ಅತ್ಯಾಚಾರ ವಿರೋಧಿಸಿ ಪ್ರತಿಭಟನೆ
ಕನ್ನಡಪ್ರಭವಾರ್ತೆ, ಅರಕಲಗೂಡು.ಜು.28
ರಾಜ್ಯದಲ್ಲಿ ಮಹಿಳೆಯರ ಮೇಲಿನ ಅತ್ಯಾಚಾರ ಖಂಡಿಸಿ ಇಲ್ಲಿನ ಪೊಟ್ಯಾಟೋ ಕ್ಲಬ್ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಸೋಮವಾರ ಬೆಳಿಗ್ಗೆ ಇಲ್ಲಿನ ಹೆಚ್.ಎನ್. ನಂಜೇಗೌಡ ವೃತ್ತದಲ್ಲಿ ಸೇರಿದ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಪೊಟ್ಯಾಟೋ ಕಬ್ ಕಾರ್ಯಕರ್ತರು ಮಾನವ ಸರಪಳಿ ನಿರ್ಮಿಸಿದರು.
ನಂತರ ತಾಲೂಕು ಕಚೇರಿ ಎದುರು ಘೋಷಣೆಗಳನ್ನು ಕೂಗಿದ ಕಾರ್ಯಕರ್ತರು, ಸರ್ಕಾರ ತಪ್ಪಿತಸ್ಥರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಮತ್ತು ಅತ್ಯಾಚಾರ ಪ್ರಕರಣಗಳ ತಡೆಗೆ ಅಗತ್ಯ ಹಾಗೂ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಬಳಿಕ ಉಪ ತಹಸೀಲ್ದಾರ್ ರಂಗರಾಜು ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಪ್ರತಿಭಟನೆಯ ನೇತೃತ್ವವನ್ನು ಪಟ್ಟಣ ಪಂಚಾಯಿತಿ ಸದಸ್ಯರುಗಳಾದ ವಾಟಾಳ್ ರಮೇಶ್, ಶಶಿಕುಮಾರ್, ಪೊಟ್ಯಾಟೋ ಕ್ಲಬ್ ಮುಖಂಡ ಎ.ಎಸ್. ಪ್ರವೀಣ್ ಮಂಜು, ಕಿರಣ್ ಇತರರು ವಹಿಸಿದ್ದರು.
ಆಲೂರು ರಸ್ತೆ ದುರಸ್ತಿಗೆ ಆಗ್ರಹ
ಆಲೂರು: ಪಟ್ಟಣದ ಮುಖ್ಯ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಮಂಡಿಯುದ್ದದ ಗುಂಡಿಗಳು ನಿರ್ಮಾಣವಾಗಿವೆ. ಇದರಿಂದಾಗಿ ವಾಹನ ಸಂಚಾರಕ್ಕೆ ತೀವ್ರ ತೊಂದರೆ ಉಂಟಾಗಿದೆ. ಆದರೂ ಸಂಬಂಧಪಟ್ಟವರು ದುರಸ್ತಿಗೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಮಳೆಗಾಲವಾದ್ದರಿಂದ ಈ ಗುಂಡಿಗಳಲ್ಲಿ ನೀರು ತುಂಬಿ ದ್ವಿಚಕ್ರ ವಾಹನ ಸಂಚಾರರು ಪ್ರತಿ ದಿನ ಅಪಘಾತಕ್ಕೀಡಾಗುತ್ತಿದ್ದಾರೆ. ರಸ್ತೆ ದುರಸ್ತಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ 2 ವಷ ಕಳೆಯುತ್ತಾ ಬಂದರೂ ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ಬೇಜವಬ್ದಾರಿತನದಿಂದಾಗಿ ಈ ಕಾಮಗಾರಿ ನೆನೆಗುದಿಗೆ ಬಿದ್ದಿದೆ.
ರಸ್ತೆ ದುರಸ್ತಿ ಕಾರ್ಯ ಪ್ರಾರಂಭವಾಗುವವರೆಗೂ ಕನಿಷ್ಠ ಗುಂಡಿಗಳನ್ನಾದರೂ ಮುಚ್ಚಲು ಮನಸ್ಸು ಮಾಡದ ಅಧಿಕಾರಿಗಳ ವಿರುದ್ದ ನಾಗರಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಶೀಘ್ರ ಗುಂಡಿಗಳನ್ನು ಮುಚ್ಚದಿದ್ದರೆ, ರಸ್ತೆ ತಡೆ ನಡೆಸಿ ಪ್ರತಿಭಟಿಸುವುದಾಗಿ ಎಚ್ಚರಿಸಿದಾರೆ.