ಗೌಡರ ನೋಡಲು ಮುಗಿಬಿದ್ದ ಜನ
ಅರಸೀಕೆರೆ: ಲೋಕಸಭಾ ಚುನಾವಣೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಎಳೆಯುವ ಮುನ್ನ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಸಾವಿರಾರು ಕಾರ್ಯಕರ್ತರೊಡನೆ ಬೃಹತ್ ರೋಡ್ ಶೋ ನಡೆಸುವ ಮೂಲಕ ಮತದಾರರ ಮನ ಸೆಳೆಯುವ ಪ್ರಯತ್ನ ನಡೆಸಿದರು.
ಪಟ್ಟಣದ ಹಾಸನ ರಸ್ತೆಯ ಅಯ್ಯಪ್ಪಸ್ವಾಮಿ ದೇವಸ್ಥಾನದಿಂದ ಪ್ರಾರಂಭವಾದ ರೋಡ್ ಶೋ ಹಾಸನ ರಸ್ತೆಯ ಮೂಲಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗಿದ್ದರಿಂದ ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿತ್ತು. ಪಾಲ್ಗೊಂಡಿದ್ದ 5 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಜೆಡಿಎಸ್ ಹಾಗೂ ಮಾಜಿ ಪ್ರಧಾನಿ ದೇವೇಗೌಡ ಹಾಗೂ ಶಾಸಕ ಕೆ.ಎಂ. ಶಿವಲಿಂಗೇಗೌಡರ ಪರ ಜಯಘೋಷಗಳನ್ನು ಕೂಗುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.
ಗೌಡರ ಗುಟುರು: ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ದೇವೇಗೌಡರು, ಯುಪಿಎ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರದಿಂದಾಗಿ ಮತದಾರರು ರೋಸಿ ಹೋಗಿದ್ದು, ಈ ಬಾರಿ ಕಾಂಗ್ರೆಸ್ ಎರಡಂಕಿ ದಾಟಲು ಸಾಧ್ಯವಿಲ್ಲ. ನರೇಂದ್ರ ಮೋದಿ ಪ್ರಧಾನಿಯಾಗುವುದು ಕನಸಿನ ಮಾತು. ದೇವೇಗೌಡರು ತಮ್ಮ ಶಕ್ತಿ ಏನೆಂಬುದನ್ನು ಮುಂದಿನ ದಿನಗಳಲ್ಲಿ ಸಾಬೀತುಪಡಿಸಿ ತೋರಿಸಲಿದ್ದಾರೆ ಎಂದು ಎದುರಾಳಿಗಳಿಗೆ ಗುಟುರು ಹಾಕಿದರು.
ಕರೆ: ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದವರು ಹಾಗೂ ತಮ್ಮ ಪಕ್ಷದಿಂದ ಕಾಂಗ್ರೆಸ್‌ಗೆ ಪಕ್ಷಾಂತರ ಆದವರು ತಮ್ಮ ವಿರುದ್ಧ ಅನಗತ್ಯ ಟೀಕೆ ಮಾಡುತ್ತಿದ್ದಾರೆ ಎಂಬು ಸಿಡಿಮಿಡಿಗೊಂಡ ಅವರು, ಎಲ್ಲರೂ ದೇವೇಗೌಡರ ಮತ ಚಲಾಯಿಸುವಂತೆ ನೋಡಿಕೊಳ್ಳುವ ಮೂಲಕ ಟೀಕಿಸುವವರಿಗೆ ತಕ್ಕ ಉತ್ತರ ನೀಡಬೇಕೆಂದು ಕರೆ ನೀಡಿದರು.
ಶಾಸಕ ಕೆ.ಎಂ. ಶಿವಲಿಂಗೇಗೌಡ, ಮಾಜಿ ಶಾಸಕ ಜಿ.ಎಸ್.ಪರಮೇಶ್ವರಪ್ಪ, ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಸಿದ್ದರಾಮಶೆಟ್ಟಿ ರೋಡ್‌ಶೋನಲ್ಲಿ ಗೌಡರ ಜೊತೆಯಲ್ಲಿದ್ದರು.