ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸಿ: ಶಾಸಕ ರೇವಣ್ಣ
ಹೊಳೆನರಸೀಪುರ: ಗ್ರಾಮೀಣ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಮುತುವರ್ಜಿ ವಹಿಸುವ ಜೊತೆಗೆ, ಇಂತಹ ವಿದ್ಯಾರ್ಥಿಗಳ ಸೌಲಭ್ಯಕ್ಕಾಗಿ ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆಯನ್ನು ಹೆಚ್ಚಿಸುವಂತೆ ಶಾಸಕ ಎಚ್.ಡಿ.ರೇವಣ್ಣ ಸರ್ಕಾರವನ್ನು ಒತ್ತಾಯಿಸಿದರು.
ಇಲ್ಲಿನ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನೂತನವಾಗಿ ಆರಂಭಿಸಲಾಗಿರುವ ಎಂ.ಎ ಮತ್ತು ಎಂ.ಕಾಂ ತರಗತಿಗಳಿಗೆ ಗುರುವಾರ ಚಾಲನೆ ನೀಡಿ ಮಾತನಾಡಿದ ಅವರು, ಸರ್ಕಾರ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಉಪಯುಕ್ತವಾಗುವ ಕೋರ್ಸ್‌ಗಳನ್ನು ಆರಂಭಿಸುವ ಜೊತೆಗೆ ಅವುಗಳಿಗೆ ಬೇಕಾದ ಮೂಲಭೂತ ಅವಶ್ಯಕತೆಗಳನ್ನು ನೀಡುವ ಮೂಲಕ ಗ್ರಾಮೀಣ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಸಹಕಾರ ನೀಡುವಂತೆ ಆಗ್ರಹಿಸಿದರು.
ಪಟ್ಟಣದ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿಯೇ ಸ್ನಾತಕೋತ್ತರ ವಿಭಾಗಕ್ಕಾಗಿ 1.95 ಕೋಟಿ ರು. ವೆಚ್ಚದಲ್ಲಿ ಹೆಚ್ಚುವರಿ ಕೊಠಡಿಗಳ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ತಾತ್ಕಾಲಿಕವಾಗಿ ಪುರಸಭೆಯ ವತಿಯಿಂದ ನಿರ್ಮಿಸಲಾಗಿರುವ ಕೊಠಡಿಗಳಲ್ಲಿ ಸ್ನಾತಕೋತ್ತರ ಕೋರ್ಸ್‌ಗಳನ್ನು ಆರಂಭಿಸಲಾಗಿದ್ದು, ಹೆಚ್ಚುವರಿ ಕೊಠಡಿಗಳ ನಿರ್ಮಾಣದ ನಂತರ ತರಗತಿಗಳನ್ನು ಸ್ಥಳಾಂತರಿಸಲಾಗುವುದು ಎಂದರು.
ಪ್ರಸಕ್ತ ಎಂ.ಎ ಹಾಗೂ ಎಂ.ಕಾಂ ಕೋರ್ಸ್‌ಗಳಿಗೆ 60 ವಿದ್ಯಾರ್ಥಿನಿಯರಿಗೆ ಅವಕಾಶ ಕಲ್ಪಿಸಲಾಗಿದ್ದು, ಈಗಾಗಲೇ 50 ವಿದ್ಯಾರ್ಥಿನಿಯರು ಪ್ರವೇಶ ಪಡೆದಿದ್ದು, ಇನ್ನುಳಿದಿರುವ ಸೀಟುಗಳನ್ನು ಅರ್ಹ ವಿದ್ಯಾರ್ಥಿನಿಯರಿಗೆ ನೀಡಲಾಗುವುದು ಎಂದು ನುಡಿದರು.
ಇಲ್ಲಿನ ಮಹಿಳಾ ಕಾಲೇಜಿನ ವಿಜ್ಞಾನ ವಿಭಾಗವು ಈ ಬಾರಿ ಶೇ.100ರಷ್ಟು ಫಲಿತಾಂಶ ಪಡೆದಿದ್ದು, ಮುಂದಿನ ದಿನಗಳಲ್ಲಿ ವಿದ್ಯಾರ್ಥಿನಿಯರು ಇಲ್ಲಿನ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಎಲ್ಲಾ ಕೋರ್ಸ್‌ಗಳಲ್ಲೂ ಹೆಚ್ಚಿನ ಸಾಧನೆ ತೋರುವಂತೆ ಕಿವಿಮಾತು ಹೇಳಿದರು.
ಪ್ರಾಂಶುಪಾಲ ಪ್ರೊ.ಬಸವಣ್ಣ, ಪ್ರೊ. ರಾಜಶೇಖರ್, ಪ್ರೊ. ರಮೇಶ್, ಪ್ರೊ.ಚಂದ್ರಕುಮಾರ್, ಜೆಡಿಎಸ್ ನಾಯಕ ಟಿ.ಶಿವಕುಮಾರ್ ಇದ್ದರು.