ಹಾಸನದಲ್ಲಿ ಕಾಂಗ್ರೆಸ್ ಗೆಲುವು ಖಚಿತ: ಖಾದರ್ ವಿಶ್ವಾಸ
ಹಾಸನ: ಜೆಡಿಎಸ್ ದ್ವಂದ್ವ ನೀತಿಯಿಂದ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಿಲ್ಲೆಯಲ್ಲಿ ಗೆಲುವು ಸಾಧಿಸುವುದು ಬಹುತೇಕ ಖಚಿತ ಎಂದು ವೈದ್ಯಕೀಯ ಶಿಕ್ಷಣ ಸಚಿವ ಯು.ಟಿ. ಖಾದರ್ ಹೇಳಿದ್ದಾರೆ.
ಜೆಡಿಎಸ್ ನಾಯಕರು ದ್ವಂದ್ವ ನೀತಿ ಅನುಸರಿಸುತ್ತಿರುವ ಹಿನ್ನೆಲೆಯಲ್ಲಿ ಪಕ್ಷ ಸಂಪೂರ್ಣ ತನ್ನ ಅಸ್ತಿತ್ವ ಕಳೆದುಕೊಳ್ಳುವ ಹಂತಕ್ಕೆ ತಲುಪುತ್ತಿದೆ. ಮಂಡ್ಯ ಮತ್ತು ಬೆಂಗಳೂರು ಗ್ರಾಮಾಂತರ ಲೋಕಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಜಯ ಸಾಧಿಸುವ ಮೂಲಕ ಜೆಡಿಎಸ್ ಭದ್ರ ಕೋಟೆಯನ್ನು ಒಡೆದು ಹಾಕಿದೆ. ಅದೇ ರೀತಿ ಹಾಸನ ಜಿಲ್ಲೆಯಲ್ಲಿ ಪ್ರಾಬಲ್ಯ ಹೊಂದಿರುವ ಜೆಡಿಎಸ್ ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕಾಗಿದೆ ಎಂದು ನಗರದ ಕಾಂಗ್ರೆಸ್ ಕಚೇರಿ ಆವರಣದಲ್ಲಿ ಮಂಗಳವಾರ ನಡೆದ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಅವರು ಮಾತನಾಡಿದರು.
ಕಾಂಗ್ರೆಸ್ ಮುಖಂಡರು ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಒಗ್ಗಟ್ಟಿನಿಂದ ದುಡಿದರೆ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸುದು ಸಲುಭ ಎಂದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಉತ್ತಮ ಆಡಳಿತ ನೀಡುತ್ತಾ ಬಂದಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಮೂಲಭೂತ ಸೌಲಭ್ಯ ನೀಡುವ ದೃಷ್ಟಿಕೋನ ಹೊಂದಲಾಗಿದೆ. ರಾಜ್ಯ ಸರ್ಕಾರದ ಕಾರ್ಯ ವೈಖರಿಗೆ ರಾಜ್ಯದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ರಾಜ್ಯದ ಯುವಕರು ಕಾಂಗ್ರೆಸ್‌ನ್ನು ಹೆಚ್ಚು ಬೆಂಬಲಿಸುತ್ತಿರುವುದು ಸಂತಸ ಉಂಟು ಮಾಡಿದೆ ಎಂದು ನುಡಿದರು.
ಆರೋಗ್ಯ ಶ್ರೀ ಯೋಜನೆಯಡಿ ಬಿಪಿಎಲ್ ಕಾರ್ಡ್‌ದಾರರಿಗೆ ನೀಡಲಾಗುತ್ತಿರುವ ವೈದ್ಯಕೀಯ ಸೇವೆಯನ್ನು ಎಪಿಎಲ್‌ಕಾರ್ಡ್‌ದಾರರಿಗೂ ವಿಸ್ತರಿಸುವ ಗುರಿ ಹೊಂದಲಾಗಿದ್ದು, ಸಚಿವ ಸಂಪುಟದಲ್ಲಿ ಇದಕ್ಕೆ ಒಪ್ಪಿಗೆ ಪಡೆದು ಮಧ್ಯಮ ವರ್ಗದವರಿಗೂ ವೈದ್ಯಕೀಯ ಸೇವೆ ಕಲ್ಪಿಸಲಾಗುವುದು.
ಬಡವರಿಗೆ ವೈದ್ಯಕೀಯ ಸೇವೆ ಸರಳೀಕರಿಸುವ ಸಲುವಾಗಿ ಎಲ್ಲಾ ತಾಲ್ಲೂಕು ಕೇಂದ್ರದಲ್ಲಿ ಕಡಿಮೆ ಬೆಲೆಗೆ ಔಷದಿಗಳನ್ನು ನೀಡುವ ನಿಟ್ಟಿನಲ್ಲಿ ಜನರಿಕ್ ಔಷಧಿ ಮಳಿಗೆಗಳನ್ನು ತೆರೆಯಲಾಗುವುದು. ಅಲ್ಲದೇ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಡಯಾಲಿಸಿಸ್ ಕೇಂದ್ರಗಳನ್ನು ತೆರೆಯಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ಮಾಜಿ ಸಚಿವ ಪೊ. ಬಿ.ಕೆ.ಚಂದ್ರಶೇಖರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ.ಶಿವರಾಂ, ಮುಖಂಡ ಎಸ್.ಎಂ.ಆನಂದ್, ಎಚ್.ಕೆ.ಮಹೇಶ್, ಗೋಪಾಲಸ್ವಾಮಿ, ಎಚ್.ಕೆ. ಜವರೇಗೌಡ ಇತರರು ಇದ್ದರು.