ವೈದ್ಯರ ಮೇಲೆ ಹಲ್ಲೆ: ಇಂದು ಆಸ್ಪತ್ರೆ ವೈದ್ಯ, ಸಿಬ್ಬಂದಿ ಮುಷ್ಕರ
ಅರಕಲಗೂಡು: ಕರ್ತವ್ಯ ನಿರತ ವೈದ್ಯರೊಬ್ಬರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಕರ್ತವ್ಯನಿರತ ವೈದ್ಯರು ಮತ್ತು ಸಿಬ್ಬಂದಿಗೆ ಸೂಕ್ತ ರಕ್ಷಣೆ ಒದಗಿಸುವಂತೆ ಒತ್ತಾಯಿಸಿ ಇಲ್ಲಿನ ಸಾರ್ವಜನಿಕ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ಶನಿವಾರ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಶನಿವಾರ ಅಪಘಾತ ಪ್ರಕರಣ ಒಂದಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ದಿನೇಶ್ ಮತ್ತು ಶಿವ ಎಂಬುವವರು ಆಸ್ಪತ್ರೆಯೊಳಗೆ ವೈದ್ಯರಾದ ಡಾ. ಧರಣೀಶ್ ಎಂಬುವರ ಮೇಲೆ ಹಲ್ಲೆ ನಡೆಸಿದ್ದರೆಂದು ಪೊಲೀಸರಿಗೆ ದೂರು ಸಲ್ಲಿಸಲಾಗಿತ್ತು. ಈ ಸಂಬಂಧ ಪೊಲೀಸರು ಇಬ್ಬರೂ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯ ಬಂಧನಕ್ಕೆ ಒಪ್ಪಿಸಲಾಗಿತ್ತು. ಆಸ್ಪತ್ರೆಯಲ್ಲಿ ವೈದ್ಯ ಸಿಬ್ಬಂದಿಗೆ ಸೂಕ್ತ ರಕ್ಷಣೆ ಇಲ್ಲ. ಅಗತ್ಯ ರಕ್ಷಣೆ ಒದಗಿಸುವಂತೆ ಒತ್ತಾಯಿಸಿ ಶನಿವಾರ ಆಸ್ಪತ್ರೆ ವೈದ್ಯರು ಮತ್ತು ಸಿಬ್ಬಂದಿ ಪ್ರತಿಭಟನೆ ನಡೆಸುವರು.