ಕ್ಷೇತ್ರದ ಅಭಿವೃದ್ಧಿಗೆ ತಾರತಮ್ಯ ಮಾಡುತ್ತಿಲ್ಲ: ಉಮಾಶ್ರೀ
ಅರಸೀಕೆರೆ: ವಿರೋಧ ಪಕ್ಷದ ಶಾಸಕರಿರುವ ವಿಧಾನಸಭಾ ಕ್ಷೇತ್ರಗಳ ಅಭಿವೃದ್ಧಿಗೆ ತಾರತಮ್ಯ ನೀತಿ ಅನುಸರಿಸಲಾಗುತ್ತಿದೆ ಎಂಬುದು ಸತ್ಯಕ್ಕೆ ದೂರವಾದ ಸಂಗತಿಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಉಮಾಶ್ರೀ ಸ್ಪಷ್ಟಪಡಿಸಿದರು.
ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುವ ಮಾರ್ಗ ಮಧ್ಯೆ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಎಲ್ಲ 224 ವಿಧಾನಸಭಾ ಕ್ಷೇತ್ರಗಳಿಗೂ ಸಮಾನ ಅನುದಾನ ಒದಗಿಸಲು ರಾಜ್ಯ ಸರ್ಕಾರ ಬದ್ಧವಾಗಿದ್ದು ತಾರತಮ್ಯ ಮಾಡುವ ಪ್ರಶ್ನೆಯೇ ಇಲ್ಲ ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರ ರಾಜ್ಯದ ಎಲ್ಲಾ ಕ್ಷೇತ್ರಗಳ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧವಾಗಿದ್ದು ತಾರತಮ್ಯ ಮಾಡುವಂತಹ ಯಾವುದೇ ದುರುದ್ದೇಶ ಸರ್ಕಾರಕ್ಕಿಲ್ಲ. ರಾಜ್ಯದ ಜನತೆಯ ಸಮಗ್ರ ಅಭಿವೃದ್ಧಿಯೇ ಸರ್ಕಾರದ ಪ್ರಥಮ ಆದ್ಯತೆಯಾಗಿದ್ದು ಈ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸಲಾಗುತ್ತಿದೆ ಎಂದರು.
ರಾಜ್ಯದಲ್ಲಿ ಕ್ಷೀರಭಾಗ್ಯ, ಅನ್ನಭಾಗ್ಯ, ಶಾದಿಭಾಗ್ಯದಂತಹ ಯೋಜನೆಗಳು ಜನಪರವಾಗಿದ್ದು, ಇದರ ಕೀರ್ತಿ ರಾಜ್ಯ ಸರ್ಕಾರಕ್ಕೆ ಸಲ್ಲಬೇಕಿದೆ. ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಸರ್ಕಾರ ಕಾರ್ಯಪ್ರವೃತ್ತವಾಗಿದೆ. ಎಂದ ಅವರು ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಾಲಾ ಮಾತೆಯರ ವರ್ಗಾವಣೆ ಸಂಬಂಧ ಶಿಕ್ಷಣ ಮಂತ್ರಿಗಳೊಂದಿಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳುವುದಾಗಿ ಭರವಸೆ ನೀಡಿದರು.