ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಪ್ರೀತಿ, ವಿಶ್ವಾಸದ ನಾಡು ಕಟ್ಟಲು ಕೈ ಜೋಡಿಸಿ

Rashmi Kasaragodu
Updated On : 27 Jan 2014, 1:18 am

ಹಾಸನ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಂವಿಧಾನದ ಆಶಯದಂತೆ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದ್ದು, ಅದು ಎಲ್ಲರ ಜವಾಬ್ದಾರಿಯಾಗಿದೆ ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದರು.
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ನಡೆದ 65ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೇರವೇರಿಸಿ ಮಾತನಾಡಿ, ಶಿಕ್ಷಣ ಮೂಲಭೂತ ಹಕ್ಕಾಗಿ ಮೂಡಿದ ಪರಿಣಾಮ ಸಾಕಷ್ಟು ಬದಲಾವಣೆಗಳಾಗಿವೆ. ಕೃಷಿ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆಗಳು ಆಗಿದ್ದು ಅದಕ್ಕೆ ರಾಷ್ಟ್ರೀಯ ಕೃಷಿ ನೀತಿ ಕಾರಣ ಎಂದರು.
ಸಮಾನತೆ, ಸಮಾನ ಅವಕಾಶದ ಹಕ್ಕುಗಳನ್ನು ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನಮಗೆ ಸಂವಿಧಾನ ನೀಡಿದೆ. ಅದರ ಮೂಲ ಆಶಯಗಳನ್ನು ಅರಿತು, ಅವುಗಳನ್ನು ಕಾಯ್ದುಕೊಂಡು ಪರಸ್ಪರ ಸ್ನೇಹ, ಪ್ರೀತಿ ವಿಶ್ವಾಸದಿಂದ ನಮ್ಮ ಬದುಕು ಕಟ್ಟಿಕೊಳ್ಳೋಣ. ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಬೆಳಗೋಣ. ಡಾ.ಬಿ.ಆರ್.ಅಂಬೇಡ್ಕರ್ ಅವರ ಕಲ್ಪನೆಯ ಭಾರತದ ನಿರ್ಮಾಣಕ್ಕೆ ಎಲ್ಲರು ಒಂದಾಗೋಣ ಎಂದರು.
ಎಲ್ಲ ಜನ ಸಮುದಾಯಗಳಲ್ಲಿ ಇರುವ ಬಡತನವನ್ನು ಹೋಗಲಾಡಿಸಲು, ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದಿರುವವರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಸಲುವಾಗಿ ರಾಜ್ಯ ಸರ್ಕಾರ ಅನ್ನ, ಭಾಗ್ಯ, ಕ್ಷೀರಭಾಗ್ಯ, ಮೈತ್ರಿ, ಮನಸ್ವಿನಿ ಸೇರಿದಂತೆ ಅನೇಕ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸುತ್ತಿದೆ. ಕೃಷಿ ಉತ್ತೇಜನಕ್ಕಾಗಿ ರೈತರಿಗೆ ಬಡ್ಡಿ ರಹಿತ ಸಾಲ ಹಾಗೂ ಕನಿಷ್ಠ ಬಡ್ಡಿ ದರದ ಮೇಲೆ ಸಾಲ ಸೌಲಭ್ಯ ನೀಡುತ್ತಾ ಅನ್ನದಾತರ ಬೆಂಬಲಕ್ಕೆ ನಿಂತಿದೆ. ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ಘೋಷಿಸಿ ಖರೀದಿ ಕೇಂದ್ರಗಳಲ್ಲಿ ಸರ್ಕಾರವೇ ಕೊಳ್ಳುವ ಮೂಲಕ ರೈತರ ಹಿತ ಸಂರಕ್ಷಣೆಗೆ ಬದ್ಧವಾಗಿದೆ ಎಂದರು.
ಜಿಲ್ಲೆಯಲ್ಲಿ ಬರ ಪರಿಹಾರ ಯೋಜನೆಯಡಿ 2.42 ಕೋಟಿ ಅಂದಾಜು ವೆಚ್ಚದಲ್ಲಿ 162 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಇದೇ ರೀತಿ ಬರ ಪೀಡಿತ ತಾಲೂಕುಗಳಲ್ಲಿ ಶೇ.50ಕ್ಕೂ ಅಧಿಕ ಬೆಳೆ ಹಾನಿಯಾಗಿರುವ ಜಿಲ್ಲೆಯ 2,22,723 ರೈತ ಫಲಾನುಭವಿಗಳಿಗೆ 18.05 ಕೋಟಿ ಪರಿಹಾರ ಬಿಡುಗಡೆ ಮಾಡಲಾಗಿದೆ. ಸಕಲೇಶಪುರ, ಆಲೂರು, ಬೇಲೂರು ತಾಲೂಕುಗಳಲ್ಲಿ ಅತಿವೃಷ್ಟಿಯಿಂದ ಜನ, ಜಾನುವಾರು ಪ್ರಾಣ ಹಾನಿ, ಬೆಳೆ ಮನೆ ಹಾನಿ ಪ್ರಕರಣಗಳಲ್ಲಿ 4,425 ಮಂದಿಗೆ ಸುಮಾರು 76 ಲಕ್ಷ ಪರಿಹಾರ ಒದಗಿಸಲಾಗಿದೆ ಎಂದರು.
ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲೊಂದಾದ ಕ್ಷೀರಭಾಗ್ಯ ಯೋಜನೆಯಡಿ ಜಿಲ್ಲೆಯಲ್ಲಿ ಅಂಗನವಾಡಿ ಕೇಂದ್ರಗಳ 94,515 ಮಕ್ಕಳು ಹಾಗೂ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ 1,67,968 ಫಲಾನುಭವಿಗಳು ಪ್ರಯೋಜನ ಪಡೆಯುತ್ತಿದ್ದಾರೆ. ಒಂದನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಸರ್ಕಾರಿ ಶಾಲೆಗಳ 6,899 ವಿದ್ಯಾರ್ಥಿನಿಯರು ಒಂದು ದಿನದ ಹಾಜರಾತಿಗೆ 2ನಂತೆ ಪ್ರಯೋಜನ ಪಡೆಯುತ್ತಿದ್ದಾರೆ. ಅನ್ನಭಾಗ್ಯ ಯೋಜನೆಯಡಿ ಜಿಲ್ಲೆಯಲ್ಲಿ 23,468 ಅಂತ್ಯೋದಯ ಹಾಗೂ 3,81,004 ಬಿಪಿಎಲ್ ಒಟ್ಟು 4,04,472 ಪಡಿತರ ಚೀಟಿದಾರರಿಗೆ 1ಗೆ 1 ಕೆಜಿಯಂತೆ ಪ್ರತಿ ಕುಟುಂಬಕ್ಕೆ 30 ಕೆಜಿ ಅಕ್ಕಿ ವಿತರಿಸಲಾಗುತ್ತದೆ ಎಂದರು.
ಜಿಲ್ಲೆಯ 4,184 ಸ್ತ್ರೀಶಕ್ತಿ ಸ್ವ-ಸಹಾಯ ಗುಂಪುಗಳಿಗೆ ಸುತ್ತಿನಿಧಿ ಪ್ರಯೋಜನ ಒದಗಿಸಲಾಗಿದೆ. ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಡಿ 94,515 ಮಕ್ಕಳು, 11,586 ಗರ್ಭಿಣಿಯರು, 11,680 ಬಾಣಂತಿಯರು, 4,982 ಕಿಶೋರಿಯರಿಗೆ ಸೌಲಭ್ಯ ನೀಡಲಾಗುತ್ತಿದೆ. ಈ ವರ್ಷದಿಂದ ವಿಕಲಚೇತನರನ್ನು ವಿವಾಹವಾಗುವ ಸಾಮಾನ್ಯ ವ್ಯಕ್ತಿಗಳಿಗೆ 50 ಸಾವಿರ ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಹೊಸದಾಗಿ ಈ ವರ್ಷದಿಂದ ಹಿರಿಯ ನಾಗರಿಕರಿಗೆ ಸಹಾಯವಾಣಿ ಕೇಂದ್ರ ಪ್ರಾರಂಭಿಸಿ, ಆರೋಗ್ಯ ಪುನರ್ವಸತಿ ಮುಖಾಂತರ ಸಹಾಯಹಸ್ತ ಚಾಚಲಾಗುತ್ತಿದೆ. ಉನ್ನತ ಶಿಕ್ಷಣ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿಗಳಿಗೆ ಈ ವರ್ಷದಿಂದ ಸರ್ಕಾರವೇ ಶುಲ್ಕ ಮರುಪಾವತಿ ಮಾಡಲಿದೆ ಎಂದರು.
ಜಿಲ್ಲೆಯಲ್ಲಿ ಸುಮಾರು 1,14,299ಕ್ಕೂ ಹೆಚ್ಚು ರೈತರಿಗೆ ರಿಯಾಯಿತಿಯಲ್ಲಿ ಬಿತ್ತನೆ ಬೀಜವನ್ನು ವಿತರಿಸಲಾಗಿದೆ. ಸುಮಾರು 1,06,837 ಮೆ ಟನ್ ರಸಗೊಬ್ಬರವನ್ನು ವಿತರಿಸಿದ್ದು, ಕಳಪೆ ರಸಗೊಬ್ಬರ ಮಾರಾಟಗಾರರನ್ನು ಪೊಲೀಸ್ ವಶಕ್ಕೆ ನೀಡಿ ಕಳಪೆ ರಸಗೊಬ್ಬರ ಮಾರಾಟವನ್ನು ಸಂಪೂರ್ಣ ಸ್ಥಗಿತಗೊಳಿಸಲಾಗಿದೆ. ಕೃಷಿ ಸಂಸ್ಕರಣೆ ಯೋಜನೆಯಡಿ ರೈತರಿಗೆ ಅಗತ್ಯವಾಗಿ ಬೇಕಾದ 2752 ಸಂಖ್ಯೆಯ ಟಾರ್ಪಲಿನ್ಗಳನ್ನು ಹಾಗೂ 40 ಕೃಷಿ ಸಂಸ್ಕರಣಾ ಘಟಕಗಳನ್ನು ರಿಯಾಯಿತಿಯಲ್ಲಿ ವಿತರಿಸಲಾಗಿದೆ ಎಂದರು.
ಸಮಾಜ ಕಲ್ಯಾಣ ಇಲಾಖೆಯಲ್ಲಿನ ನಾನಾ ಹಂತದ ವಿದ್ಯಾರ್ಥಿ ನಿಲಯಗಳಲ್ಲಿ ಒಟ್ಟು 9467 ವಿದ್ಯಾರ್ಥಿಗಳಿಗೆ ಊಟ ಮತ್ತು ವಸತಿಯನ್ನು ಕಲ್ಪಿಸಲಾಗಿದೆ. ಇಲಾಖೆಯ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ 28.16 ಕೋಟಿ ಅನುದಾನ ನಿಗದಿಯಾಗಿದ್ದು, 16,200 ಪರಿಶಿಷ್ಟ ಜಾತಿ ಮತ್ತು ವರ್ಗದ ಕಾಲೇಜು ವಿದ್ಯಾರ್ಥಿಗಳಿಗೆ ಸುಮಾರು 8.79 ಕೋಟಿ ವಿದ್ಯಾರ್ಥಿ ವೇತನವನ್ನು ಹಾಗೂ 55,000 ಪರಿಶಿಷ್ಟ ಜಾತಿ ಮತ್ತು ವರ್ಗದ ಶಾಲಾ ವಿದ್ಯಾರ್ಥಿಗಳಿಗೆ 1.41 ಕೋಟಿ ವಿದ್ಯಾರ್ಥಿ ವೇತನವನ್ನು ಆನ್ಲೈನ್ ಮೂಲಕ ನೀಡಲಾಗುತ್ತಿದೆ ಎಂದರು.
ಕೇಂದ್ರ ಪುರಸ್ಕೃತ ಸೂಕ್ಷ್ಮ ನೀರಾವರಿ ಯೋಜನೆಯಡಿ ನಾನಾ ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಆಳವಡಿಸಲು ಎಲ್ಲಾ ವರ್ಗದ ರೈತರಿಗೆ ಶೇ.90ರಷ್ಟು ಸಹಾಯಧನ ನೀಡಲಾಗುತ್ತಿದೆ. ಇಲ್ಲಿಯವರೆಗೆ 789 ಜನ ಫಲಾನುಭವಿಗಳಿಗೆ 2.50 ಕೋಟಿ ಸಹಾಯಧನ ನೀಡಲಾಗಿದೆ. ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ 5.10 ಕೋಟಿ ಕ್ರಿಯಾ ಯೋಜನೆ ಅನುಮೋದಿಸಲಾಗಿದ್ದು, ಈವರೆಗೆ 2.86 ಕೋಟಿ ಸಹಾಯಧನ ನೀಡಲಾಗಿದೆ ಎಂದರು.
ಪ್ರಸಕ್ತ ಸಾಲಿನಲ್ಲಿ 20,150 ಹೆಕ್ಟೇರ್ ಪ್ರದೇಶದಲ್ಲಿ ಆಲೂಗಡ್ಡೆ ಬಿತ್ತನೆಯಾಗಿದ್ದು, ಆಲೂಗಡ್ಡೆ ಬೆಳೆಗೆ ವಿಶೇಷ ಪ್ಯಾಕೇಜ್ ಹಾಗೂ ಹವಾಮಾನ ಆಧಾರಿತ ಬೆಳೆ ವಿಮೆ ಪಾವತಿಸಿದ ರೈತರಿಗೆ ಪ್ರತಿ ಹೆಕ್ಟೇರ್ಗೆ 1500ರಂತೆ ಗರಿಷ್ಠ ಎರಡು ಹೆಕ್ಟೇರ್ ಪ್ರದೇಶಕ್ಕೆ ವಿಮಾ ಕಂತನ್ನು ಹಿಂದಿರುಗಿಸಲಾಗಿದೆ. ಜಿಲ್ಲೆ ಹಾಗೂ ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರ ಪ್ರತಿಬದ್ಧವಾಗಿದ್ದು, ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಿ ಮುಂದಿನ ದಿನಗಳಲ್ಲಿ ಇನ್ನಷ್ಟು ಪ್ರಗತಿ ಹಾದಿಯಲ್ಲಿ ಸಾಗೋಣ ಎಂದರು.
ಶಾಸಕ ಎಚ್.ಎಸ್.ಪ್ರಕಾಶ್, ವಿಧಾನ ಪರಿಷತ್ ಸದಸ್ಯ ಪಟೇಲ್ ಶಿವರಾಂ, ಜಿಲ್ಲಾಧಿಕಾರಿ ವಿ.ಅನ್ಬುಕುಮಾರ್, ಎಸ್ಪಿ ರವಿ ಚನ್ನಣ್ಣನವರ್, ಜಿಪಂ ಸಿಇಒ ಉಪೇಂದ್ರ ಪ್ರತಾಪ್ ಸಿಂಗ್, ಉಪ ವಿಭಾಗಾಧಿಕಾರಿ ಶರತ್, ತಹಸೀಲ್ದಾರ್ ಮಂಜುನಾಥ್ ಹಾಗೂ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement