3 ತಿಂಗಳಲ್ಲಿ 10 ಸಾವಿರ ಶೌಚಾಲಯ ನಿರ್ಮಾಣ
ಚನ್ನರಾಯಪಟ್ಟಣ: ಚನ್ನರಾಯಪಟ್ಟಣ ತಾಲೂಕಿನಲ್ಲಿ ಪ್ರತಿ ಮನೆಯಲ್ಲಿ ಶೌಚಾಲಯಗಳನ್ನು ನಿರ್ಮಿಸಿ ಸಂಪೂರ್ಣ ಸ್ವಚ್ಛತೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಮುಂದಿನ ಮಾರ್ಚ್ ಅಂತ್ಯದೊಳಗೆ 10 ಸಾವಿರ ಶೌಚಾಲಯ ನಿರ್ಮಿಸುವ ಉದ್ದೇಶ ಹೊಂದಲಾಗಿದೆ ಎಂದು ಶಾಸಕ ಸಿ.ಎನ್. ಬಾಲಕೃಷ್ಣ ತಿಳಿಸಿದರು.
ಪಟ್ಟಣದ ಮಡಿವಾಳ ಮಾಚಯ್ಯ ಜಯಂತೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶೌಚಾಲಯವಿಲ್ಲದ ಕಾರಣ ಜನತೆಗೆ ಕೆಲವು ಸಾಂಕ್ರಮಿಕ ರೋಗಗಳು ಹರಡುತ್ತಿದ್ದು, ಅದನ್ನು ತಡೆಗಟ್ಟಲು ಪ್ರತಿ ಮನೆಗಳಲ್ಲಿಯೂ ಶೌಚಾಲಯ ನಿರ್ಮಿಸಿಕೊಂಡು ಅವುಗಳ ಬಳಕೆ ಹಾಗೂ ನಿರ್ವಹಣೆಗೆ ಆದ್ಯತೆ ನೀಡಬೇಕೆಂದು ಕರೆ ನೀಡಿದರು.
ಹಣ ಮಂಜೂರು: ತಾಲೂಕಿನಲ್ಲಿ ಎರಡು ಸಾವಿರ ಶೌಚಾಲಯ ನಿರ್ಮಾಣಕ್ಕೆ ಹಣ ಮಂಜೂರಾಗಿದ್ದು, ಮುಂದಿನ ಮಾರ್ಚ್ ಅಂತ್ಯಕ್ಕೆ 10ಸಾವಿರ ಶೌಚಾಲಯ ನಿರ್ಮಾಣದ ಗುರಿ ಹೊಂದಲಾಗಿದ್ದು, ಅದನ್ನು ಮೀರಿ ಅರ್ಜಿಗಳು ಬಂದರೆ ಅವರಿಗೂ ಶೌಚಾಲಯ ನೀಡಲಾಗುವುದು ಎಂದು ತಿಳಿಸಿದರು. ಗ್ರಾಮೀಣ ಭಾಗದಲ್ಲಿ ಶೌಚಾಲಯ ನಿರ್ಮಾಣಕ್ಕೆ 9,600 ಹಾಗೂ ಪಟ್ಟಣದಲ್ಲಿ ರು.15ಸಾವಿರ ನೀಡುತ್ತಿದ್ದು, ಜನತೆ ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
6 ಲಕ್ಷದೇಣಿಗೆ: ಪಟ್ಟಣದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಮಡಿವಾಳ ಮಾಚಯ್ಯ ಸಮುದಾಯ ಭವನಕ್ಕೆ ತಮ್ಮ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ರು. 6ಲಕ್ಷ ನೀಡುವುದಾಗಿ ಭರವಸೆ ನೀಡಿದರು. ಪುರಸಭಾ ಮಾಜಿ ಅಧ್ಯಕ್ಷ ನಾಗರಾಜು, ಕೃಷ್ಣಪ್ಪ ಮತ್ತಿತರರು ಉಪಸ್ಥಿತರಿದ್ದರು.