ಜನಸಂಖ್ಯೆ ನಿಯಂತ್ರಣ: ಗ್ರಾಮೀಣರಲ್ಲಿ ಅರಿವು ಮೂಡಿಸಿ
ಸಕಲೇಶಪುರ: ಜನಸಂಖ್ಯೆ ನಿಯಂತ್ರಣದ ಬಗ್ಗೆ ಗ್ರಾಮೀಣ ಪ್ರದೇಶಗಳಲ್ಲಿ ಅರಿವು ಮೂಡಿಸುವ ಕೆಲಸವಾಗಬೇಕು ಎಂದು ಶಾಸಕ ಎಚ್.ಕೆ ಕುಮಾರಸ್ವಾಮಿ ಹೇಳಿದ್ದಾರೆ. ಪಟ್ಟಣದ ಕ್ರಾಫರ್ಡ್ ಆಸ್ಪತ್ರೆ ಅವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವಜನಸಂಖ್ಯೆ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜನಸಂಖ್ಯೆ ಏರಿಕೆ ಎಲ್ಲಾ ಸಮಸ್ಯೆಗಳಿಗೂ ಮೂಲಕಾರಣ. ಇಂದಿಗೂ ಗ್ರಾಮೀಣ ಪ್ರದೇಶದಲ್ಲಿ ಕೂಲಿ ಕಾರ್ಮಿಕರು ಹಾಗೂ ಅವಿದ್ಯಾವಂತರು ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ. ಇವರಿಗೆ ಜನಸಂಖ್ಯೆ ಏರಿಕೆಯ ದುಷ್ಪರಿಣಾಮದ ಬಗ್ಗೆ ಅರಿವು ಮೂಡಿಸಬೇಕು ಎಂದರು.
ಮದುವೆ ವಯಸ್ಸು ಹೆಚ್ಚಿಸಲಿ: ಪ್ರತಿಯೊಬ್ಬರು ಎರಡು ಮಕ್ಕಳಿಗೆ ಸಂತಾನ ಹರಣ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡರೆ ಜನಸಂಖ್ಯೆ ನಿಯಂತ್ರಣ ಸಾಧ್ಯ. ತಮ್ಮ ಜವಾಬ್ದಾರಿ ಕಳೆದುಕೊಳ್ಳುವ ನಿಟ್ಟಿನಲ್ಲಿ ಪೋಷಕರು ಹೆಣ್ಣುಮಕ್ಕಳನ್ನು ಚಿಕ್ಕವಯಸ್ಸಿಗೆ ಮದುವೆ ಮಾಡುತ್ತಿದ್ದಾರೆ. ಆದ್ದರಿಂದ ಸರಕಾರ ಮದುವೆ ವಯಸ್ಸನ್ನು ಪರಿಷ್ಕರಿಸಿ ಹೆಣ್ಣುಮಕ್ಕಳ ಮದುವೆ ವಯಸ್ಸನ್ನು 21 ಹಾಗೂ ಗಂಡು ಮಕ್ಕಳ ಮದುವೆ ವಯಸ್ಸನ್ನು 25 ಕ್ಕೆ ಹೆಚ್ಚಿಸಬೇಕು ಎಂದರು. ತಾಪಂ ಅಧ್ಯಕ್ಷ ಸಿದ್ದಯ್ಯ ಮಾತನಾಡಿ, ಜನಸಂಖ್ಯೆ ನಿಯಂತ್ರಣದ ಗಂಭೀರತೆಯನ್ನು ಅರ್ಥಮಾಡಿಕೊಂಡು ಪ್ರತಿಯೊಬ್ಬ ನಾಗರಿಕನು ಕೆಲಸಮಾಡ ಬೇಕು. ಕೇವಲ ಆರೋಗ್ಯ ಇಲಾಖೆಯಿಂದ ಮಾತ್ರ ಈ ಸಮಸ್ಯೆಗೆ ಪರಿಹಾರ ಒದಗಿಸಲು ಸಾಧ್ಯವಿಲ್ಲ ಎಂದರು. ವೇದಿಕೆಯಲ್ಲಿ ಜಿಪಂ ಸದಸ್ಯೆ ಸುಲೋಚನಾ, ಜೆಎಸ್ಎಸ್ ನರ್ಸ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ವಿನೋಲಿಯನ್ ರಾಜ್, ವೈದ್ಯಾಧಿಕಾರಿ ಮಲ್ಲಿಕಾರ್ಜುನ ಸ್ವಾಮಿ, ಇ.ಒ ಭಜಂತ್ರಿ ಇತರರು ಇದ್ದರು