ಕಾರು ಹರಿದು ಮಹಿಳೆ ಸಾವು; ಸಾರ್ವಜನಿಕರ ಪ್ರತಿಭಟನೆ
ಚನ್ನರಾಯಪಟ್ಟಣ: ರಾಷ್ಟ್ರೀಯ ಹೆದ್ದಾರಿ ಹೊಂಬಾಳೆ ಕೊಪ್ಪಲು ಗೇಟ್ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಶನಿವಾರ ಸಂಜೆ ನಡೆದಿದೆ.
ಸಂಜೆ ಸುಮಾರು 5:30ರ ವೇಳೆಗೆ ತಾಲೂಕಿನ ಜಿ. ಹೊಸೂರು ಗ್ರಾಮದ ಜಯಮ್ಮ (45) ಮಹಿಳೆ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದರೂ ಕಾರಿನ ಚಾಲಕ ಅಪಘಾತ ಸ್ಥಳದಲ್ಲಿ ವಾಹನ ನಿಲ್ಲಿಸದೇ ಪರಾರಿಯಾಗಿದ್ದಾನೆ.
ಪ್ರತಿಭಟನೆ: ಮೃತಪಟ್ಟ ಮಹಿಳೆಯ ಮೃತದೇಹವಿಟ್ಟುಕೊಂಡು ಹೆದ್ದಾರಿ ನಿರ್ಮಾಣ ಅವೈಜ್ಞಾನಿಕವಾಗಿ ಕೂಡಿರುವುದರಿಂದ ಸರಣಿ ಅಪಘಾತವಾಗುತ್ತಿವೆ ಎಂದು ಆರೋಪಿಸಿ ಸಾರ್ವಜನಿಕರು ಅರ್ಧ ಗಂಟೆಗೂ ಅಧಿಕ ಸಮಯ ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿದರು. ತಕ್ಷಣವೇ ಹೆದ್ದಾರಿ ಅಧಿಕಾರಿಗಳು ಸ್ಥಳಕ್ಕೆ ಬರುವಂತೆ ಆಗ್ರಹಿಸಿ ರಸ್ತೆಯಲ್ಲಿಯೇ ಕುಳಿತು ಧರಣಿ ನಡೆಸಿದರು.
ರಸ್ತೆ ನಿರ್ಮಾಣ ಅವೈಜ್ಞಾನಿಕವಾಗಿ ಕೂಡಿರುವುದೇ ರಸ್ತೆ ಅಪಘಾತಕ್ಕೆ ಕಾರಣವಾಗಿದ್ದು, ಕಳೆದ ನಾಲ್ಕು ತಿಂಗಳಲ್ಲಿ ಹೊಂಬಾಳೆ ಕೊಪ್ಪಲು ಬಳಿ ನಡೆದಿರುವ ಅಪಘಾತಗಳಲ್ಲಿ 10 ಮಂದಿ ಮೃತಪಟ್ಟಿದ್ದಾರೆ. ರಸ್ತೆ ನಿರ್ಮಾಣದಲ್ಲಿ ಅವೈಜ್ಞಾನಿಕತೆಯೇ ಅಪಘಾತಕ್ಕೆ ಕಾರಣ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಆಗ್ರಹ: ಚತುಷ್ಪತ ರಸ್ತೆ ನಿರ್ಮಾಣ ಸಂದರ್ಭದಲ್ಲಿ ಸರ್ವಿಸ್ ರಸ್ತೆ ನಿರ್ಮಾಣ ಮಾಡದಿರುವುದು, ರಸ್ತೆಗಳಲ್ಲಿ ಸೂಚನಾ ಫಲಕಗಳು, ರಿಫ್ಲೆಕ್ಟರ್ ಹಾಗೂ ಪ್ರತಿ ಗೇಟ್ಗಳಲ್ಲಿ ಬಸ್ ಶೆಟ್ಟರ್ ನಿರ್ಮಾಣ ಮಾಡದೆ ರಸ್ತೆ ಸಂಪರ್ಕ ಕಲ್ಪಿಸಿರುವುದರಿಂದ ಅಪಘಾತಗಳು ಸಂಭವಿಸುತ್ತಿವೆ. ಈ ಬಗ್ಗೆ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸ್ಥಳಕ್ಕಾಗಮಿಸಿ ಸಮಸ್ಯೆ ಬಗೆಹರಿಸುವ ಕುರಿತು ಉತ್ತರಿಸಬೇಕು ಎಂದು ಆಗ್ರಹಿಸಿದರು.
ರಸ್ತೆ ಕಾಮಗಾಗಿ ಪೂರ್ಣಗೊಳಿಸದೆ ಟೋಲ್ನಲ್ಲಿ ಹಣ ಸಂಗ್ರಹಿಸಲಾಗುತ್ತಿದೆ. ಈ ಬಗ್ಗೆ ಪ್ರಶ್ನಿಸಿದರೆ ತೇಲಿಕೆ ಉತ್ತರ ನೀಡುತ್ತಿರುವ ಅಧಿಕಾರಿಗಳೇ ಅಪಘಾತಕ್ಕೆ ಕಾರಣರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸ್ಥಳಕ್ಕೆ ಆಗಮಿಸಿದ ಡಿಎಸ್ಪಿ ವಿನಾಯಕ ರಾವ್ ಪಾಟೀಲ್ ಹೆದ್ದಾರಿ ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿದರು. ಚನ್ನರಾಯಪಟ್ಟಣ ಪೊಲೀಸರು ದೂರು ದಾಖಲಿಸಿಕೊಂಡು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.