ಬೈಕ್ ಸವಾರನ ಹತ್ಯೆ
ಬೆಂಗಳೂರು: ಬೈಕ್‌ನಲ್ಲಿ ಹೋಗುತ್ತಿದ್ದ ಯುವಕನನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಹತ್ಯೆಗೈದಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿ ಸಮೀಪದ ಬೆಟ್ಟದಾಸಪುರ ಬಳಿ ಗುರುವಾರ ರಾತ್ರಿ ಸಂಭವಿಸಿದೆ. ಹಾಸನ ಮೂಲದ ಜೆ.ಸಿ ರಸ್ತೆ ನಿವಾಸಿ ವಿನೋದ್ (18) ಕೊಲೆಯಾದ ದುರ್ದೈವಿ.
ಕೆಲಸದ ಮೇಲೆ ಬೆಟ್ಟದಾಸನಪುರಕ್ಕೆ ಹೋಗಿದ್ದ ವಿನೋದ್ ವಾಪಸಾಗುತ್ತಿದ್ದ. ಬೆಟ್ಟದಾಸನಪುರ ರಸ್ತೆಯಲ್ಲಿ ಬೈಕ್‌ನಲ್ಲಿ ಬರುತ್ತಿದ್ದಾಗ ಬಂದ ಮೂವರು ದುಷ್ಕರ್ಮಿಗಳು ವಿನೋದ್‌ನನ್ನು ಅಡ್ಡಗಟ್ಟಿ ಜಗಳ ತೆಗೆದಿದ್ದಾರೆ. ಈ ವೇಳೆ ಓರ್ವ ದುಷ್ಕರ್ಮಿ ವಿನೋದ್ ಎದೆಗೆ ಚಾಕುವಿನಿಂದ ಇರಿದಿದ್ದಾನೆ. ಚಾಕು ಇರಿತದಿಂದ ರಕ್ತಸ್ರಾವವಾಗುತ್ತಿದ್ದ ವಿನೋದ್‌ನನ್ನು ದಾರಿಹೋಕರು ಗಮನಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಬೆಳಗ್ಗೆ ವಿನೋದ್ ಮೃತಪಟ್ಟಿದ್ದಾನೆ. ವಿನೋದ್‌ನನ್ನು ಅಡ್ಡಗಟ್ಟಿ ದುಷ್ಕರ್ಮಿಗಳು ದರೋಡೆಗೆ ಯತ್ನಿಸಿರಬಹುದು. ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ವಿನೋದ್‌ಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಜಿಲ್ಲಾಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ
ಹಾಸನ: ಮಾಜಿ ಪ್ರಧಾನಮಂತ್ರಿ ಹಾಗೂ ಹಾಸನ ಲೋಕಸಭಾ ಸದಸ್ಯರು ಮತ್ತು ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಅಧ್ಯಕ್ಷ ಹೆಚ್.ಡಿ. ದೇವೇಗೌಡ ಅವರ ಅಧ್ಯಕ್ಷತೆಯಲ್ಲಿ ಮಾ.1ರಂದು ಬೆಳಿಗ್ಗೆ 11ಕ್ಕೆ ಜಿಲ್ಲಾ ಪಂಚಾಯ್ತಿ ಹೊಯ್ಸಳ ಸಭಾಂಗಣದಲ್ಲಿ 2013-14ನೇ ಸಾಲಿನ ನಾಲ್ಕನೇ ತ್ರೈಮಾಸಿಕ ಕೇಂದ್ರ ವಿವಿಧ ಪುರಸ್ಕತ ಯೋಜನೆ ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ ಎಂದು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಕಾರ್ಯದರ್ಶಿ ತಿಳಿಸಿದ್ದಾರೆ.