ಆಂಗ್ಲ ಭಾಷೆಯಲ್ಲಿ ಆಮಂತ್ರಣ: ಕರವೇ ಕಾರ್ಯಕರ್ತರ ಪ್ರತಿಭಟನೆ
ಬೇಲೂರು: ಕನ್ನಡ ಭಾಷೆಯಲ್ಲಿ ಆಹ್ವಾನ ಪತ್ರಿಕೆ ಮುದ್ರಿಸದೆ ಪಟ್ಟಣದ ಪೂರ್ಣಪ್ರಜ್ಞಾ ಶಾಲೆಯ ವಾರ್ಷಿಕೋತ್ಸವ ಸಮಾರಂಭದ ಆಹ್ವಾನ ಪತ್ರಿಕೆಯನ್ನು ಇಂಗ್ಲಿಷಿನಲ್ಲಿ ಮುದ್ರಿಸಿರುವುದನ್ನು ವಿರೋಧಿಸಿ ಕರವೇ ಕಾರ್ಯಕರ್ತರು ಶಾಲೆಯ ಮುಂಭಾಗ ಪ್ರತಿಭಟಿಸಿದರು.
ಈ ಸಂದರ್ಭದಲ್ಲಿ ಕರವೇ ಅಧ್ಯಕ್ಷ ಚಂದ್ರಶೇಖರ್ ಮಾತನಾಡಿ, ಕನ್ನಡ ಭಾಷೆಗೆ ಅವಮಾನ ಮಾಡಿರುವ ಸಂಸ್ಥೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಈ ಹಿಂದೆ ಪಟ್ಟಣದ ಎಲ್ಲ ಶಾಲೆಗಳ ವಾರ್ಷಿಕೋತ್ಸವ ಸಮಾರಂಭದ ಆಹ್ವಾನ ಪತ್ರಿಕೆಯನ್ನು ಕನ್ನಡದಲ್ಲಿ ಮುದ್ರಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿ ಎಲ್ಲ ಶಾಲೆಗಳಿಗೆ ಸೂಚನೆ ನೀಡುವಂತೆ ಕೋರಲಾಗಿತ್ತು. ಅದರೂ ಸಂಸ್ಥೆಯವರು ಇಂಗ್ಲಿಷ್‌ನಲ್ಲಿ ಮುದ್ರಿಸುವ ಮೂಲಕ ಕನ್ನಡ ಭಾಷಗೆ ಅವಮಾನ ಮಾಡಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ತಾಕೀತು ಮಾಡಿದರು. ಈ ಸಂಬಂಧ ಸಂಸ್ಥೆಯ ಕಾರ್ಯದರ್ಶಿ ಮುರುಳಿ ಮಾತನಾಡಿ, ಈ ವಿಚಾರ ಅಡಳಿತ ಮಂಡಳಿ ಗಮನಕ್ಕೆ ಬಂದಿಲ್ಲ. ನಮಗೂ ಕನ್ನಡ ಭಾಷೆಯ ಮೇಲೆ ಅಭಿಮಾನವಿದೆ. ಇಂದೇ ಕನ್ನಡದಲ್ಲಿ ಆಹ್ವಾನ ಪತ್ರಿಕೆಯನ್ನು ಮುದ್ರಿಸುವುದಾಗಿ ತಿಳಿಸಿದರಲ್ಲದೆ, ಮುಂದಿನ ದಿನಗಳಲ್ಲಿ ಈ ರೀತಿ ಅಚಾತುರ್ಯ ನಡೆಯಲು ಬಿಡುವುದಿಲ್ಲ ಎಂದು ತಿಳಿಸಿದರು. ಪ್ರತಿಭಟನೆಯಲ್ಲಿ ಖಾದರ್, ಪ್ರಸನ್ನ ಇತರರು ಇದ್ದರು.