ಗ್ರಾಮಗಳಿಗೆ ಟ್ಯಾಂಕರ್ ನೀರೇ ಗತಿ
ಅರಸೀಕೆರೆ: ತಾಲೂಕಿನಲ್ಲಿ ತೀವ್ರ ಬರ ಪರಿಸ್ಥಿತಿಯಿಂದ ಅಂತರ್ಜಲಮಟ್ಟ ಕುಸಿದು ಕೊಳವೆ ಬಾವಿಗಳಲ್ಲಿ ನೀರಿಲ್ಲದೆ ಕುಡಿಯುವ ನೀರಿನ ಸಮಸ್ಯೆ ಉಲ್ಬಣವಾಗಿದ್ದು ಇದನ್ನು ಪರಿಹರಿಸಲು ಸಮಾರೋಪಾದಿಯಲ್ಲಿ ಕಾರ್ಯಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಾಲೂಕು ಪಂಚಾಯ್ತಿ ಕಾರ್ಯ ನಿರ್ವಹಣಾಧಿಕಾರಿ ಟಿ.ಎನ್. ಮೂರ್ತಿ ತಿಳಿಸಿದರು.
ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಲೂಕು ಆಡಳಿತದ ವತಿಯಿಂದ ಕುಡಿಯುವ ನೀರಿನ ಗ್ರಾಮೀಣ ಪ್ರದೇಶಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ. ಚುನಾವಣೆ ನೀತಿ ಸಂಹಿತೆ ಘೋಷಣೆಯಾಗಿರುವುದರಿಂದ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಅವಕಾಶವಿಲ್ಲ. ಆದ್ದರಿಂದ ಜಿಲ್ಲಾಡಳಿತದ ಸೂಚನೆಯಂತೆ ಬಾಣಾವರ, ಕಣಕಟ್ಟೆ, ಕಸಬಾ, ಗಂಡಸಿ ಹಾಗೂ ಜಾವಗಲ್ ಹೋಬಳಿಯ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಯಿರುವ ಗ್ರಾಮಗಳಿಗೆ ನೀರು ಪೂರೈಸಲಾಗುತ್ತಿದೆ. ಪ್ರತಿನಿತ್ಯ ಬೆಳಗ್ಗೆ ಹಾಗೂ ಮಧ್ಯಾಹ್ನದ ವೇಳೆ ನೀರು ಪೂರೈಕೆಗೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದರು.
ನೀರು ಸರಬರಾಜು ಮಾಡುವ ವೇಳೆ ಗ್ರಾಮಸ್ಥರು ಶಾಂತಿ, ಸೌಹಾರ್ದತೆಯಿಂದ ವರ್ತಿಸಬೇಕೆಂದು ಇದೇ ವೇಳೆ ಮನವಿ ಮಾಡಿದರು.