ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಯುವ ಕಾಂಗ್ರೆಸ್ನಿಂದ ಆರ್ಟಿಇ ಜನ ಜಾಗೃತಿ

Rashmi Kasaragodu
Updated On : 31 Jan 2014, 12:45 pm

ಅರಸೀಕೆರೆ: ಸರ್ವಶಿಕ್ಷಣ ಅಭಿಯಾನ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಶಿಕ್ಷಣ ಹಕ್ಕು ಕಾಯ್ದೆ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ತಾಲೂಕು ಯುವ ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ನೂತನ ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಕೆ.ಆರ್. ರಘು ತಿಳಿಸಿದರು.
ಹಲವು ಯಶಸ್ವಿ ಯೋಜನೆಗಳು: ಪಟ್ಟಣದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಯು.ಪಿ.ಎ ಸರ್ಕಾರ ಸರ್ವಶಿಕ್ಷಣ ಅಭಿಯಾನ ಯೋಜನೆ ಜಾರಿಗೆ ತರುವ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆಗಳನ್ನು ಕೈಗೊಂಡಿದೆ.
ಪ್ರತಿಯೊಬ್ಬ ಮಕ್ಕಳಿಗೆ ಕಡ್ಡಾಯ ಶಿಕ್ಷಣ ನೀಡುವ ಮೂಲಕ ಸಮಾಜದ ಎಲ್ಲಾ ವರ್ಗದ ಜನರನ್ನು ಸುಶಿಕ್ಷಿತರನ್ನಾಗಿ ಮಾಡವಲ್ಲಿ ಅನೇಕ ಜನಪರ ಕಾರ್ಯಕ್ರಮಗಳನ್ನು ಕಳೆದ 10 ವರ್ಷಗಳ ಅವಧಿಯಲ್ಲಿ ಜಾರಿಗೆ ತರುವಲ್ಲಿ ಅತ್ಯಂತ ಯಶಸ್ವಿಯಾಗಿದೆ ಎಂದರು.
ಪ್ರಾಮಾಣಿಕ ಕಾರ್ಯ: ಸಮಾಜದ ಅತ್ಯಂತ ಬಡವರ್ಗದ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ನಿಟ್ಟಿನಲ್ಲಿ ಶಿಕ್ಷಣ ಹಕ್ಕು ಕಾಯ್ದೆಯನ್ನು ಜಾರಿಗೆ ತಂದು ಅನುದಾನಿತ ಖಾಸಗಿ ಪ್ರತಿಷ್ಠಿತ ಶಾಲೆಗಳಲ್ಲಿ ಹಿಂದುಳಿದ ವರ್ಗ ಮತ್ತು ಆರ್ಥಿಕವಾಗಿ ಹಿಂದುಳಿದ ಮಕ್ಕಳಿಗೆ ಉಚಿತ ಪ್ರವೇಶ ಅವಕಾಶವನ್ನು ಕಲ್ಪಿಸುವ ಮೂಲಕ ಎಲ್.ಕೆ.ಜಿ. ಮತ್ತು ಯು.ಕೆ.ಜಿ. ಹಾಗೂ 1ರಿಂದ 8ನೇ ತರಗತಿ ಮಕ್ಕಳಿಗೆ ಸಮಾನ ಶಿಕ್ಷಣವನ್ನು ನೀಡುವ ಪ್ರಾಮಾಣಿಕ ಕಾರ್ಯ ಮಾಡುತ್ತಿದೆ ಎಂದು ಹೇಳಿದರು.
ತಿಳುವಳಿಕೆ ನೀಡುವ ಕಾರ್ಯ: ಈ ಬಗ್ಗೆ ಈಗಾಗಲೇ ಕ್ಷೇತ್ರ ಶಿಕ್ಷಣ ಇಲಾಖೆ ಪ್ರಕಟಣೆ ನೀಡಿದ್ದು, ಇದಕ್ಕೆ ಪೂರಕವಾಗಿ ಸಾರ್ವಜನಿಕರಲ್ಲಿ ಆರ್.ಟಿ.ಇ ಕಾಯ್ದೆ ಬಗ್ಗೆ ಜಾಗೃತಿ ಉಂಟು ಮಾಡಲು ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮುಂಭಾಗ ವಿದ್ಯಾ ಸಹಾಯ ಹಸ್ತ ಕೇಂದ್ರ ಸ್ಥಾಪಿಸುವ ಮೂಲಕ ಯುವ ಕಾಂಗ್ರೆಸ್ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಇಲ್ಲಿಗೆ ಬರುವ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಸೂಕ್ತ ಸಲಹೆ ಮತ್ತು ಮಾರ್ಗದರ್ಶನ ಹಾಗೂ ಅರ್ಜಿ ನಮೂನೆಗಳನ್ನು ವಿತರಿಸುವ ಹಾಗೂ ತಿಳುವಳಿಕೆ ನೀಡುವ ಕಾರ್ಯಗಳನ್ನು ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಕೋರಿಕೆ: ಫೆ. 1ರಂದು ಶನಿವಾರ ಬೆಳಗ್ಗೆ 11ಕ್ಕೆ ಪಟ್ಟಣದ ಶ್ರೀಬಸವರಾಜೇಂದ್ರ ಸಮುದಾಯ ಭವನದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಬಿ. ಶಿವರಾಂ ಅಧ್ಯಕ್ಷತೆಯಲ್ಲಿ ನೂತನ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಡಾ. ಮಂತರಗೌಡ ಸೇರಿದಂತೆ ನೂತನವಾಗಿ ಚುನಾಯಿತರಾದ ಜಿಲ್ಲಾ ಯುವ ಪದಾಧಿಕಾರಿಗಳನ್ನು ಸನ್ಮಾನ ಸಮಾರಂಭವನ್ನು ಏರ್ಪಡಿಸಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ತಾಲೂಕು ಯುವ ಕಾಂಗ್ರೆಸ್ ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಬೇಕೆಂದು ಕೋರಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಜಿ. ನಿರಂಜನ್, ಮಾಜಿ ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ವಿಜಯಕುಮಾರ್, ಉಪಾಧ್ಯಕ್ಷ ನವೀನ್, ಕಾರ್ಯದರ್ಶಿ ಚೇತನ್ ಕುಮಾರ್, ನಗರಾಧ್ಯಕ್ಷ ಉಮಾಶಂಕರ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement