ಶಿಕ್ಷಣದಿಂದ ಎಲ್ಲ ರಂಗದಲ್ಲೂ ಅಭಿವೃದ್ಧಿ ಸಾಧ್ಯ : ಡಿಡಿಪಿಐ ಬಸವರಾಜ್
ಹಾಸನ: ಯಾವುದೇ ದೇಶ ಎಲ್ಲ ರೀತಿಯಲ್ಲಿ ಅಭಿವೃದ್ಧಿ ಹೊಂದಬೇಕಾದರೆ ಶಿಕ್ಷಣ ಬಹುಮುಖ್ಯ ಪಾತ್ರ ವಹಿಸುತ್ತದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಜಿ. ಬಸವರಾಜ್ ಹೇಳಿದರು.
ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ತಾಲೂಕು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಆಶ್ರಯದಲ್ಲಿ ನಡೆದ ಪ್ರತಿಭಾ ಪುರಸ್ಕಾರ ಹಾಗೂ ಗುರುವಂದನಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಶಿಕ್ಷಣ ಪಡೆದು ಎಷ್ಟೇ ಉನ್ನತ ಸ್ಥಾನದಲ್ಲಿದ್ದರೂ ಗುರುಗಳನ್ನು ನೆನಪಿಸಿಕೊಳ್ಳುವ ಪ್ರವೃತ್ತಿ ಸಮಾಜದಲ್ಲಿ ಇದೆ ಎಂದ ಅವರು, ಇಂದಿನ ತಾಂತ್ರಿಕ ಯುಗದಲ್ಲಿ ನಾವು ಇರುವ ರೀತಿಯ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಎಲ್ಲರಿಗೂ ಶಿಕ್ಷಣ ಲಭಿಸುವ ನಿಟ್ಟಿನಲ್ಲಿ ಸರ್ಕಾರ ಗ್ರಾಮಗಳಲ್ಲಿ ಶಾಲೆ ತೆರೆದಿದೆ. ಸ್ಪರ್ಧಾತ್ಮಕ ಜಗತ್ತಿನ ವಾತವರಣ ನೋಡಿದರೆ ರೋಚಕವಾಗುತ್ತದೆ. ಕೃಷಿ ಪ್ರಧಾನ ಭಾರತದಲ್ಲಿ ಕೃಷಿ ಚಟುವಟಿಕೆ ಕಡಿಮೆ ಆಗುತ್ತಿರುವುದು ದುರಂತ ಎಂದು ವಿಷಾದಿಸಿದರು. ಇದೇ ವೇಳೆ ಪ್ರತಿಭಾ ಪುರಸ್ಕಾರ ಹಾಗೂ ಉತ್ತಮ ಶಿಕ್ಷಕರಿಗೆ ಸನ್ಮಾನ ಮತ್ತು ಕ್ರೀಡಾಕೂಟ ಪ್ರಶಸ್ತಿ ನೀಡಿ ಗೌರವಿಸಿದರು.
ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಅಣ್ಣಪ್ಪ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮಂಜೇಗೌಡ, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಿವೇಗೌಡ, ಕಾರ್ಯದರ್ಶಿ ಕೆ.ಎಂ. ಶ್ರೀನಿವಾಸ್, ವರದರಾಜು ಇದ್ದರು.