ಕಾಶಪ್ಪನವರ್ ಶಾಸಕ ಸ್ಥಾನ ರದ್ದತಿಗೆ ಆಗ್ರಹ
ಹಾಸನ: ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ ಹಾಗೂ ಬಸವರಾಜು ಪೊಲೀಸರ ಮೇಲೆ ಹಲ್ಲೆ ಮಾಡಿರುವುದು ಗೂಂಡಾವರ್ತನೆಯಾಗಿದ್ದು, ಅವರನ್ನು ಶಾಸಕ ಸ್ಥಾನದಿಂದ ವಜಾ ಮಾಡಬೇಕೆಂದು ಆಗ್ರಹಿಸಿ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು.
ಪ್ರತಿಭಟನಕಾರು ನಗರದ ಬಿಜೆಪಿ ಕಚೇರಿಯಿಂದ ಮೆರವಣಿಗೆ ಪ್ರಾರಂಭಿಸಿ ಎನ್.ಆರ್. ವೃತ್ತ, ಬಿ.ಎಂ. ರಸ್ತೆಯ ಮೂಲಕ ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ಬಂದು ಕೆಲ ಸಮಯ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ನೀಡಿದರು.
ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ ಹಾಗೂ ಬಸವರಾಜು ಕರ್ತವ್ಯ ನಿರತ ಆರಕ್ಷಕರ ಮೇಲೆ ಗೂಂಡಾ ವರ್ತನೆ ಮಾಡಿರುವುದು ನಾಚಿಗೇಡಿನ ಸಂಗತಿಯಾಗಿದೆ ಎಂದು ಆರೋಪಿಸಿದರು. ಕೂಡಲೇ ಇವರ ಶಾಸಕ ಹಾಗೂ ಸದಸ್ಯತ್ವ ಸ್ಥಾನವನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ರೇಣುಕುಮಾರ್, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಚನ್ನಕೇಶವ್, ಕಾರ್ಯದರ್ಶಿ ನಾಗೇಶ್, ಶ್ರೀನಿವಾಸ್, ಪ್ರಶಾಂತ್ ಹೊಸಮನೆ, ಕೃಷ್ಣೇಗೌಡ, ಪ್ರಸನ್ನಕುಮಾರ್, ಲೋಹಿತ್ ಕುಂದೂರು ಇದ್ದರು.