ಪೋಲಿಯೋ ತಡೆಗೆ ಮುನ್ನೆಚ್ಚರಿಕೆ ಅಗತ್ಯ
ಅರಸೀಕೆರೆ: ಪೋಲಿಯೋ ಬಹು ದೊಡ್ಡ ಪಿಡುಗಾಗಿದ್ದು ಸಂಘ-ಸಂಸ್ಥೆಗಳ ಸಹಕಾರದಿಂದ ಇದನ್ನು ತಹಬದಿಗೆ ತಂದಿದ್ದು ಇದನ್ನು ಬೇರುಸಮೇತ ಕಿತ್ತೆಸೆಯಲು ಪ್ರತಿಯೊಬ್ಬರ ಸಹಕಾರ ಅತ್ಯಗತ್ಯವೆಂದು ತಹಸೀಲ್ದಾರ್ ಕೇಶವಮೂರ್ತಿ ತಿಳಿಸಿದರು.
ಪಲ್ಸ್ ಪೋಲಿಯೋ ಕಾರ್ಯಕ್ರಮ-2014 ಅಂಗವಾಗಿ ತಾಲೂಕು ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡಿದ್ದ ಆರೋಗ್ಯ ಇಲಾಖೆ ಸೇರಿದಂತೆ ನಾನಾ ಇಲಾಖೆಯ ಅಧಿಕಾರಿಗಳು ಹಾಗೂ ಜನಪರ ಸಂಘ ಸಂಸ್ಥೆಗಳ ಪದಾಧಿಕಾರಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು.
ನೆರೆ ರಾಷ್ಟ್ರಗಳಾದ ಪಾಕಿಸ್ತಾನ ಹಾಗೂ ಅಫಘಾನಿಸ್ತಾನದಲ್ಲಿ ಪೋಲಿಯೋ ಪೀಡಿತ ಮಕ್ಕಳ ಸಂಖ್ಯೆ ಹೆಚ್ಚಾಗಿ ಕಂಡು ಬಂದಿದೆ. ನಮ್ಮ ದೇಶದಲ್ಲಿ ಆತಂಕ ಪಡುವ ಅಗತ್ಯ ಇಲ್ಲವಾದರೂ ಮುನ್ನೆಚ್ಚರಿಕೆ ಕ್ರಮ ವಹಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ಹಾಗೂ ಜನಪರ ಸಂಘ ಸಂಸ್ಥೆಗಳು ಶ್ರಮಿಸುತ್ತಿವೆ ಎಂದರು.
ತಾಲೂಕು ಆರೋಗ್ಯ ಅಧಿಕಾರಿ ಡಾ. ದಿನೇಶ್ ಮಾತನಾಡಿ, ಜ.19ರಂದು ಮೊದಲ ಹಂತದ ಪಲ್ಸ್ ಪೋಲಿಯೋ ಕಾರ್ಯಕ್ರಮ ನಡೆಯುತ್ತಿದ್ದು, ಪೋಲಿಯೋ ಲಸಿಕೆ ಹಾಕಿಸಲು ಒಂದು ಸಂಚಾರಿ ವಾಹನ ಸೇರಿದಂತೆ ಪಟ್ಟಣದಲ್ಲಿ 20 ಹಾಗೂ ತಾಲೂಕಿನ ಗ್ರಾಮಾಂತರ ಭಾಗದಲ್ಲಿ 149 ಕೇಂದ್ರಗಳನ್ನು ತೆರೆಯಲಾಗುವುದು. ಅಲ್ಲದೆ ಕಾರ್ಯಕ್ರಮದ ಯಶಸ್ಸಿಗೆ ಆರೋಗ್ಯ ಇಲಾಖೆಯ 114 ಸಿಬ್ಬಂದಿ, 228 ಆಶಾ ಕಾರ್ಯಕರ್ತೆಯರು ಹಾಗೂ 488 ಅಂಗನವಾಡಿ ಕಾರ್ಯಕರ್ತೆಯರನ್ನು ಬಳಸಿಕೊಳ್ಳಲಾಗುತ್ತಿದೆ. 5 ವರ್ಷದೊಳಗಿನ ಎಲ್ಲ ಮಕ್ಕಳಿಗೂ ಪೋಷಕರು ಕಡ್ಡಾಯವಾಗಿ ಪೋಲಿಯೋ ಲಸಿಕೆ ಹಾಕಿಸಬೇಕೆಂದು ಮನವಿ ಮಾಡಿದರು.
ಪಟ್ಟಣದಲ್ಲಿ 3 ದಿನ ಹಾಗೂ ಗ್ರಾಮಾಂತರ ಭಾಗದಲ್ಲಿ 4 ದಿನ ಮನೆಮನೆಗೆ ತೆರಳಿ ಪೋಲಿಯೋ ಲಸಿಕೆ ಹಾಕಲು ತೊಡಗುವ ಸಿಬ್ಬಂದಿಗೆ ಪುರಸಭೆ ರೋಟರಿ ಸಂಸ್ಥೆ ಹಾಗೂ ಹೊಟೇಲ್ ಮಾಲಿಕರ ಸಂಘದ ವತಿಯಿಂದ ಬೆಳಗಿನ ಉಪಹಾರ ಹಾಗೂ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಲಾಗಿದೆ ಎಂದು ಸಭೆಯಲ್ಲಿ ಹಾಜರಿದ್ದ ಸಂಘದ ಪದಾಧಿಕಾರಿಗಳು ತಿಳಿಸಿದರು.
ಪುರಸಭೆ ಅಧ್ಯಕ್ಷ ಮೋಹನ್‌ಕುಮಾರ್, ತಾಪಂ ಕಾರ್ಯನಿರ್ವಹಣಾ ಅಧಿಕಾರಿ ಮೂರ್ತಿ, ರೋಟರಿ ಸಂಸ್ಥೆ ಅಧ್ಯಕ್ಷ ಪ್ರವೀಣ್‌ಕುಮಾರ್, ಮಾಜಿ ಅಧ್ಯಕ್ಷ ಬಿ.ಕೆ.ಯೋಗೀಶಾಚಾರ್, ರೆಡ್‌ಕ್ರಾಸ್ ಸಂಸ್ಥೆಯ ಅಧ್ಯಕ್ಷ ಎನ್.ಜಿ.ಮಧು ಇದ್ದರು.