ಸಚಿವೆ ಉಮಾಶ್ರೀ ರಾಜಿನಾಮೆಗೆ ಆಗ್ರಹ
ಹಾಸನ: ಮಹಿಳೆಯರ ಮೇಲಿನ ಅತ್ಯಾಚಾರ, ದೌರ್ಜನ್ಯದಂತಹ ಪ್ರಕರಣವನ್ನು ಖಂಡಿಸಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವ ಉಮಾಶ್ರೀ ರಾಜಿನಾಮೆಗೆ ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು.
ಪ್ರತಿಭಟನಾಕಾರರು ನಗರದ ಹೇಮಾವತಿ ಪ್ರತಿಮೆಯಿಂದ ಮೆರವಣಿಗೆ ಪ್ರಾರಂಭಿಸಿ ಎನ್.ಆರ್. ವೃತ್ತ, ಬಿ.ಎಂ. ರಸ್ತೆಯ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಬಂದ ಕೆಲ ಸಮಯ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ನೀಡಿದರು.
ಕಠಿಣ ಶಿಕ್ಷೆ ವಿಧಿಸಿ: ಅತ್ಯಾಚಾರ ಹಾಗೂ ದೌರ್ಜನ್ಯವನ್ನು ಎಸಗಿದಂತಹ ಆರೋಪಿಗಳಿಗೆ ಯಾವುದೇ ಶಿಕ್ಷೆಯಾಗದೆ ಆರೋಪಿಗಳು ರಾಜಾರೋಷವಾಗಿ ಓಡಾಡಿಕೊಂಡಿದ್ದಾರೆ. ಅವರ ವಿರುದ್ಧ ಯಾವುದೇ ರೀತಿಯ ಕಠಿಣ ಶಿಕ್ಷೆಗಳು ಆಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮಹಿಳೆಯರಿಗೆ ಸೂಕ್ತ ರಕ್ಷಣೆ ಇಲ್ಲದಂತಾಗಿದೆ. ಪ್ರತಿನಿತ್ಯ ಮಹಿಳೆಯರ ಮೇಲೆ ಒಂದಲ್ಲ ಒಂದು ರೀತಿಯಲ್ಲಿ ದೌರ್ಜನ್ಯಗಳು ನಡೆಯುತ್ತಲೆ ಇದೆ. ಮಹಿಳೆಯರು ಹಗಲಿನಲ್ಲೇ ನಿರ್ಭಯವಾಗಿ ಓಡಾಡಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಮಹಿಳೆಯರು ಭಯ ಪಡುವಂತಾಗಿದೆ ಎಂದು ಆರೋಪಿಸಿದರು.
ದೌರ್ಜನ್ಯಕ್ಕೆ ಹಾಗೂ ಅತ್ಯಾಚಾರಕ್ಕೆ ತುತ್ತಾದಂತಹ ಮಹಿಳೆಯರು ಸಮಾಜದಲ್ಲಿ ಬದುಕಲು ಕಷ್ಟವಾಗಿ ಸಮಾಜದಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ. ಇಷ್ಟಾದರೂ ಸಹ ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದೆ ಉಡಾಫೆಯ ಉತ್ತರಗಳನ್ನು ನೀಡುತ್ತಿವೆ. ಇದರಿಂದ ರಾಜ್ಯದಲ್ಲಿ ಮಹಿಳೆಯರಿಗೆ ಸೂಕ್ತ ರಕ್ಷಣೆ ಇಲ್ಲದಂತಾಗಿದೆ ಎಂದು ದೂರಿದರು.
ಉಡಾಫೆ ಉತ್ತರ: ಕಾನೂನು ಸುವ್ಯವಸ್ಥೆ ಸರಿಯಾಗುವರೆಗೂ ಈ ರೀತಿಯ ಅತ್ಯಾಚಾರಗಳು ನಿಯಂತ್ರಣಕ್ಕೆ ಬರುವುದಿಲ್ಲ. ಆದ್ದರಿಂದ ಸರ್ಕಾರ ಕೇವಲ ಉಡಾಫೆ ಉತ್ತರ ನೀಡುವುದನ್ನು ಬಿಟ್ಟು ಮಹಿಳೆಯರಿಗೆ ಸೂಕ್ತ ರಕ್ಷಣೆಯನ್ನು ನೀಡಬೇಕು ಎಂದು ಒತ್ತಾಯಿಸಿದರು. ಅತ್ಯಾಚಾರ ಪ್ರಕರಣಗಳು ಮತ್ತು ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿದ ಪ್ರತಿಭಟನಾಕಾರರು, ಕೂಡಲೇ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಹಿಳೆಯರಿಗೆ ವಿಶೇಷವಾದ ಭದ್ರತಾ ವ್ಯವಸ್ಥೆ ನೀಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯ ಜಿಲ್ಲಾಧ್ಯಕ್ಷ ಉಮ್ಮರ್ ಫಾರುಖ್, ಪ್ರಧಾನ ಕಾರ್ಯದರ್ಶಿ ಸಲ್ಮಾನ್, ಸಫಾನ್, ವಾಸಿಂ, ದಾವುದ್ ಹಾಗೂ ಇತರರು ಇದ್ದರು.
ಬೇಡಿಕೆಗಳು: ಅತ್ಯಾಚಾರ ಹಾಗೂ ದೌರ್ಜನ್ಯ ಎಸಗುವಂತಹ ಆರೋಪಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು. ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗೆ ಸರ್ಕಾರಗಳು ಸೂಕ್ತ ಕ್ರಮ ಕೈಗೊಳ್ಳಬೇಕು. ಈ ವಿರುದ್ಧ ಕಠಿಣ ಕಾನೂನು ವ್ಯವಸ್ಥೆಯನ್ನು ಜಾರಿಗೆ ತರಬೇಕು. ಮಹಿಳೆಯರು ಮತ್ತು ಮಕ್ಕಳು ನಿರ್ಭಯವಾಗಿ ಓಡಾಡಲು ಅನುವು ಮಾಡಿಕೊಡಬೇಕು.