'ಬಂಧಿತ ಉಪನ್ಯಾಸಕರನ್ನು ಹೊರಬಿಡಿ'
ಹಾಸನ: ಅತಿಥಿ ಉಪನ್ಯಾಸಕರ ನಾನಾ ಬೇಡಿಕೆಗಳ ಈಡೇರಿಕೆಗಾಗಿ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಮನೆ ಮುಂದೆ ಎಸ್ಎಫ್ಐ ಹಾಗೂ ಡಿವೈಎಫ್ಐ ನೇತೃತ್ವದಲ್ಲಿ ನಡೆಸಲಾಗುತ್ತಿದ್ದ ಅನಿರ್ದಿಷ್ಟಾವಧಿ ಧರಣಿ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿರುವುದನ್ನು ಖಂಡಿಸಿ ಹಾಗೂ ಕೂಡಲೇ ಅವರನ್ನು ಬಿಡುಗಡೆಗೊಳಿಸುವಂತೆ ಆಗ್ರಹಿಸಿ ಸೋಮವಾರ ಸಂಜೆ ಪ್ರತಿಭಟನೆ ನಡೆಸಿದರು.
ನಗರದ ಹೇಮಾವತಿ ಪ್ರತಿಮೆ ಮುಂದೆ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಎಸ್ಎಫ್ಐ ಹಾಗೂ ಡಿವೈಎಫ್ಐ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರಲ್ಲದೇ, ನ್ಯಾಯಯುತವಾದ ಬೇಡಿಕೆ ಈಡೇರಿಕೆಗಾಗಿ ಸೋಮವಾರ ಸಿಎಂ ಮನೆ ಮುಂದೆ ಧರಣಿಯಲ್ಲಿ ನಿರತರಾಗಿದ್ದರವರನ್ನು ಮುಖ್ಯಮಂತ್ರಿಯವರು ಬಂಧಿಸಲು ಆದೇಶ ಮಾಡಿದ್ದು ಖಂಡನೀಯ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಆದ್ದರಿಂದ ಈ ಕೂಡಲೇ ಬಂಧಿತರನ್ನು ಬಿಡುಗಡೆಗೊಳಿಸಿ ಬೇಡಿಕೆಯನ್ನು ತಕ್ಷಣ ಈಡೇರಿಸಬೇಕು. ಇಲ್ಲವಾದರೇ ಇಂದಿನಿಂದ ನಗರದಲ್ಲಿ ಬೃಹತ್ ಪ್ರತಿಭಟನೆಯನ್ನು ನಿರಂತರವಾಗಿ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಸಂಘಟನೆಯ ಮುಖಂಡರಾದ ಪೃಥ್ವಿ, ಗಿರೀಶ್ ಹಾಗೂ ಇತರರು ಇದ್ದರು.