿ, ಹಾಸನ ಜಿಲ್ಲೆ ಸಾಂಸ್ಕೃತಿಕ, ಕಲೆ, ರಾಜಕೀಯ, ಕ್ರೀಡಾ ಕ್ಷೇತ್ರದಲ್ಲಿ ವಿಶ್ವ ಮಟ್ಟದಲ್ಲಿ ಗುರುತಿಸಿಕೊಂಡಿದೆ. ಹಾಸನದಲ್ಲಿ ರಾಷ್ಟ್ರ ಮಟ್ಟದ ಕ್ರೀಡಾಕೂಟ ಆಯೋಜಿಸುವ ಮೂಲಕ ಹಾಸನದ ಕೀರ್ತಿಯನ್ನು ಹೆಚ್ಚಿಸಬೇಕು. ಇದರಿಂದ ಕ್ರೀಡಾ ಬೆಳವಣಿಗೆಗೆ ಸಹಕಾರಿಯಾಗಲಿದೆ. ಕ್ರೀಡಾ ಪಟುಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿ ದೇಶದ ಹೆಸರನ್ನು ಎತ್ತಿಹಿಡಿಯಬೇಕು ಎಂದರಲ್ಲದೆ, ಕ್ರೀಡೆ ಉಳಿಸಲು ಮಹಾನ್ ವ್ಯಕ್ತಿಗಳಾಗಬೇಕು ಎಂದರು.
ಕ್ರೀಡಾಕೂಟದಲ್ಲಿ ಪರಾಜಿತರಾದರೆ ಹತಾಶರಾಗದೆ ಸೋಲನ್ನು ಸವಾಲಾಗಿ ಸ್ವೀಕರಿಸಿ ಮುಂದಿನ ದಿನಗಳಲ್ಲಿ ನಡೆಯುವ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಗೆಲುವು ಸಾಧಿಸಲು ಪ್ರಯತ್ನ ನಡೆಸುವಂತೆ ತಿಳಿಸಿದರು.
ತಾಪಂ ಅಧ್ಯಕ್ಷೆ ರತ್ನ ಹನುಮಂತೇಗೌಡ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಜಿ.ಆರ್. ಬಸವರಾಜ್, ಕ್ಷೇತ್ರ ಶಿಕ್ಷಣಾಧಿಕಾರಿ ರವಿಕುಮಾರ್, ಶಿಕ್ಷಣಾಧಿಕಾರಿ ಪುಟ್ಟರಾಜು ಮತ್ತಿತರರು ಉಪಸ್ಥಿತರಿದ್ದರು. ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಕೆ.ಜಿ. ಈಶ್ವರಪ್ಪ ಸ್ವಾಗತಿಸಿದರು.