ವಿಜ್ಞಾನದ ಕಡೆಗೆ ಸೆಳೆಯಲು ವಿಜ್ಞಾನ ವಸ್ತು ಪ್ರದರ್ಶನ
ಪಾಂಡವಪುರ: ಮಕ್ಕಳನ್ನು ಚಿಕ್ಕವಯಸ್ಸಿನಲ್ಲೇ ಮೂಲ ವಿಜ್ಞಾನದ ಕಡೆಗೆ ಸೆಳೆಯುವ ಉದ್ದೇಶದಿಂದ ಕೋಟಿ ರು. ವೆಚ್ಚದಲ್ಲಿ ವಿಜ್ಞಾನ ವಸ್ತು ಪ್ರದರ್ಶನಗಳನ್ನು ಆಯೋಜಿಸಲಾಗುತ್ತಿದೆ ಎಂದು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಸಿ.ಕೃಷ್ಣೇಗೌಡ ಹೇಳಿದರು.
ಪಟ್ಟಣದ ಬಿ.ಆರ್.ಸಿ. ಕೇಂದ್ರದಲ್ಲಿ ಇನ್ಸ್ಪೈರ್ ಅವಾರ್ಡ್ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಶಾಲಾ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.
ಗ್ರಾಮೀಣ ಪ್ರದೇಶದ ಮಕ್ಕಳು ವಿಜ್ಞಾನ ಮತ್ತು ತಂತ್ರ ಜ್ಞಾನದ ಬಗ್ಗೆ ಹೆಚ್ಚು ಗಮನ ಹರಿಸಲು ಸಾಧ್ಯವಾಗುವುದಿಲ್ಲ. ಕೇಂದ್ರ ಸರ್ಕಾರ 10 ಕೋಟಿ ರು. ವೆಚ್ಚಮಾಡಿ ಇನ್ಸ್ಪೈರ್ ಅವಾರ್ಡ್ ಕಾರ್ಯಕ್ರಮ ನಡೆಸಲಾಗುತ್ತಿದೆ. ಇದರಿಂದ ಮಕ್ಕಳ ಬೌದ್ಧಿಕ ಮಟ್ಟ ವೃದ್ಧಿಸಲಿದೆ ಎಂದು ತಿಳಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಬಿ. ಚಂದ್ರಶೇಖರ್ ಮಾತನಾಡಿ, ಮಕ್ಕಳು ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಪಾಲ್ಗೊಳ್ಳುವ ವೇಳೆ ತಮ್ಮ ವಿಜ್ಞಾನ ಮಾದರಿ ವಿಷಯವನ್ನು ಸ್ಪಷ್ಟ ಹಾಗೂ ನಿಖರವಾಗಿ ಮಂಡಿಸಬೇಕು ಎಂದರು.