ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಕುಡಿಯುವ ನೀರು, ಮೇವು ಒದಗಿಸಿ

Srinivasa Murthy VN
Updated On : 15 Feb 2014, 9:55 am

ಹಾಸನ: ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದ್ದು, ಅಧಿಕಾರಿಗಳು ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವು ಒದಗಿಸುವ ಕಾರ್ಯಕ್ಕೆ ಮುಂದಾಗಬೇಕು ಎಂದು ಮಾಜಿ ಪ್ರಧಾನ ಎಚ್.ಡಿ. ದೇವೇಗೌಡರು ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾ ಪಂಚಾಯ್ತಿ ಹೊಯ್ಸಳ ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತವಾರಿ ಸಮಿತಿ ಸಭೆಯ ಅಧ್ಯಕ್ಷತೆಯನ್ನು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ವಹಿಸಿದ್ದರು.
ಎಲ್ಲೆಲ್ಲೂ ಕುಡಿಯುವ ನೀರಿನ ಸಮಸ್ಯೆ: ಬೇಸಿಗೆ ಸಮೀಪಿಸಿರುವುದರಿಂದ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದೆ. ಹಾಸನ ತಾಲೂಕಿನ ಸಾಲಗಾಮೆಯಿಂದ ಹಿಡಿದು ದುದ್ದವರೆಗೆ ನೋಡಿದರೆ ಕುಡಿಯುವ ನೀರಿನ ಸಮಸ್ಯೆ ತಾಂಡವವಾಡುತ್ತಿದೆ.
ಈ ನಿಟ್ಟಿನಲ್ಲಿ ಜನತೆಗೆ ಕುಡಿಯುವ ನೀರು ಒದಗಿಸಲು ಅಧಿಕಾರಿಗಳು ತಂಡೋಪತಂಡವಾಗಿ ಕಾರ್ಯಪ್ರವೃತ್ತರಾಗಬೇಕು. ಜೊತೆಗೆ ಜಾನುವಾರುಗಳಿಗೆ ಮೇವಿನ ಅಭಾವ ತಲೆದೂರದಂತೆ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ನೀರಾವರಿ ಇಲಾಖೆ ಅಧಿಕಾರಿ ಮಾತನಾಡಿ, ಈಗಾಗಲೇ 43.20 ಕೋಟಿ ರು.ಗಳ ಅನುದಾನ ಲಭ್ಯವಾಗಿದ್ದು, ಈ ಪೈಕಿ 29 ಕೋಟಿ ರು.ಗಳ ವೆಚ್ಚ ಅಗಿದ್ದು, ಮಾರ್ಚ್ ಅಂತ್ಯದೊಳಗೆ ಪೂರ್ತಿ ಹಣವನ್ನು ಉಪಯೋಗಿಸಲಾಗುತ್ತದೆ. ಜಿಲ್ಲೆಯಲ್ಲಿ ಒಟ್ಟು 1640 ಕಾಮಗಾರಿಗಳ ಪೈಕಿ 1119 ಕಾಮಗಾರಿಗಳು ಆಗಿದ್ದು, 33.31 ಕೋಟಿ ರು. ವೆಚ್ಚ ಮಾಡಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಸರ್ಕಾರಕ್ಕೆ ಪ್ರಸ್ತಾವನೆ: ಶಾಸಕ ಎಚ್.ಎಚ್.ರೇವಣ್ಣ ಮಾತನಾಡಿ, ದುದ್ದಸೇರಿದಂತೆ ನಾನಾ ಕಡೆಗಳಲ್ಲಿ ಕುಡಿಯುವ ನೀರಿಲ್ಲದೆ ಸಮಸ್ಯೆ ಎದುರಿಸುತ್ತಿದ್ದಾರೆ. ಈಗಾಗಲೇ ರಾಜ್ಯ ಸರ್ಕಾರಕ್ಕೆ ಜಿಲ್ಲಾಪಂಚಾಯ್ತಿ ವತಿಯಿಂದ 29.11 ಕೋಟಿ ರು.ಗಳ ತುರ್ತು ಕುಡಿಯುವ ನೀರಿನ ಕಾಮಗಾರಿಗೆ ಪ್ರಸ್ತಾವನೆ ಕಳುಸಲಾಗಿದೆ ಎಂದರು.
ಅರ್ಹರಿಗೆ ಹಸಿರು ಕಾರ್ಡ್ ಸಿಗಬೇಕು,  ನೀರಿಗಾಗಿ ವಿದ್ಯುತ್ ಇಲಾಖೆ ವಿದ್ಯುತ್ ಸಂಪರ್ಕ ಕಲ್ಪಿಸಬೇಕು ಎಂದು ಅವರು ಆಗ್ರಹಿಸಿದರು.
ಶಾಸಕ ಕೆ.ಎಂ. ಶಿವಲಿಂಗೇಗೌಡ ಮಾತನಾಡಿ, ಕುಡಿಯುವ ನೀರಿಗೆ ಸಂಬಂಧಿಸಿದಂತೆ ಎಷ್ಟೆಷ್ಟು ಕಾಮಗಾರಿಗಳು ಆಗಿದೆ ಅಂತ ಸಂಪೂರ್ಣವಾದ ಮಾಹಿತಿಯನ್ನು ಅಧಿಕಾರಿಗಳು ನೀಡಬೇಕು ಎಂದರು.
ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಎಚ್.ಎನ್. ಗೋಪಾಲಕೃಷ್ಣ ಮಾತನಾಡಿ, ಬೇಸಿಗೆಯಲ್ಲಿ ನೀರಿನ ಸಮಸ್ಯೆ ನೀಗಿಸಲು ಯೋಜನೆ ಕಾರ್ಯಕ್ರಮ ರೂಪಿಸಿದ್ದು, 36 ಕೋಟಿ ರು.ಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಆದರೆ, ಈಗ ಜಿಲ್ಲಾಧಿಕಾರಿ ಬಳಿ  ಇರುವ 4.12 ಕೋಟಿ ರು.ಗಳ ಅನುದಾನವನ್ನು ಬಳಿಸುವಂತೆ ಸೂಚಿದೆ. ಆದ್ದರಿಂದ ಉಳಿಗೆ ಇರುವ ಅನುದಾನವನ್ನು ಸದ್ಬಳಕೆ ಮಾಡಬೇಕು. ನಂತರ ಸರ್ಕಾರದಿಂದ ಅನುದಾನ ಬರಲಿದೆ ಎಂದರು.

ಸಭೆಗೆ ಗೈರುಹಾಜರಾದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ
ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಗೆ ಜಿಲ್ಲಾ ಮಟ್ಟದ ಅಧಿಕಾರಿಗಳು ಬರದೆ ತಮ್ಮ ಅಧೀನದ ಅಧಿಕಾರಿಗಳನ್ನು ಸಭೆಗೆ ಕಳುಹಿಸುವ ಮೂಲಕ ಅಧಿಕಾರಿಗಳು ನಿರ್ಲಕ್ಷ್ಯತೆ ತೋರುತ್ತಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಅಭಿವೃದ್ಧಿ ಕೆಲಸಗಳಿಗೆ ತೊಡಕುಂಟಾಗುತ್ತಿದೆ. ಇಂತಹ ಸಭೆಗೆ ನಗರಸಭೆ ಆಯುಕ್ತರು, ಜಿಲ್ಲಾ ಮಟ್ಟದ ಅಧಿಕಾರಿಗಳು ಬರದಿದ್ದರೆ ಸಭೆ ನಡೆಸಿ ಪ್ರಯೋಜನವಾದರೂ ಏನೂ ಅದ್ದರಿಂದ ಸಭೆಗೆ ಗೈರು ಹಾಜರಾದವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಶಾಸಕರಾದ ಎಚ್.ಡಿ.ರೇವಣ್ಣ, ಕೆ.ಎಂ. ಶಿವಲಿಂಗೇಗೌಡ ಹಾಗೂ ಎಚ್.ಎಸ್. ಪ್ರಕಾಶ್ ಒತ್ತಾಯಿಸಿದರು. ಸಭೆಯಲ್ಲಿ ಶಾಸಕರಾದ ಎಚ್.ಎಸ್.ಪ್ರಕಾಶ್, ಎಚ್.ಕೆ. ಕುಮಾರಸ್ವಾಮಿ, ವಿಧಾನ ಪರಿಷತ್ ಸದಸ್ಯ ಪಟೇಲ್ ಶಿವರಾಂ, ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಅಂಬಿಕಾ ರಾಮಣ್ಣ, ಉಪಾಧ್ಯಕ್ಷ ಬಿಳಿ ಚೌಡಯ್ಯ, ಮುಖ್ಯ ಕಾರ್ಯ ನಿರ್ವಣಾಧಿಕಾರಿ ಉಪೇಂದ್ರ ಪ್ರತಾಪ್ ಸಿಂಗ್ ಹಾಗೂ ನಾನಾ ಇಲಾಖೆಗಳ ಅಧಿಕಾರಿಗಳು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement