ಬಾಲಗಂಗಾಧರನಾಥ ಸ್ವಾಮಿ ಸ್ಮರಣೆ
ಹಾಸನ: ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾಗಿದ್ದ ಭೈರವೈಕ್ಯ ಪದ್ಮಭೂಷಣ ಡಾ. ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರ ಪ್ರಥಮ ವರ್ಷದ ಪುಣ್ಯ ಸ್ಮರಣೆ ಕಾರ್ಯಕ್ರಮ ಸೋಮವಾರ ನಗರದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠದಲ್ಲಿ ಶ್ರದ್ಧಾಭಕ್ತಿಯಿಂದ ನಡೆಯಿತು.
ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಹಾಸನ ಶಾಖಾ ಮಠದ ಕಾರ್ಯದರ್ಶಿ ಶ್ರೀ ಶಂಭುನಾಥ ಸ್ವಾಮೀಜಿ ಅವರ ನೇತೃತ್ವದಲ್ಲಿ ಶ್ರೀಮಠದ ಆವರಣದಲ್ಲಿರುವ ನವನಾಥಯಾಗ ಮಂಟಪದಲ್ಲಿ ಬೆಳಗ್ಗೆ 6ರಿಂದಲೇ ಪೂಜೆ ಮತ್ತು ಧಾರ್ಮಿಕ ವಿಧಿ ವಿಧಾನಗಳು ನಡೆದವು.
ಶ್ರೀಗಳಿಂದ ಪೂಜೆ: ಶ್ರೀ ಶಂಭುನಾಥ ಸ್ವಾಮೀಜಿ ಅವರು ಭೈರವೈಕ್ಯ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮತ್ತು ಪೂಜೆ ನೆರವೇರಿಸುವ ಮೂಲಕ ಪುಣ್ಯ ಸ್ಮರಣೆ ಕಾರ್ಯಕ್ಕೆ ಚಾಲನೆ ನೀಡಿದರು. ನಗರದ ಜವೇನಹಳ್ಳಿ ಮಠದ ಶ್ರೀ ಸಂಗಮೇಶ್ವರ ಸ್ವಾಮೀಜಿ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು, ಪೂಜೆ ನೆರವೇರಿಸಿದರು.
ವಿಧಾನ ಪರಿಷತ್ ಸದಸ್ಯ ಪಟೇಲ್ ಶಿವರಾಂ, ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಜಿ.ಎಲ್. ಮುದ್ದೇಗೌಡ, ಪ್ರಾಧ್ಯಾಪಕ ಡಾ. ಹೆಚ್.ಎಲ್. ಮಲ್ಲೇಶಗೌಡ ಮತ್ತು ಸಮಾಜ ಸೇವಕ ಡಾ. ಗುರುರಾಜ್ ಹೆಬ್ಬಾರ್ ಅವರು ಪೂಜಾ ಕಾರ್ಯದಲ್ಲಿ ಭಾಗವಹಿಸಿ, ಭೈರವೈಕ್ಯ ಶ್ರೀಗಳ ಸೇವೆಯನ್ನು ಸ್ಮರಿಸಿದರು.
ಈ ಸಂದರ್ಭದಲ್ಲಿ ರಾಜ್ಯಸಭೆ ಮಾಜಿ ಸದಸ್ಯ ಹೆಚ್.ಕೆ. ಜವರೇಗೌಡ, ಕಾಂಗ್ರೆಸ್ ಮುಖಂಡರಾದ ಹೆಚ್.ಪಿ. ಮೋಹನ್, ಬಿ.ಕೆ. ರಂಗಸ್ವಾಮಿ ಮತ್ತು ಡಾ. ನಾಗರಾಜ್, ನಗರಸಭೆ ಸದಸ್ಯರಾದ ಹೆಚ್.ಎಂ. ಸುರೇಶ್ ಕುಮಾರ್ ಮತ್ತು ಡಾ. ಹೆಚ್.ಎಸ್. ಅನಿಲ್ ಕುಮಾರ್, ಜೆಡಿಎಸ್ ಮುಖಂಡ ಹೆಚ್.ಪಿ ಸ್ವರೂಪ್, ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಹೆಚ್.ಬಿ. ಮದನಗೌಡ ಮತ್ತು ಶ್ರೀಮಠದ ವ್ಯವಸ್ಥಾಪಕ ಹೆಚ್.ಕೆ. ಚಂದ್ರಶೇಖರ್ ಇದ್ದರು.