ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಅಭಿವೃದ್ಧಿ ಕಾರ್ಯದಲ್ಲಿ ರಾಜಕೀಯ ಬೇಡ: ಶಾಸಕ ಶಿವಲಿಂಗೇಗೌಡ

Rashmi Kasaragodu
Updated On : 4 Oct 2013, 11:57 am

ಅರಸೀಕೆರೆ: ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಅನುಷ್ಠಾನದಲ್ಲಿ ರಾಜಕೀಯ ಮಾಡುತ್ತಿರುವ ಕಾರಣ ಪರಸ್ಪರರಲ್ಲಿ ದ್ವೇಷ, ಅಸೂಯೆಗಳ ಮನೋಭಾವನೆಗಳು ಬೆಳೆಯುತ್ತಿದ್ದು, ಅಭಿವೃದ್ಧಿ ಕಾರ್ಯಗಳ ಅನುಷ್ಠಾನ ವಿಳಂಬವಾಗುತ್ತಿವೆ ಎಂದು ಶಾಸಕ ಕೆ.ಎಂ. ಶಿವಲಿಂಗೇಗೌಡ ಅಸಮಾಧಾನ ವ್ಯಕ್ತಪಡಿಸಿದರು.
ಮಹಾತ್ಮ ಗಾಂಧಿ ಜನ್ಮ ದಿನಾಚರಣೆ ಅಂಗವಾಗಿ ಇತ್ತೀಚೆಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೆರೆಗಳ ಪುನಶ್ಚೇತನ ಮತ್ತು ಸಮಗ್ರ ಅಭಿವೃದ್ಧಿ ಕಾಮಗಾರಿಗೆ ತಾಲೂಕಿನ ಹಬ್ಬನಘಟ್ಟ ಗ್ರಾ.ಪಂ. ವ್ಯಾಪ್ತಿಯಲ್ಲಿನ ದೊಡ್ಡೇನಹಳ್ಳಿ ಗ್ರಾಮದ ಸಿದ್ದರಾಮೇಶ್ವರ ದೇವಸ್ಥಾನದ ಪಕ್ಕದಲ್ಲಿನ ಅಣ್ಣೇಕೆರೆಗೆ ಅವರು ಭೂಮಿ ಪೂಜೆಯನ್ನು ನೆರವೇರಿಸಿ ಮಾತನಾಡಿದರು.
ಕೇಂದ್ರ ಸರ್ಕಾರ ಗ್ರಾಮೀಣ ಪ್ರದೇಶದ ಅಭಿವೃದ್ಧಿ ಜೊತೆಗೆ ನಿರುದ್ಯೋಗಿಗಳಿಗೆ ಸ್ಥಳೀಯವಾಗಿ ಉದ್ಯೋಗ ಸೃಷ್ಟಿಸುವ ಈ ಉದ್ಯೋಗ ಖಾತರಿ ಯೋಜನೆ ಅತ್ಯಂತ ಮಹತ್ತರವಾಗಿದೆ. ಆದರೆ ಇದರಲ್ಲಿನ ಹಲವು ನಿಯಮಗಳು ನೀಡುವ ಕನಿಷ್ಠ ಕೂಲಿ ಪ್ರಸ್ತುತ ಅಗತ್ಯ ವಸ್ತುಗಳ ಬೆಲೆ ಏರಿಕೆಯಲ್ಲಿ ಬಡ ವರ್ಗದ ಕುಟುಂಬಗಳಿಗೆ ಇನ್ನೂ ಸಾಲದಾಗಿದೆ ಎಂದರು.
ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಅನುಷ್ಠಾನದಲ್ಲಿ ನಡೆಯುವ ಸಣ್ಣಪುಟ್ಟ ಲೋಪದೋಷಗಳನ್ನೆ ತಮ್ಮ ಬಂಡವಾಳ ಮಾಡಿಕೊಂಡು ಆಗುತ್ತಿರುವ ಕೆಲಸ ಕಾರ್ಯಗಳಿಗೆ ಕಲ್ಲು ಹಾಕುವ ಕಾರ್ಯವನ್ನು ತಮ್ಮ ರಾಜಕೀಯ ವಿರೋಧಿಯ ಕೆಲವು ಮುಖಂಡರು ಮಾಡುತ್ತಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಪ್ರಸ್ತುತ ಆರ್ಥಿಕ ವರ್ಷದಲ್ಲಿ ಕೇಂದ್ರ ಸರ್ಕಾರ ಉದ್ಯೋಗ ಖಾತರಿ ಯೋಜನೆಗಳ ಅಭಿವೃದ್ಧಿ ಕಾರ್ಯಗಳಿಗೆ ಸುಮಾರು 54 ಸಾವಿರ ಕೋಟಿ ಮೀಸಲಿಟ್ಟಿದೆ. ಅದರಲ್ಲಿ ರಾಜ್ಯ  ಸರ್ಕಾರ ಕನಿಷ್ಠ 50 ಕೋಟಿ ಖರ್ಚು ಮಾಡುವ ಉದ್ದೇಶದಲ್ಲಿ ರಾಜ್ಯದ ಪ್ರತಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಎರಡು ಕೆರೆಗಳ ಪುನಶ್ಚೇತನ ಮತ್ತು ಸಮಗ್ರ ಅಭಿವೃದ್ಧಿಗೆ ಕಾರ್ಯವನ್ನು ಕೈಗೊಳ್ಳಲು ಅವಕಾಶ ನೀಡಿದ್ದು, ತಾಲೂಕಿನ 45 ಗ್ರಾಮ ಪಂಚಾಯ್ತಿಗಳಿಂದ ಒಟ್ಟು 90 ಕೆರೆಗಳ ಅಭಿವೃದ್ಧಿ ಕಾರ್ಯಗಳನ್ನು ಆರಂಭಿಸಬಹುದಾಗಿದೆ ಎಂದು ಹೇಳಿದರು. ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷ ಬಿಳಿ ಚೌಡಯ್ಯ ಮಾತನಾಡಿ, ಶಾಸಕರು ತಮ್ಮ ಅವಿರತ ಹೋರಾಟ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಅನೇಕ ಯೋಜನೆಗಳನ್ನು ಮಂಜೂರು ಮಾಡಿಸಿದ್ದಾರೆ. ಅವುಗಳ ಅನುಷ್ಠಾನಕ್ಕೆ ಸ್ಥಳೀಯ ಜನಪ್ರತಿನಿಧಿಗಳು ಮತ್ತು ಅಧಿಕಾರಿ ವರ್ಗ ಪ್ರಾಮಾಣಿಕ ಪ್ರಯತ್ನ ಮಾಡಬೇಕಾಗಿದೆ ಎಂದರು.
ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಹುಚ್ಚೇಗೌಡ ಮಾತನಾಡಿ, ಜಲಾನಯನ ಇಲಾಖೆ ಅಧಿಕಾರಿಗಳು ಅಭಿವೃದ್ಧಿ ಕಾರ್ಯಗಳ ಅನುಷ್ಠಾನದಲ್ಲಿ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲ. ಈ ಬಗ್ಗೆ ಶಾಸಕರು ಹೆಚ್ಚಿನ ಗಮನ ಹರಿಸಬೇಕೆಂದು ಮನವಿ ಮಾಡಿದರು. ತಾಲೂಕು ಪಂಚಾಯ್ತಿ ಅಧ್ಯಕ್ಷ ಎಚ್.ಟಿ .ಶಿವಮೂರ್ತಿ ಮಾತನಾಡಿದರು. ಹಾಸನ ಜಿಪಂ ಕಾರ್ಯದರ್ಶಿ ಕೆ. ಕರಿಯಪ್ಪ, ಚನ್ನರಾಯಪಟ್ಟಣ್ಣದ ಜಿಪಂ ಎಂಜಿನಿಯರಿಂಗ್ ಉಪ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಕೆ.ಎಂ. ನಾಗರಾಜು, ತಾಪಂ ಕಾರ್ಯನಿರ್ವಹಣಾಧಿಕಾರಿ ಟಿ.ಎನ್. ಮೂರ್ತಿ ಮಾತನಾಡಿದರು.
ಹಬ್ಬನಘಟ್ಟ ಗ್ರಾಪಂ ಅಧ್ಯಕ್ಷೆ ಪ್ರೇಮ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಹಾರನಹಳ್ಳಿ ಗ್ರಾಪಂ ಅಧ್ಯಕ್ಷೆ ರೇಣುಕಾ ರಂಗನಾಥ್, ಕಣಕಟ್ಟೆ ಗ್ರಾಪಂ ಅಧ್ಯಕ್ಷ ನಾಗರಾಜು, ಡಿ.ಎಂ. ಕುರ್ಕೆ ಗ್ರಾಪಂ ಅಧ್ಯಕ್ಷ ಷಡಕ್ಷರಿ, ತಾಪಂ ಸದಸ್ಯ ಹನುಮೇಗೌಡ, ಗೀಜಿಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ಧರ್ಮಪ್ಪ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement