'ಸಂಸ್ಕೃತಿ ಉಳಿಸುವುದು ವಿದ್ಯಾರ್ಥಿಗಳಿಂದ ಸಾಧ್ಯ'
ಸಕಲೇಶಪುರ: ನಮ್ಮ ನಾಡಿನ ನಡೆ - ನುಡಿ ಹಾಗೂ ಸಂಸ್ಕೃತಿಯನ್ನು ಉಳಿಸುವ ಕೆಲಸ ವಿದ್ಯಾರ್ಥಿಗಳಿಂದ ಸಾಧ್ಯ ಎಂದು ಸಾಹಿತಿ ಕೊಟ್ರೇಶ್ ಎಸ್. ಉಪ್ಪಾರ್ ಅಭಿಪ್ರಾಯಪಟ್ಟರು.
ಪಟ್ಟಣದ ಬಾಲಕಿಯರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಇತ್ತೀಚೆಗೆ ನಡೆದ ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ ನಡೆದ ರಸಗ್ರಹಣ ಕಾರ್ಯಕ್ರಮದಲ್ಲಿ ಉಪನ್ಯಾಸಕರಾಗಿ ಭಾಗವಹಿಸಿ ಮಾತನಾಡಿದರು. ಕನ್ನಡ ಸಂಸ್ಕೃತಿ ಇಲಾಖೆಯು ಕೇವಲ ಸಾಂಸ್ಕೃತಿಕ ಚಟುವಟಿಕೆಗಳಿಗೆ ಮಾತ್ರ ಸೀಮಿತವಾಗಿಲ್ಲದೇ ಸಾಹಿತ್ಯ, ನಾಡು, ನುಡಿ ಹಾಗೂ ಸಂಸ್ಕೃತಿಯನ್ನು ಮೇಳೈಸಿಕೊಂಡು ಸಮಾಜದಲ್ಲಿ ಜಾಗೃತಿಯನ್ನು ಮೂಡಿಸುವ ಕೆಲಸ ಮಾಡುತ್ತಿರುವುದು ನಿಜಕ್ಕೂ ಶ್ಲಾಘನೀಯ ಎಂದು ನುಡಿದರು.
ಸಮಾಜದಲ್ಲಿ ಜಾಗೃತಿ: 12ನೇ ಶತಮಾನದಲ್ಲಿ ಜಾತಿ ಎಂಬ ವ್ಯವಸ್ಥೆಯನ್ನು ಹೋಗಲಾಡಿಸಲು ಶಿವಶರಣರು ವಚನಗಳ ಮೂಲಕ ಈ ಸಮಾಜವನ್ನು ತಿದ್ದುವ ಕೆಲಸ ಮಾಡಿದರು ಹಾಗೂ ಪ್ರತಿ ವ್ಯಕ್ತಿಯು ತನ್ನ ವ್ಯಕ್ತಿತ್ವವನ್ನು ತಾವೇ ರೂಪಿಸಿಕೊಳ್ಳಬೇಕೆಂಬ ಹಂಬಲ ಅವರದು ಎಂದರು. ಶಿವಶರಣರು ರಚಿಸುತ್ತಿದ್ದ ವಚನಗಳು ಜಾಗೃತಿಯನ್ನು ಮೂಡಿಸುವ ಕೆಲಸವನ್ನು ಮಾಡುತ್ತಿದ್ದರು ಹಾಗೂ ವಚನಗಳು ಜನರಲ್ಲಿ ಧಾರ್ಮಿಕ ಭಾವನೆಗಳನ್ನು ಉಂಟುಮಾಡುತ್ತಿದ್ದವು ಎಂದರು.
ಕಾರ್ಯಕ್ರಮದಲ್ಲಿ ಅಖಿಲ ಭಾರತ ವಚನ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ತಿ.ರಾಮಕೃಷ್ಣಯ್ಯ, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್. ಚಂದ್ರಶೇಖರ್, ಪುರಸಭೆ ಅಧ್ಯಕ್ಷ ಎಸ್.ಎನ್. ಸತೀಶ್, ಪುರಸಭಾ ಸದಸ್ಯ ಕೆ.ಎಂ. ವೆಂಕಟೇಶ್. ಪತ್ರಕರ್ತ ಕಿರಣ್ ಚಂದ್ರ, ಕಾಲೇಜಿನ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥ್ಥಿನಿಯರು ಇದ್ದರು.