ಇಂದು ಸಿಎಂ ಭೇಟಿ ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ
ಹಾಸನ: ಮುಖ್ಯಮಂತ್ರಿ ಸಿದ್ದರಾಮಯ್ಯ ಅ.8ರಂದು ಬೆಳಗ್ಗೆ 10.30ಕ್ಕೆ ನಗರದಲ್ಲಿ ಜನತಾ ದರ್ಶನ ನಡೆಸಿ ಸಾರ್ವಜನಿಕರಿಂದ ಕುಂದು ಕೊರತೆ ಅಹವಾಲು ಸ್ವೀಕರಿಸುವ ಹಿನ್ನೆಲೆಯಲ್ಲಿ ಭಾನುವಾರ ಜಿಲ್ಲಾಧಿಕಾರಿ ವಿ.ಅನ್ಬುಕುಮಾರ್ ಪೂರ್ವ ಸಿದ್ಧತೆಗಳನ್ನು ಪರಿಶೀಲಿಸಿ, ಅಧಿಕಾರಿಗಳಿಗೆ ಕೆಲವೊಂದು ಸೂಚನೆ ನೀಡಿದರು.
ಹಾಸನಾಂಬ ಕಲಾಕ್ಷೇತ್ರಕ್ಕೆ ಭಾನುವಾರ ಭೇಟಿ ನೀಡಿದ ಜಿಲ್ಲಾಧಿಕಾರಿ ಜನತಾ ದರ್ಶನಕ್ಕೆ ಸಂಬಂಧಿಸಿದಂತೆ ಸಿದ್ಧತೆಗಳನ್ನು ಪರಿಶೀಲಿಸಿದರು. ನಂತರ ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣಕ್ಕೂ ಭೇಟಿ ನೀಡಿದರು.
ಜನತಾ ದರ್ಶನ ಕಾರ್ಯಕ್ರಮ ಅಚ್ಚುಕಟ್ಟು ನಿರ್ವಹಣೆಗೆ ಅಗತ್ಯ ಸಿಬ್ಬಂದಿಯನ್ನು ನಿಯೋಜಿಸಲು ಕಂದಾಯ, ನಗರಸಭೆ ಹಾಗೂ ಜಿಲ್ಲಾ ಪಂಚಾಯಿತಿ ಅಧಿಕಾರಿಗಳಿಗೆ ತಿಳಿಸಿದ ಜಿಲ್ಲಾಧಿಕಾರಿ ಶಿಷ್ಟಾಚಾರದಲ್ಲಿ ಯಾವುದೇ ರೀತಿ ಲೋಪವಾಗದಂತೆ ಕ್ರಮವಹಿಸುವಂತೆ ನಿರ್ದೇಶನ ನೀಡಿದರು. ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಸ್ವಚ್ಚತೆ ಕುರಿತು ನಿಗಾವಹಿಸಲು ನಗರ ಸಭೆಯ ಆಯುಕ್ತರಿಗೆ ತಿಳಿಸಿದರು. ಒಟ್ಟಾರೆ ಕಾರ್ಯಕ್ರಮ ಅಚ್ಚುಕಟ್ಟಾಗಿ ನಡೆಯಲು ಸೂಕ್ತ ಸಲಹೆ ನೀಡಿದರು.
ಜಿಪಂ ಹೊಯ್ಸಳ ಸಭಾಂಗಣಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಆಸನಗಳ ವ್ಯವಸ್ಥೆ ಜಿಲ್ಲೆಯಲ್ಲಿನ ಅತಿವೃಷ್ಟಿ ಅನಾವೃಷ್ಟಿ ಬೆಳೆಹಾನಿ ಕುಂದುಕೊರತೆಗಳು, ಅನುಷ್ಠಾನಗೊಳ್ಳುತ್ತಿರುವ ವಿವಿಧ ಅಭಿವೃದ್ಧಿ ಯೋಜನೆಗಳ ಬಗ್ಗೆ ಮುಖ್ಯಮಂತ್ರಿಯವರ ಗಮನಕ್ಕೆ ತರಲು ನಡೆದಿರುವ ಸಿದ್ಧತೆಗಳ ಬಗ್ಗೆಯೂ ಪರಿಶೀಲಿಸಿದರು.
ಅಪರ ಜಿಲ್ಲಾಧಿಕಾರಿ ಡಾ. ಗೋಪಾಲಕೃಷ್ಣ ಜಿಲ್ಲಾಧಿಕಾರಿ ಕಚೇರಿ ಸಹಾಯಕ ರಂಜಿತ, ಜಿಪಂ ಉಪ ಕಾರ್ಯದರ್ಶಿ ಕರಿಯಪ್ಪ, ಮುಖ್ಯ ಯೋಜನಾಧಿಕಾರಿ ಪರಪ್ಪಸ್ವಾಮಿ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಶಕೀಲ್, ನಗರಸಭೆ ಆಯುಕ್ತ ನಾಗಭೂಷಣ್ ಇತರೇ ಅಧಿಕಾರಿಗಳು ಇದ್ದರು.
ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ
ಹಾಸನ: ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಮಹದೇವಪ್ಪ ಅ. 8ರಂದು ಬೆಳಗ್ಗೆ 11ಕ್ಕೆ ಹಾಸನಕ್ಕೆ ಆಗಮಿಸುವರು. ಮುಖ್ಯಮಂತ್ರಿಗಳೊಂದಿಗೆ ಜಿಲ್ಲೆಯ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ಹಾಗೂ ನಾನಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ನಂತರ ಸಂಜೆ 6.30ಕ್ಕೆ ಹಾಸನದಿಂದ ಬೆಂಗಳೂರಿಗೆ ತೆರಳುವರು.