ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
ಹೊಳೆನರಸೀಪುರ: ತಾಲೂಕಿನಲ್ಲಿ ಪ್ರಥಮ ಮತ್ತು ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿ, ವಿದ್ಯಾರ್ಥಿನಿಯರು ವಿದ್ಯಾರ್ಥಿ ವೇತನಕ್ಕೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕಾಗಿರುವುದರಿಂದ ಅ.10ರೊಳಗೆ ಸಂಬಂಧಿಸಿದ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರನ್ನು ಸಂಪರ್ಕಿಸುವಂತೆ ಪಟ್ಟಣದ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಎ.ನಾಗರಾಜು ತಿಳಿಸಿದ್ದಾರೆ.
ಪುರಸಭೆ ಸಾಮಾನ್ಯ ಸಭೆ ಇಂದು
ಹೊಳೆನರಸೀಪುರ: ಪಟ್ಟಣ ಪುರಸಭೆಯ ಸಾಮಾನ್ಯ ಸಭೆಯನ್ನು ಪುರಸಭೆ ಸಭಾಂಗಣದಲ್ಲಿ ಅಧ್ಯಕ್ಷೆ ಎಚ್.ಆರ್.ಕಲಾವತಿ ಅಧ್ಯಕ್ಷತೆಯಲ್ಲಿ ಅ. 8 ರಂದು ಬೆಳಿಗ್ಗೆ 11ಗಂಟೆಗೆ ಏರ್ಪಡಿಸಲಾಗಿದೆ ಎಂದು ಮುಖ್ಯಾಧಿಕಾರಿ ಹರೀಶ್ ತಿಳಿಸಿದ್ದಾರೆ.
ಉದ್ಯೋಗಾಕಾಂಕ್ಷಿಗಳ ನೋಂದಣಿ
ಹಾಸನ: ಜಿಲ್ಲೆಯಲ್ಲಿ 235 ಉದ್ಯೋಗಾ ಕಾಂಕ್ಷಿಗಳು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಹೆಸರು ನೊಂದಾಯಿಸಿದ್ದಾರೆ ಎಂದು ಉದ್ಯೋಗ ಅಧಿಕಾರಿ ವಿಜಯಲಕ್ಷ್ಮಿ ತಿಳಿಸಿದ್ದಾರೆ. ಪರಿಶಿಷ್ಟ ಜಾತಿ 933, ಪರಿಶಿಷ್ಟ ಪಂಗಡದ 142, 463 ಅಂಗವಿಕಲರು ಸೇರಿದಂತೆ ಒಟ್ಟು 12,721 ಅಭ್ಯರ್ಥಿಗಳು ದಾಖಲೆಯಲ್ಲಿದ್ದಾರೆ ಎಂದು ತಿಳಿಸಿದ್ದಾರೆ.