ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಆತ್ಮಹತ್ಯೆ ಹೆಚ್ಚಳ: ಡಾ. ಪೈ

Rashmi Kasaragodu
Updated On : 4 Oct 2013, 11:59 am

ಕನ್ನಡಪ್ರಭ ವಾರ್ತೆ, ಅರಸೀಕೆರೆ, ಅ.4
ಪ್ರಸ್ತುತ ದಿನಗಳಲ್ಲಿ ಮನುಷ್ಯನ ಆತ್ಮವಿಶ್ವಾಸ ಕ್ಷೀಣಿಸುತ್ತಿದ್ದು, ಇದರಿಂದಾಗಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿದೆ ಎಂದು ಕರ್ನಾಟಕ ಮಾನಸಿಕ ಆರೋಗ್ಯ ಕಾರ್ಯಪಡೆಯ ಮುಖ್ಯಸ್ಥ ಡಾ. ಅಶೋಕ್ ಆತಂಕ ವ್ಯಕ್ತಪಡಿಸಿದ್ದಾರೆ.
ಪಟ್ಟಣದ ಗುರುಸಿದ್ದರಾಮೇಶ್ವರ ಸಮುದಾಯ ಭವನದಲ್ಲಿ ರೋಟರಿ ಸಂಸ್ಥೆ ಹಾಗೂ ರೋಟರಿ ಇನ್ನರ್ ವ್ಹೀಲ್ ಕ್ಲಬ್ ಆಶ್ರಯದಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಮಾನಸಿಕ ಒತ್ತಡ ನಿವಾರಣೆಗಾಗಿ ಉಪನ್ಯಾಸ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿ, ಯಾವ ವ್ಯಕ್ತಿ ತನ್ನ ಮನಸ್ಥಿತಿಯ ಮೇಲೆ ನಿಯಂತ್ರಣ ಸಾಧಿಸುತ್ತಾನೋ ಆಗ ಮಾತ್ರ ಆರೋಗ್ಯ ಪೂರ್ಣ ಜೀವನ ನಡೆಸಲು ಸಾಧ್ಯ ಎಂದು ಕಿವಿಮಾತು ಹೇಳಿದರು.
ಇಂದಿನ ಆಧುನಿಕ ಯುಗದಲ್ಲಿ ಮನುಷ್ಯ ಸದಾ ಒತ್ತಡದಲ್ಲೇ ಜೀವನ ನಿರ್ವಹಣೆ ಮಾಡುತ್ತಿರುವುದರಿಂದ ಆರೋಗ್ಯದ ಬಗ್ಗೆ ಕಾಳಜಿ ವಹಿಸಲು ಸಾಧ್ಯವಾಗದಷ್ಟು ಬ್ಯುಸಿಯಾಗಿದ್ದಾನೆ. ಇದರಿಂದಾಗಿ ನಾನಾ ಕಾಯಿಲೆಗಳು ಮನುಷ್ಯನ ಮೇಲೆ ದಾಳಿ ಮಾಡಲು ಕಾರಣವಾಗಿದ್ದು ಇದರಿಂದ ತಪ್ಪಿಸಿಕೊಳ್ಳಬೇಕಾದರೆ ದಿನದ ಒಂದೆರಡು ಗಂಟೆಗಳಾದರೂ ಧ್ಯಾನ, ಯೋಗ, ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವ ಅಭ್ಯಾಸಗಳನ್ನು ಮೈಗೂಡಿಸಿಕೊಳ್ಳಬೇಕೆಂದು ಸಲಹೆ ನಿಡಿದರು.
ದೇಶದಲ್ಲೇ ಆತ್ಮಹತ್ಯೆ ಮಾಡಿಕೊಳ್ಳುವ ರಾಜ್ಯಗಳ ಪೈಕಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದು ಕಳವಳ ವ್ಯಕ್ತಪಡಿಸಿದ ಅವರು, ಇದಕ್ಕೆ ಪ್ರಮುಖ ಕಾರಣ ಮಾನಸಿಕ ಒತ್ತಡ. ಹಾಗಾಗಿ ರಾಜ್ಯ ಸರ್ಕಾರ ಪ್ರತಿ ಜಿಲ್ಲೆಯಲ್ಲೂ ಮಾನಸಿಕ ಆರೋಗ್ಯ ಕೇಂದ್ರಗಳನ್ನು ತೆರೆಯುವ ನಿಟ್ಟಿನಲ್ಲಿ ಮುಂದಾಗಿದೆ ಎಂದು ತಿಳಿಸಿದರು.
ರೋಟರಿ ಸಂಸ್ಥೆಯ ಅಧ್ಯಕ್ಷ ಪ್ರವೀಣ್ಕುಮಾರ್ ಮಾತನಾಡಿ, ಧ್ಯಾನ ಮತ್ತು ಯೋಗದಿಂದ ಮಾತ್ರ ಮನುಷ್ಯ ತನ್ನ ಬುದ್ಧಿಶಕ್ತಿ ಜೊತೆಗೆ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯ. ಯಾವ ಮನುಷ್ಯ ತನ್ನ ಆರೋಗ್ಯವನ್ನು ಕಡೆಗಣಿಸುತ್ತಾನೋ ಆತನ ದೇಹ ಅವನಿಗೆ ಅರಿವಿಲ್ಲದ ರೀತಿ ದುರ್ಬಲಗೊಳ್ಳುವುದರ ಜೊತೆಗೆ ಆತನ ಪ್ರಾಣಕ್ಕೂ ಸಂಚಕಾರ ತಂದೊಡ್ಡುತ್ತದೆ. ಇದರಿಂದ ಆತನಷ್ಟೇ ಆಲದೇ ಆತನ ನಂಬಿದ ಕುಟುಂಬದವರೂ ತೊಂದರೆಗೆ ಸಿಲುಕುವಂತಾಗುತ್ತದೆ. ಹಾಗಾಗಿ ಪ್ರತಿಯೊಬ್ಬರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಮನವಿ ಮಾಡಿದರು.
ಪುರಸಭೆ ಅಧ್ಯಕ್ಷ ಮೋಹನ್ಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ತಾಲೂಕು ರೆಡ್ಕ್ರಾಸ್ ಸಂಸ್ಥೆಯ ಅಧ್ಯಕ್ಷ ಎನ್.ಜಿ. ಮಧು ರೋಟರಿ ಸಂಸ್ಥೆಯ ಕಾರ್ಯದರ್ಶಿ ಬಿ.ಎಂ. ಮೋಹನ್, ಮಾಜಿ ಅಧ್ಯಕ್ಷರಾದ ಬಿ.ಕೆ. ಯೋಗೀಶಾಚಾರ್, ಭರತ್, ಇನ್ನರ್ ವೀಲ್ ಸಂಸ್ಥೆ ಅಧ್ಯಕ್ಷ ಅನ್ನಲಕ್ಷ್ಮಿ ಕಾರ್ಯದರ್ಶಿ ಸಂಧ್ಯಾ ವಿಶ್ವನಾಥ್ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement